ಪದವೀಧರರು ಮತ್ತು ಯುವಜನರ ಧ್ವನಿಯಾಗಿ ವಿಧಾನಮಂಡಲದಲ್ಲಿ ಪರಿಣಾಮಕಾರಿಯಾಗಿ ಮಾತನಾಡುವ ಹಾಗೂ ಅವರ ನೈಜ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಶ್ರಮಿಸುವ ಪ್ರತಿನಿಧಿಯ ಅಗತ್ಯವಿದೆ.

ಕಾರವಾರ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರಿಗೆ ಪದವೀಧರರು ಬೆಂಬಲ ನೀಡುವ ಮೂಲಕ ಗೆಲುವಿಗೆ ಸಹಕರಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ ಮನವಿ ಮಾಡಿದರು.

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕುಗಳ ವಿವಿಧ ಶಿಕ್ಷಣ ಸಂಸ್ಥೆಗಳು, ಬ್ಯಾಂಕ್‌ಗಳು ಮತ್ತು ಕಚೇರಿಗಳಿಗೆ ಭೇಟಿ ನೀಡಿದ ಅವರು, ಬಿಜೆಪಿ ಅಭ್ಯರ್ಥಿ ಸಂಕನೂರ ಪರ ಮತಯಾಚಿಸಿದರು.

ಕುಮಟಾದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜು, ಡಾ. ಎ.ವಿ. ಬಾಳಿಗಾ ಕಾಲೇಜು, ಕೆಡಿಸಿಸಿ ಬ್ಯಾಂಕ್ ಹಾಗೂ ಅರ್ಬನ್ ಬ್ಯಾಂಕ್‌ಗೆ ಭೇಟಿ ನೀಡಿ ಪದವೀಧರರು ಮತ್ತು ಸಿಬ್ಬಂದಿಯನ್ನು ಸಂಪರ್ಕಿಸಿದರು. ಬಳಿಕ ಹೊನ್ನಾವರದ ಎಲ್‌ಐಸಿ ಕಚೇರಿ ಹಾಗೂ ಎಸ್‌ಡಿಎಂ ಪದವಿ ಕಾಲೇಜಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಭಟ್ಕಳದ ಅರ್ಬನ್ ಬ್ಯಾಂಕ್ ಮತ್ತು ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಸಹಕಾರಿ ಬ್ಯಾಂಕ್‌ಗಳಲ್ಲಿಯೂ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರೂಪಾಲಿ ಎಸ್. ನಾಯ್ಕ ಅವರು, ಪದವೀಧರರು ಮತ್ತು ಯುವಜನರ ಧ್ವನಿಯಾಗಿ ವಿಧಾನಮಂಡಲದಲ್ಲಿ ಪರಿಣಾಮಕಾರಿಯಾಗಿ ಮಾತನಾಡುವ ಹಾಗೂ ಅವರ ನೈಜ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಶ್ರಮಿಸುವ ಪ್ರತಿನಿಧಿಯ ಅಗತ್ಯವಿದೆ. ಪದವೀಧರರ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸಿ, ಅವರ ಹಕ್ಕುಗಳು ಮತ್ತು ಬೇಡಿಕೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಸ್ಪರ್ಧಿಸಿದ್ದಾರೆ. ಹೀಗಾಗಿ ಪದವೀಧರರು ಸಂಕನೂರ ಅವರಿಗೆ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.

ಚುನಾವಣಾ ಪ್ರಚಾರದ ವೇಳೆ ಮಾಜಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಜಿಲ್ಲಾ ಉಪಾಧ್ಯಕ್ಷ ಗಜಾನನ ಗುನಗ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ, ಕುಮಟಾ ಮಂಡಲದ ಅಧ್ಯಕ್ಷ ಜಿ.ಐ. ಹೆಗಡೆ, ಹೊನ್ನಾವರ ಮಂಡಲದ ಅಧ್ಯಕ್ಷ ಯೋಗೇಶ ಮೇಸ್ತ, ಯುವ ಮುಖಂಡ ಪರ್ಬತ್ ನಾಯ್ಕ, ರಾಜು ಭಂಡಾರಿ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಭಟ್ಕಳ ಹಾಗೂ ಮಂಕಿಯಲ್ಲಿ ಮಾಜಿ ಶಾಸಕ ಸುನೀಲ ನಾಯ್ಕ, ಗೋವಿಂದ ನಾಯ್ಕ, ಶ್ರೀಕಾಂತ ನಾಯ್ಕ, ಸುಬ್ರಾಯ ದೇವಾಡಿಗ, ಈಶ್ವರ ನಾಯ್ಕ ಹಾಗೂ ಮಂಡಲದ ಅಧ್ಯಕ್ಷ ಲಕ್ಷ್ಮೀನಾರಾಯಣ ಸೇರಿದಂತೆ ಬಿಜೆಪಿ ಮುಖಂಡರು ಭಾಗವಹಿಸಿದ್ದರು. ಮಂಕಿ ಮಂಡಳದಲ್ಲಿ ಸಭೆ ನಡೆಸಿದ ರೂಪಾಲಿ ಎಸ್. ನಾಯ್ಕ ಅವರು ಸಂಕನೂರ ಅವರನ್ನು ಬೆಂಬಲಿಸುವಂತೆ ಕೋರಿದರು.