ಬಯಲು ಸೀಮೆ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ

| Published : Apr 16 2024, 01:03 AM IST

ಸಾರಾಂಶ

ಮಧ್ಯಕರ್ನಾಟಕದ ಬಯಲು ಸೀಮೆ ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸುವಂತೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮನವಿ ಮಾಡಿದರು.

ಚಿತ್ರದುರ್ಗ: ಮಧ್ಯಕರ್ನಾಟಕದ ಬಯಲು ಸೀಮೆ ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸುವಂತೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮನವಿ ಮಾಡಿದರು.

ಸೋಮವಾರ ಚಿತ್ರದುರ್ಗದ ವಿವಿಧ ಬಡಾವಣೆಗಳಿಗೆ ತೆರಳಿ ಮತಯಾಚಿಸಿದ ಅವರು, ಚಿತ್ರದುರ್ಗ ಜಿಲ್ಲೆಯ ಬಹುದಿನ ಕನಸಾದ ಭದ್ರಾ ಮೇಲ್ದಂಡೆ ಯೋಜನೆಗೆ ಬಿಜೆಪಿ ಅಧಿಕಾರದ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಅದರಂತೆ ನೇರ ರೈಲು ಮಾರ್ಗ ನಿರ್ಮಾಣ, ಮೆಡಿಕಲ್ ಕಾಲೇಜು ಆರಂಭಿಸಿದ್ದು, ಬಿಜೆಪಿ ತಾವು ನೀರಾವರಿ ಸಚಿವನಾಗಿ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಕೊಡಿಸುವಲ್ಲಿ ಶ್ರಮವಹಿಸಿದ್ದೇನೆ ಎಂದರು.

ಇನ್ನೂ ಸಾಕಷ್ಟು ಅಭಿವೃದ್ಧಿ ಕೆಲಸಗಳು ಜಿಲ್ಲೆಯಲ್ಲಿ ಬಾಕಿ ಇವೆ. ಶಾಶ್ವತ ನೀರಾವರಿ ಸೌಲಭ್ಯ, ಜಿಲ್ಲೆಯ ದುಡಿಯುವ ಕೈಗಳಿಗೆ ಕೆಲಸ ನೀಡಬೇಕಿದೆ. ಜಿಲ್ಲೆಯಲ್ಲಿ ಶೋಷಿತ ಸಮುದಾಯದ ಜನರೇ ಹೆಚ್ಚಾಗಿ ವಾಸಿಸುತ್ತಿದ್ದು ಬಡತನದಲ್ಲೇ ಜೀವನ ಸಾಗಿಸುತ್ತಿದ್ದಾರೆ. ಇವರೆಲ್ಲರೂ ನೆಮ್ಮದಿಯ ಜೀವನ ನಡೆಸಬೇಕಿದೆ. ಈ ನಿಟ್ಟಿನಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿಯಾದ ನನ್ನನ್ನು ಬಹು ಮತಗಳ ಅಂತರದಿಂದ ಗೆಲ್ಲಿಸಬೇಕು. ಆ ಮೂಲಕ ಜಿಲ್ಲೆಯ ಜನರ ಸೇವೆ ಮಾಡುವ ಅವಕಾಶ ಮಾಡಿಕೊಡಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.

ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಶಾಸಕ ಜಿ.ಎಚ್ ತಿಪ್ಪಾರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ರಾಜ್ಯ ರೈತ ಮೋರ್ಚ ಕಾರ್ಯದರ್ಶಿ ಮಲ್ಲಿಕಾರ್ಜುನ್, ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಬಿಜೆಪಿ ಮಹಿಳಾ ಮೋರ್ಚ ಜಿಲ್ಲಾಧ್ಯಕ್ಷೆ ಶೈಲಜಾ ರೆಡ್ಡಿ, ಡಿ.ಓ.ಮುರಾರ್ಜಿ, ಐಶ್ವರ್ಯ ಅರುಣ್‍ಕುಮಾರ್, ಬೋವಿ ಸಮಾಜದ ಮುಖಂಡ ತಿಮ್ಮಣ್ಣ, ಲೀಲಾವತಿ, ನಗರಸಭೆ ಸದಸ್ಯರಾದ ರೋಹಿಣಿ ನವೀನ್, ಶ್ವೇತಾ ವೀರೇಶ್, ಹರೀಶ್, ಸುರೇಶ್, ಜಿ.ಎನ್.ಮಲಿಕಾರ್ಜುನ್, ಹೆಗ್ಗನಗೌಡ, ಮುರುಗೇಶ್ ಗೌಡ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಚಿತ್ರದುರ್ಗಕ್ಕಿಂದ ಬಿಎಸ್‌ವೈ, ಬಿ.ಎಲ್ ಸಂತೋಷ್: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್‍ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಪರ ಚುನಾವಣಾ ಪ್ರಚಾರ ಸಂಬಂಧ ಏ.16ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ.ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ.ಕನ್ವೆನ್ಷನ್ ಹಾಲ್‍ನಲ್ಲಿ ಬೆಳಗ್ಗೆ 11 ಗಂಟೆಗೆ ಎನ್‍ಡಿಎ ಬೆಂಬಲಿತ ವೀರಶೈವ ಲಿಂಗಾಯತ ಪ್ರಮುಖರ ಸಭೆ ಹಮ್ಮಿಕೊಳ್ಳಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸುವರು. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್‍ಡಿಎ ಅಭ್ಯರ್ಥಿ ಗೋವಿಂದ ಕಾರಜೋಳ ಉಪಸ್ಥಿತರಿರುವರು. ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ್, ಮಾಜಿ ಸಚಿವರಾದ ಜೆ.ಸಿ.ಮಾದುಸ್ವಾಮಿ, ಮುರುಗೇಶ್ ನಿರಾಣಿ ಕಾರ್ಯಕ್ರಮಕ್ಕೆ ಆಗಮಿಸುವರು. ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ತಿಪ್ಪೇಸ್ವಾಮಿ, ಎಸ್.ಕೆ.ಬಸವರಾಜನ್, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಎಸ್.ಲಿಂಗಮೂರ್ತಿ, ಜಿಲ್ಲಾಧ್ಯಕ್ಷ ಎ.ಮುರುಳಿ ಭಾಗವಹಿಸುವರು.

ನಗರದ ಅರಣ್ಯ ಇಲಾಖೆ ಎದುರಿನ ಉಮಾಪತಿ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 3 ಗಂಟೆಗೆ ಬಿಜೆಪಿ ಶಕ್ತಿಕೇಂದ್ರ ಪ್ರಮುಖರೊಂದಿಗೆ ಸಭೆ ಕರೆಯಲಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಉದ್ಘಾಟಿಸುವರು. ಶಕ್ತಿಕೇಂದ್ರದ ಪ್ರಮುಖರು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು, ವಿಧಾನಸಭಾ ಪ್ರಭಾರಿಗಳು ಮತ್ತು ಸಂಚಾಲಕರು ಭಾಗವಹಿಸುವರು.