ಸಾರಾಂಶ
ಚಿತ್ರದುರ್ಗ: ತಹಸೀಲ್ದಾರರು ತಮ್ಮ ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಿಗೆ ಖುದ್ದು ಭೇಟಿ ನೀಡಿ ವಸ್ತುಸ್ಥಿತಿ ಕುರಿತು ವರದಿ ಸಲ್ಲಿಸಬೇಕು. ಚುನಾವಣಾ ಆಯೋಗದ ನಿರ್ದೇಶನದಂತೆ ಎಲ್ಲಾ ಮೂಲಭೂತ ಸೌಕರ್ಯಗಳು ಮತಗಟ್ಟೆಗಳಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಅಂಗವಾಗಿ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳ ತರಬೇತಿ ನೀಡುವ ಕುರಿತು ಜರುಗಿದ ಸಭೆಯಲ್ಲಿ ಮಾತನಾಡಿದ ಅವರು ವಿದ್ಯುತ್, ಕುಡಿಯುವ ನೀರು, ಶೌಚಾಲಯ, ವಿಕಲಚೇತನರಿಗೆ ರ್‍ಯಾಂಪ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳು ಮತಗಟ್ಟೆ ಕೇಂದ್ರಗಳಲ್ಲಿ ಇರಬೇಕು. ಎಲ್ಲಿಯಾದರೂ ಕುಂದುಕೊರತೆ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಸರಿಪಡಿಸಬೇಕು ಎಂದರು.ಚುನಾವಣೆ ಆಯೋಗದ ನಿರ್ದೇಶನದಂತೆ ಅಗತ್ಯ ತುರ್ತು ಸೇವಾ ಕಾರ್ಯಗಳಲ್ಲಿ ತೊಡಗಿರುವ ಸಿಬ್ಬಂದಿ ಹೊರತು ಪಡಿಸಿ, ಉಳಿದ ಸಿಬ್ಬಂದಿ ಪಟ್ಟಿ ಸಿದ್ಧಪಡಿಸಿ ಚುನಾವಣೆ ಕಾರ್ಯಕ್ಕೆ ನಿಯೋಜಿಸಬೇಕು. ಚುನಾವಣೆ ಕಾರ್ಯಕ್ಕೆ ಬೇಕಾದ ಒಟ್ಟು ಸಿಬ್ಬಂದಿ ಬಲಕ್ಕೆ ಸರಿಸಮನಾಗಿ ಶೇ.20ರಷ್ಟು ಸಿಬ್ಬಂದಿ ಬಲವನ್ನು ಹೆಚ್ಚುವರಿಯಾಗಿ ಕಾಯ್ದಿರಿಸಬೇಕು. ಈ ಕುರಿತು ಎಚ್ಆರ್‌ಎಂಎಸ್ ತಂತ್ರಾಂಶದಿಂದ ಮಾಹಿತಿ ಪಡೆದುಕೊಳ್ಳಬೇಕು. ಚುನಾವಣೆ ಕಾರ್ಯಕ್ಕೆ ನಿಯುಕ್ತಿಗೊಂಡ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗೆ ಅಂಚೆ ಮತದಾನಕ್ಕೆ ಅವಕಾಶ ನೀಡಬೇಕು. ಯಾವುದೇ ಸಿಬ್ಬಂದಿ ಮತದಾನ ಪ್ರಕ್ರಿಯೆಯಿಂದ ಹೊರ ಉಳಿಯಬಾರದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.
ಎಲ್ಲಾ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳು ಚುನಾವಣೆ ಪ್ರಚಾರ ಕಾರ್ಯಕ್ಕೆ ನಿಗದಿ ಪಡಿಸಿದ ಸ್ಥಳಗಳನ್ನು ಗುರುತಿಸಿ, ಅಧಿಸೂಚನೆ ಹೊರಡಿಸಬೇಕು. ಚುನಾವಣೆ ಪ್ರಚಾರದ ಫ್ಲೆಕ್ಸ್, ಹೋರ್ಡಿಂಗ್ಸ್, ಬಂಟಿಂಗ್ಸ್‌ಗಳನ್ನು ಎಲ್ಲೆಂದರಲ್ಲಿ ಹಾಕಲು ಅನುಮತಿ ನೀಡದೆ ಇವುಗಳನ್ನು ನಿಗದಿ ಪಡಿಸಿದ ಸ್ಥಳಗಳಲ್ಲಿ ಪ್ರದರ್ಶಿಸಲು ಅವಕಾಶ ಕಲ್ಪಿಸಬೇಕು. ಈ ಸ್ಥಳಗಳ ಬಾಡಿಗೆ ನಿಗದಿಪಡಿಸಿ ಪರವಾನಿಗೆ ನೀಡಬೇಕು. ಯಾವುದೇ ಧಾರ್ಮಿಕ ಕೇಂದ್ರಗಳು, ಸರ್ಕಾರದ ಅನುದಾನದಲ್ಲಿ ನಿರ್ಮಿಸಿದ ಕಟ್ಟಡಗಳಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ಕೆ ಅನುಮತಿ ನೀಡಬಾರದು. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ. ಇದರ ವಿರುದ್ದ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ಮಾತನಾಡಿ, ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಇದುವರೆಗೆ ಜಿಲ್ಲೆಯಲ್ಲಿ 600 ಜನರ ವಿರುದ್ದ ಮುಂಜಾಗೃತಾ ಕ್ರಮವಾಗಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣದ ಬಗ್ಗೆ ಉಪವಿಭಾಗಾಧಿಕಾರಿಗಳು ಹಾಗೂ ತಾಲೂಕು ದಂಡಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು. ಇವರಿಂದ ಸೂಕ್ತ ರೀತಿಯ ಬಾಂಡ್‍ಗಳನ್ನು ತೆಗೆದುಕೊಳ್ಳುವುದು ಅಥವಾ ಗಡಿಪಾರು ಮಾಡುವ ಆದೇಶ ಹೊರಡಿಸಬೇಕಿದೆ. ಚುನಾವಣೆ ಕಾರ್ಯದಲ್ಲಿ ಪೊಲೀಸ್ ಇಲಾಖೆ ಹಿಂಬದಿಯಲ್ಲಿ ನಿಂತು ಕಾರ್ಯನಿರ್ವಹಿಸುತ್ತದೆ. ಸಾರ್ವಜನಿಕ ಆಡಳಿತದ ಅಧಿಕಾರಿಗಳೆ ಮುಂದೆ ನಿಂತು ಚುನಾವಣೆ ಕಾರ್ಯ ಜರುಗಿಸುತ್ತಾರೆ. ಚುನಾವಣಾ ಅಕ್ರಮ ಕುರಿತಂತೆ ನೇರವಾಗಿ ಪೊಲೀಸರು ಪ್ರಕರಣ ದಾಖಲಿಸಲು ಬರುವುದಿಲ್ಲ. ಸಂಬಂಧಪಟ್ಟ ಚುನಾವಣೆ ಮ್ಯಾಜಿಸ್ಟ್ರೇಟ್‍ಗಳು ಪ್ರಕರಣದ ಕುರಿತು ದೂರು ದಾಖಲಿಸಬೇಕು. ಇದರ ಆಧಾರದಲ್ಲಿ ಪೊಲೀಸರು ಗುರುತಿಸಲಾಗದ ಅಪರಾಧ [Non cognizable] ಪ್ರಕರಣ ಎಂದು ವರದಿ ಮಾಡಿಕೊಂಡು, ನ್ಯಾಯಾಲಯದ ಅನುಮತಿ ಪಡೆದು ಎಫ್‌ಐಆರ್ ದಾಖಲಿಸುತ್ತಾರೆ ಎಂದು ತಿಳಿಸಿದರು.
ಜಿಪಂ ಸಿಇಓ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಜೆ.ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ವಿವಿಧ ವಿಧಾನ ಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು, ತಹಸೀಲ್ದಾರರು ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.