ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಳೆದ ಹತ್ತು ದಿನಗಳಿಂದ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿಗೆ ಜನಪರ ಸಂಘ-ಸಂಸ್ಥೆಗಳಿಂದ ಬೆಂಬಲ ವ್ಯಕ್ತಪಡಿಸಲಾಯಿತು.
ಕನ್ನಡಪ್ರಭ ವಾರ್ತೆ ರಾಯಚೂರು
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲಿಸಿ, ಅವರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದನ್ನು ಖಂಡಿಸಿ ಜನಪರ ಸಂಘ-ಸಂಸ್ಥೆಗಳಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಸೇರಿದ ಮುಖಂಡರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಳೆದ ಹತ್ತು ದಿನಗಳಿಂದ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿಗೆ ಬೆಂಬಲ ಸೂಚಿಸಿ,ರಾಜ್ಯ ಸರ್ಕಾರದ ವಿಳಂಬ ಧೋರಣೆಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15 ಸಾವಿರ ಗೌರವಧನ ನಿಗದಿಪಡಿಸಬೇಕು. ನಿವೃತ್ತಿ ಸಂದರ್ಭದಲ್ಲಿ ₹5 ಲಕ್ಷ ಇಡುಗಂಟು ನೀಡಬೇಕು ಸೇರಿದಂತೆ ಒಟ್ಟು ಎಂಟು ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು. ಜನರ ಆರೋಗ್ಯ ಸೇವೆಯಲ್ಲಿ ಹಗಲಿರುಳು ದುಡಿಯುವ ಕಾರ್ಯಕರ್ತೆಯರಿಗೆ ಸರ್ಕಾರ ಕನಿಷ್ಠ ಆರ್ಥಿಕ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.ಹತ್ತು ದಿನಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಿರುವ ಕಾರ್ಯಕರ್ತೆಯರಲ್ಲಿ ಹಲವರು ಅನಾರೋಗ್ಯಕ್ಕೆ ಒಳಗಾಗಿದ್ದರೂ ಸರ್ಕಾರ ಗಮನಹರಿಸದಿರುವುದು ವಿಷಾದನೀಯ. ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿರುವ ಮಹಿಳೆಯರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ಮಾಸಿಕ ₹10 ಸಾವಿರ ಗೌರವಧನ ನೀಡುವ ಭರವಸೆ ನೀಡಿದ್ದರೂ ಅದು ಸಮರ್ಪಕವಾಗಿ ಜಾರಿ ಯಾಗಿಲ್ಲ. ಆಶಾ ಕಾರ್ಯಕರ್ತೆಯರ ಸೇವೆಯನ್ನು ಕೇವಲ ಪ್ರಶಂಸಿಸುವುದರಿಂದ ಅವರ ಬದುಕು ಸುಧಾರಿಸುವುದಿಲ್ಲ. ಘೋಷಣೆಗಳ ಬದಲಿಗೆ ಕಾರ್ಯರೂಪದ ಕ್ರಮಗಳು ಅಗತ್ಯವಾಗಿವೆ. ಕೂಡಲೇ ಮಾತುಕತೆ ನಡೆಸಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.ಈ ಪ್ರತಿಭಟನೆಯಲ್ಲಿ ಸಂಘಟನೆಗಳ ಮುಖಂಡರಾದ ಡಾ. ಚಂದ್ರಗಿರೀಶ, ಎಂ.ಆರ್.ಭೇರಿ, ರಾಮಣ್ಣ, ಡಾ.ಶಾರದಾ ಹುಲಿ ನಾಯಕ, ಮಹೇಂದ್ರ ಸಿಂಗ್, ಹಯ್ಯಾಳಪ್ಪ, ವೀರೇಶ ಬಾಬು, ಬಸವರಾಜ, ಶಿವಪ್ಪ, ಶೋಭಾ, ವಿಮಲ, ವಿನೋದ ಸೇರಿದಂತೆ ಜನಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.