ಮುಂದಿನ ಫೆ.18ರಿಂದ ಹತ್ತು ದಿನಗಳ ಕಾಲ ನಡೆಯಲಿರುವ ಐತಿಹಾಸಿಕ ಶ್ರೀ ಗೊಮ್ಮಟೇಶ್ವರಸ್ವಾಮಿಯ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಕಾರ್ಕಳಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ವಿಶೇಷ ಅನುದಾನ ನೀಡಬೇಕು ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಲವು ಬೇಡಿಕೆಗಳನ್ನು ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಂದಿಟ್ಟಿದ್ದಾರೆ.

ಕಾರ್ಕಳ: ಮುಂದಿನ ಫೆ.18ರಿಂದ ಹತ್ತು ದಿನಗಳ ಕಾಲ ನಡೆಯಲಿರುವ ಐತಿಹಾಸಿಕ ಶ್ರೀ ಗೊಮ್ಮಟೇಶ್ವರಸ್ವಾಮಿಯ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಕಾರ್ಕಳಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ವಿಶೇಷ ಅನುದಾನ ನೀಡಬೇಕು ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಲವು ಬೇಡಿಕೆಗಳನ್ನು ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಂದಿಟ್ಟಿದ್ದಾರೆ.

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಸುನಿಲ್ ಕುಮಾರ್ ಅವರು, ಮಹಾಮಸ್ತಕಾಭಿಷೇಕಕ್ಕೆ ದೇಶ-ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಹಾಗೂ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿರುವುದರಿಂದ ಕಾರ್ಕಳದಲ್ಲಿ ರಸ್ತೆ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಅನುದಾನ ಬಿಡುಗಡೆ: ಇದೇ ವೇಳೆ ಕಾರ್ಕಳ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಬಾಕಿ ಇರುವ ಅನುದಾನಗಳ ಬಿಡುಗಡೆ ಹಾಗೂ ಹೊಸ ಯೋಜನೆಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡುವ ಕುರಿತು ಚರ್ಚಿಸಲಾಯಿತು. 18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಸಮಗ್ರ ಹಾಗೂ ದೀರ್ಘಕಾಲಿಕ ಅಭಿವೃದ್ಧಿಗೆ ಪೂರಕವಾದ ಶಾಶ್ವತ ಯೋಜನೆಗಳನ್ನು ರೂಪಿಸುವಂತೆ ಮನವಿ ಮಾಡಿದರು.

ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವುದು, ಕರಾವಳಿಯ ಕಂಬಳ ಕ್ರೀಡಾಕೂಟಗಳಿಗೆ ಹೆಚ್ಚಿನ ಅನುದಾನ, ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಹಾಗೂ ರಾಮಸಮುದ್ರ ಕೆರೆ ಮತ್ತು ಉದ್ಯಾನವನ ಅಭಿವೃದ್ಧಿ, ವರಂಗ ಚತುರ್ಮುಖ ಕೆರೆ ಬಸದಿ ಹಾಗೂ ಹೆಬ್ರಿ ತಾಲೂಕಿನ ಕೂಡ್ಲು ಫಾಲ್ಸ್ ಅಭಿವೃದ್ಧಿಗೂ ಅಗತ್ಯ ಅನುದಾನ ನೀಡುವಂತೆ ಒತ್ತಾಯಿಸಿದರು.

ಕಾರ್ಕಳದ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯುವ ವಿಶ್ವಾಸವಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಕಳದ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯುವ ವಿಶ್ವಾಸವಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.