ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ನವೆಂಬರ್ 18ರಿಂದ ರಾಜ್ಯದಾದ್ಯಂತ ಶಾಲಾ ಕಾಲೇಜುಗಳನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡಿ ಹೋರಾಟ ನಡೆಸುವುದಾಗಿ ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಅಡಳಿತ ಮಂಡಳಿಯ ಸಂಘದ ರಾಜ್ಯಾಧ್ಯಕ್ಷ ರೇವಣಸಿದ್ದಪ್ಪ ಜಲಾದೆ ತಿಳಿಸಿದರು.
ಕನ್ನಡಪ್ರಭ ವಾರ್ತೆ ಬೀದರ್
ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ನವೆಂಬರ್ 18ರಿಂದ ರಾಜ್ಯದಾದ್ಯಂತ ಶಾಲಾ ಕಾಲೇಜುಗಳನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡಿ ಹೋರಾಟ ನಡೆಸುವುದಾಗಿ ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಅಡಳಿತ ಮಂಡಳಿಯ ಸಂಘದ ರಾಜ್ಯಾಧ್ಯಕ್ಷ ರೇವಣಸಿದ್ದಪ್ಪ ಜಲಾದೆ ತಿಳಿಸಿದರು.ಅವರು ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಅವರು, ಕಳೆದ ಮೂರ್ನಾಲ್ಕು ವರ್ಷಗಳಿಂದ ‘ಕನ್ನಡ ಶಾಲೆಗಳ ಉಳಿಸಿ- ಶಿಕ್ಷಣ ಉಳಿಸಿ’ ಅಭಿಯಾನದಡಿ ನಿರಂತರ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳ ಬೇಡಿಕೆಗಳ ಈಡೇರಿಕೆಯಲ್ಲಿ ತೋರುತ್ತಿರುವ ನಿರ್ಲಕ್ಷ್ಯವನ್ನು ಖಂಡಿಸಿ, ನ.17ರಂದು ಧಾರವಾಡದಲ್ಲಿ ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಅವರ ನೇತೃತ್ಚದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕಲ್ಯಾಣ ಕರ್ನಾಟಕ ಅನುದಾನ ರಹಿತ ಶಾಸಗಿ ಶಾಲೆಗಳು ಹಾಗೂ ರಾಜ್ಯ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಅಡಳಿತ ಮಂಡಳಿ ಸಂಘ ನಿರ್ಧರಿಸಿದೆ ಎಂದರು.1995ರ ನಂತರ ಆರಂಭವಾದ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕು. ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆಯಲ್ಲಿರುವ ಕ್ಲಿಷ್ಟಕರ ನಿಯಮಗಳನ್ನು ಸರಳೀಕರಣಗೊಳಿಸಬೇಕು. ಕಳೆದ ಆರು ವರ್ಷಗಳಿಂದ ಸ್ಥಗಿತಗೊಂಡಿರುವ ಆರ್ಟಿಇ (ಶಿಕ್ಷಣ ಹಕ್ಕು ಕಾಯ್ದೆ) ಅಡಿ ಉಚಿತ ಶಿಕ್ಷಣ ಸೌಲಭ್ಯವನ್ನು ಮರುಜಾರಿಗೊಳಿಸಬೇಕು, ನಿವೃತ್ತ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಅನುದಾನ ರಹಿತ ಖಾಸಗಿ ಶಾಲಾ ಅಡಳಿತ ಮಂಡಳಿ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರ ಮಣಗೀರೆ ಮಾತನಾಡಿ, ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳಿಗೆ ದತ್ತು ನೀಡುವ ಸರ್ಕಾರದ ಚಿಂತನೆಗೂ ವಿರೋಧ ವ್ಯಕ್ತಪಡಿಸಿರುವ ಅವರು, ಸರ್ಕಾರಿ ಶಾಲೆಗಳ ನಿರ್ವಹಣೆ ಹಾಗೂ ಶಿಕ್ಷಣದ ಗುಣಮಟ್ಟ ಕಾಪಾಡುವುದು ಸರ್ಕಾರ ದ ಜವಾಬ್ದಾರಿ. ಅದನ್ನು ಖಾಸಗಿಯವರ ಹೆಗಲಿಗೆ ಹಾಕುವ ಬದಲು ಅಗತ್ಯ ಶಿಕ್ಷಕರ ನೇಮಕಾತಿ ಮತ್ತು ಮೂಲ ಸೌಕರ್ಯ ಒದಗಿಸಬೇಕು ಎಂದರು.ಸರ್ಕಾರಿ ಶಾಲಾ ಶಿಕ್ಷಕರಿಗೆ ಅತಿಯಾದ ಒತ್ತಡ, ಅವರ ಬಗ್ಗೆ ಅವಹೇಳನ, ಖಂಡನೀಯ:
ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಬೋಧನೆಯ ಜತೆಗೆ ಬಿಸಿಯೂಟ ಸೇರಿದಂತೆ ಹಲವು ಆಡಳಿತಾತ್ಮಕ ಹಾಗೂ ಲೆಕ್ಕಪತ್ರಗಳ ಜವಾಬ್ದಾರಿ ವಹಿಸಿರುವುದರಿಂದ ಬೋಧನಾ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ. ಸಾವಿರಾರು ಶಿಕ್ಷಕರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅವರ ಬಗ್ಗೆ ಅವಹೇಳನ ಕಾರಿ ಹೇಳಿಕೆಗಳು ವ್ಯಕ್ತವಾಗಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.ಹುಬ್ಬಳ್ಳಿಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಬೀದರ್ ಜಿಲ್ಲೆಯ 8 ತಾಲೂಕುಗಳಿಂದ ಒಂದು ಸಾವಿರಕ್ಕೂ ಹೆಚ್ಚು ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕರು ಭಾಗವಹಿಸಲಿದ್ದಾರೆ. ಶಿಕ್ಷಣ ವ್ಯವಸ್ಥೆಯ ಉಳಿವಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸಾಹಿತಿಗಳು, ಶಿಕ್ಷಣ ತಜ್ಞರು, ಕನ್ನಡಪರ ಸಂಘಟನೆಗಳು ಹಾಗೂ ಕನ್ನಡಾ ಭಿಮಾನಿಗಳು ಬೆಂಬಲ ನೀಡಬೇಕು ಎಂದು ಮಣಗೀರೆ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ಗುರುನಾಥ ರಡ್ಡಿ, ಜಿಲ್ಲಾ ಘಟಕದ ಸಲಹಾ ಸಮಿತಿ ಸದಸ್ಯರಾದ ಗುಂಡಯ್ಯ ತೀರ್ಥ, ಔರಾದ್ ತಾಲೂಕಾಧ್ಯಕ್ಷ ಗುರುನಾಥ ದೇಶಮುಖ, ಕಮಲನಗರ ತಾಲೂಕಾಧ್ಯಕ್ಷ ರಾಜಕುಮಾರ ಹಮಿಲಪುರೆ, ನೈಟಿಂಗೇಲ್ ಶಾಲೆಯ ದೇವಿದಾಸ ಸೇರಿದಂತೆ ಸಂಘಟನೆಯ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.