ಸಾರಾಂಶ
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯಾಧಿಕಾರಿಗಳೆ ಕೊರತೆ ಇದೆ. ಹಗಲೂ ನುರಿತ ವೈದ್ಯಾಧಿಕಾರಿಗಳು ಇಲ್ಲದೆ ಬಡ ಜನತೆ ಖಾಸಗಿ ಚಿಕಿತ್ಸಾ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುವ ಅರ್ನಿವಾಯ ಪರಿಸ್ಥಿತಿ ಎದುರಾಗಿದೆ.ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ದಲ್ಲಿ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಅಧಿಕಾರಿಗಳ ವಿರುದ್ಧ ಪ್ರತಿಭಟಿಸಲಾಗುವುದು ಎಂದು ಸುಂಟಿಕೊಪ್ಪ ಎಸ್‌ಡಿಪಿಐ ಮುಖಂಡ ಕೆ.ಎ.ಲತೀಫ್ ತಿಳಿಸಿದ್ದಾರೆ.
ಸುಂಟಿಕೊಪ್ಪ ಆರೋಗ್ಯ ಕೇಂದ್ರದಕ್ಕೆ 7 ಗ್ರಾಮ ಪಂಚಾಯಿತಿ ಒಳಗೊಂಡಿದ್ದು ಅಂದಾಜು 20 ಸಾವಿರಕ್ಕೂ ಮಿಕ್ಕಿ ಜನ ಸಂಖ್ಯೆ ಹೊಂದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರೇ ನೆಲೆಸಿದ್ದು, ತುರ್ತು ಚಿಕಿತ್ಸೆಗಳಿಗೆ ಈ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೇ ಅವಲಂಬಿಸಿದ್ದಾರೆ.ದಿನವೊಂದಕ್ಕೆ ಕನಿಷ್ಠ 150ಕ್ಕೂ ಮಿಕ್ಕಿ ಕೂಲಿ ಕಾರ್ಮಿಕರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ಆಗಮಿಸುತ್ತಾರೆ. ಈ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನುರಿತ ವೈದ್ಯಾಧಿಕಾರಿಗಳು ಇಲ್ಲದಿದ್ದರೂ ನುರಿತ ಶೂಶ್ರೂಷಕಿಯರಿಂದ ಕನಿಷ್ಠ ಪ್ರಾಥಮಿಕ ಚಿಕಿತ್ಸೆ ದೊರೆಯುತ್ತಿದೆ. ತಿಂಗಳಿಗೆ ಕನಿಷ್ಠ 10 ಪ್ರಸೂತಿ ಕಾರ್ಯ ನಡೆಯುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಿಂದಾಗ್ಗೆ ಅಧಿಕಾರಿಗಳು ಭೇಟಿ ನೀಡಿ ತೆರಳುತ್ತಿದ್ದರೂ ಹೆಚ್ಚಿನ ಸಿಬ್ಬಂದಿ ನಿಯೋಜಿಸಲು ಮುಂದಾಗದಿರುವುದು ಅಧಿಕಾರಿಗಳ ಕಾರ್ಯವೈಖರಿ ಹಾಗೂ ನಿರ್ಲಕ್ಷ್ಯದ ಬಗ್ಗೆ ಅಸಾಮಾಧಾನ ವ್ಯಕ್ತಪಡಿಸಿದ್ದಾರೆ.
ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶೂಶ್ರಷಕಿಯರೇ ಅತೀ ಹೆಚ್ಚು ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ. ಸರ್ಕಾರದ ಆದೇಶದ ಮೇರೆಗೆ 3 ಮಂದಿಯನ್ನು ನೇಮಿಸಲಾಗಿದೆ. ಆದರೆ ಇಲ್ಲಿನ ಪ್ರಸೂತಿ ಕಾರ್ಯಗಳ ಸಂದರ್ಭ ರೋಗಿಗಳು ಗಂಟೆಗಟ್ಟಲೆ ಕಾಯುವಂತ ಪರಿಸ್ಥಿತಿ ನಿರ್ಮಾಣಗೊಳ್ಳುತ್ತಿದೆ. ಅಧಿಕಾರಿಗಳು ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಕ್ರಮ ಕೈಗೊಳ್ಳದೆ ಹೆಚ್ಚುವರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನುರಿತ ಸಿಬ್ಬಂದಿಯನ್ನು ಏಕಾಏಕಿ ಮೂಲಸ್ಥಾನಕ್ಕೆ ವರ್ಗಾವಣೆಗೊಳಿಸುವ ಮೂಲಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಮಸ್ಯೆ ಉಲ್ಬಣಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆಂದು ಫೈರೋಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸಮಸ್ಯೆ ಪರಿಹಾರ ಆಗದಿದ್ದರೆ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಎಸ್‌ಡಿಪಿಐ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.