ಸಾರಾಂಶ
ಬಳ್ಳಾರಿ: ನಗರದ ವೈದ್ಯಕೀಯ ಕಾಲೇಜು ಆಸ್ಪತ್ರೆ, ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಜಿಲ್ಲಾಸ್ಪತ್ರೆಯಲ್ಲಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಎಸ್‌ಯುಸಿಐ ಕಮ್ಯುನಿಷ್ಟ್ ಪಕ್ಷದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನಾ ಧರಣಿ ನಡೆಸಿದರು.
ವೈದ್ಯಕೀಯ ವಿಜ್ಞಾನ ಸಾಕಷ್ಟು ಮುಂದುವರಿದಿದೆ. ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳಿಂದ ಜನರ ಅನೇಕ ರೋಗಗಳಿಗೆ ಪರಿಹಾರ ದೊರೆಯಬಹುದಾಗಿದೆ. ಆದರೆ ನಮ್ಮ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ದುಃಸ್ಥಿತಿಯಿಂದಾಗಿ ಜನರಿಗೆ ಆರೋಗ್ಯ ಸೌಲಭ್ಯಗಳು ಸಿಗುತ್ತಿಲ್ಲ. ಇಂದಿನ ಆಧುನಿಕ ಯುಗದಲ್ಲೂ ಬಾಣಂತಿಯರ ಸಾವು ಸಂಭವಿಸುತ್ತಿವೆ. ಬಳ್ಳಾರಿ ಜಿಲ್ಲೆಯಾದ್ಯಂತ ಇರುವ ಸರ್ಕಾರಿ ಆಸ್ಪತ್ರೆಗಳು ಸಮಸ್ಯೆಗಳ ಆಗರಗಳಾಗಿವೆ. ಪಿ.ಎಚ್.ಸಿಗಳಿಂದ ಹಿಡಿದು ಜಿಲ್ಲಾಸ್ಪತ್ರೆ, ಬಳ್ಳಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯವರೆಗೂ ಸಾಕಷ್ಟು ಸಮಸ್ಯೆಗಳಿವೆ. ಅವಶ್ಯಕತೆ ಇರುವಷ್ಟು ತಜ್ಞ ಹಾಗೂ ಖಾಯಂ ವೈದ್ಯರ, ಸಿಬ್ಬಂದಿ ಹಾಗೂ ಆಧುನಿಕ ಯಂತ್ರೋಪಕರಣಗಳ ಕೊರತೆಯಿದೆ. ಅನೇಕ ಆಸ್ಪತ್ರೆಗಳಲ್ಲಿ ಕುಡಿಯುವ ನೀರು, ಶೌಚಾಲಯದಂತ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರಗಳಿಗೆ ಸಾಧ್ಯವಾಗಿಲ್ಲ. ಮತ್ತೊಂದೆಡೆ ಬಳ್ಳಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆ(ಒಪಿಡಿ)ಯಲ್ಲಿ ಬಳಕೆದಾರರ ಶುಲ್ಕವು ಅತ್ಯಂತ ದುಬಾರಿಯಾಗಿದೆ. ಬಿಪಿಎಲ್ ಕಾರ್ಡ್ ದಾರರಿಗೂ ಶುಲ್ಕಗಳನ್ನು ವಿಧಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಪಕ್ಷದ ಜಿಲ್ಲಾ ಕಾರ್ಯದರ್ಶಿ ರಾಧಾಕೃಷ್ಣ ಉಪಾಧ್ಯ ಹಾಗೂ ಜಿಲ್ಲಾ ಸಮಿತಿ ಸದಸ್ಯೆ ಎಂ.ಎನ್. ಮಂಜುಳಾ ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿನ ಅವ್ಯವಸ್ಥೆ ಹಾಗೂ ಸರ್ಕಾರದ ನಿರ್ಲಕ್ಷ್ಯ ಧೋರಣೆ ಕುರಿತು ಮಾತನಾಡಿದರು.
ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಡಾ.ಎನ್. ಪ್ರಮೋದ್ ಹಾಗೂ ಸೋಮಶೇಖರ್ ಗೌಡ ಬಳ್ಳಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆ (ಒಪಿಡಿ), ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಹಾಗೂ ಪಿ.ಎಚ್.ಸಿಗಳ ಗುಣಮಟ್ಟವನ್ನು ಉತ್ತಮ ಪಡಿಸಬೇಕು. ರಾಜ್ಯದಲ್ಲಿ ಹೆಚ್ಚುತ್ತಿರುವ ಬಾಣಂತಿ ಮತ್ತು ನವಜಾತ ಶಿಶುವಿನ ಸಾವನ್ನು ತಡೆಗಟ್ಟಬೇಕು. ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಅಗತ್ಯಕ್ಕನುಗುಣವಾಗಿ ಬಳ್ಳಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆ, ಜಿಲ್ಲಾಸ್ಪತ್ರೆ ಸೇರಿದಂತೆ ವಿವಿಧ ಹಂತದ ಆಸ್ಪತ್ರೆಗಳಲ್ಲಿ ಕಾಯಂ ವೈದ್ಯರು ಹಾಗೂ ಇನ್ನಿತರ ಸಿಬ್ಬಂದಿ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.ಪಕ್ಷದ ಮುಖಂಡರಾದ ಎ.ದೇವದಾಸ್, ಗೋವಿಂದ್, ಈಶ್ವರಿ, ಸುರೇಶ, ಜಗದೀಶ್, ರವಿಕಿರಣ್, ವಿದ್ಯಾ, ಈರಣ್ಣ, ಪಂಪಾಪತಿ, ವಿಜಯಲಕ್ಷ್ಮಿ, ಸೌಮ್ಯ, ಬಸಣ್ಣ, ಖಾಸಿಂ ಸಾಬ್, ಲಿಂಗಪ್ಪ, ವಹೀಧಾ, ಶಾಮ್ ಸುಂದರ್, ಬಳ್ಳಾರಿ ನಾಗರಿಕ ಹೋರಾಟ ಸಮಿತಿಯ ತಾಂತ್ರಿಕ ಸಲಹೆಗಾರ ನಿವೃತ್ತ ಮುಖ್ಯ ಎಂಜಿನಿಯರ್ ಉದ್ದಿಹಾಳ್ ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಧರಣಿ ಮುನ್ನ ಪಕ್ಷದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ತಲುಪಿದರು.