ಮೇಕೆದಾಟು ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು

| Published : Nov 15 2025, 01:30 AM IST

ಸಾರಾಂಶ

ಕಾಂಗ್ರೆಸ್ ಮುಖಂಡರಾದ ಹಾಸನ ವಿಧಾನಸಭಾ ಕ್ಷೇತ್ರದ ರಂಗಸ್ವಾಮಿ ಬನವಾಸೆ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಹಾಗೂ ಮುಖಂಡ ಎಚ್.ಕೆ. ಮಹೇಶ್ ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕ ಸರ್ಕಾರಕ್ಕೆ ಮೇಕೆದಾಟು ಯೋಜನೆ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಗೆಲುವು ಸಿಕ್ಕಿದೆ. ಯೋಜನೆಗೆ ೭ ವರ್ಷಗಳಿಂದ ಅಡ್ಡಗಾಲು ಹಾಕುತ್ತಾ ಬರುತ್ತಿದ್ದ ತಮಿಳುನಾಡಿಗೆ ಮುಖಭಂಗವಾಗಿದೆ. ಯೋಜನೆ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ, ಯೋಜನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಕರ್ನಾಟಕಕ್ಕೆ ಮೊದಲ ಜಯ ಸಿಕ್ಕಂತಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ಹಲವು ವರ್ಷಗಳ ಬೇಡಿಕೆಯಾಗಿದ್ದ ಮೇಕೆದಾಟು ಯೋಜನೆ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ದೊಡ್ಡ ಗೆಲುವು ಸಿಕ್ಕಿದ ಹಿನ್ನೆಲೆಯಲ್ಲಿ ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಶುಕ್ರವಾರ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯಿತು.

ಇದೇ ವೇಳೆ ಕಾಂಗ್ರೆಸ್ ಮುಖಂಡರಾದ ಹಾಸನ ವಿಧಾನಸಭಾ ಕ್ಷೇತ್ರದ ರಂಗಸ್ವಾಮಿ ಬನವಾಸೆ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಹಾಗೂ ಮುಖಂಡ ಎಚ್.ಕೆ. ಮಹೇಶ್ ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕ ಸರ್ಕಾರಕ್ಕೆ ಮೇಕೆದಾಟು ಯೋಜನೆ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ದೊಡ್ಡ ಗೆಲುವು ಸಿಕ್ಕಿದೆ. ಯೋಜನೆಗೆ ೭ ವರ್ಷಗಳಿಂದ ಅಡ್ಡಗಾಲು ಹಾಕುತ್ತಾ ಬರುತ್ತಿದ್ದ ತಮಿಳುನಾಡಿಗೆ ಮುಖಭಂಗವಾಗಿದೆ. ಯೋಜನೆ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ, ಯೋಜನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಕರ್ನಾಟಕಕ್ಕೆ ಮೊದಲ ಜಯ ಸಿಕ್ಕಂತಾಗಿದೆ ಎಂದರು.

ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಆ ಅರ್ಜಿಯನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ ಯೋಜನೆಗೆ ಮುಂದುವರೆಯಲು ಕರ್ನಾಟಕಕ್ಕೆ ಹಸಿರು ನಿಶಾನೆ ಸಿಕ್ಕಂತಾಗಿದೆ. ಮೇಕೆದಾಟು ಯೋಜನೆ ಪ್ರಶ್ನಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರಿದ್ದ ಪೀಠ, ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಮೇಕೆದಾಟು ಯೋಜನೆಯು ಇನ್ನೂ ಆರಂಭಿಕ ಹಂತದಲ್ಲಿದ್ದು, ಯಾವುದೇ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿದೆ. ಹೀಗಾಗಿ ಮಧ್ಯಪ್ರವೇಶ ಮಾಡಲ್ಲ ಎಂದು ಹೇಳಿದೆ. ಈ ಹಂತದಲ್ಲಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಂಗೀಕರಿಸಿದ ಆದೇಶದ ಪ್ರಕಾರ ಮಾಡಲಾಗುತ್ತಿರುವುದು ಕೇವಲ ವಿಸ್ತೃತ ಯೋಜನಾ ವರದಿ ತಯಾರಿಕೆ ಅಷ್ಟೇ ಆಗಿದೆ. ಅದೂ ತಮಿಳುನಾಡಿನ ಆಕ್ಷೇಪಣೆಗಳನ್ನು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ತಜ್ಞರನ್ನು ಪರಿಗಣಿಸಿದ ನಂತರ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಡಿಪಿಆರ್ ಪರಿಗಣಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಗಳ ಪೂರ್ವಾನುಮೋದನೆಯು ಪೂರ್ವಾಪೇಕ್ಷಿತವಾಗಿರುತ್ತದೆ ಎಂಬುದನ್ನು ಗಮನಿಸಬೇಕು. ಆ ವಿಷಯದ ದೃಷ್ಟಿಯಿಂದ, ಪ್ರಸ್ತುತ ತಮಿಳುನಾಡಿನ ಅರ್ಜಿಯು ಅಪ್ರಸ್ತುತವಾಗಿದೆ ಎಂದು ನಾವು ಭಾವಿಸುತ್ತೇವೆ ಎಂದು ನ್ಯಾಯಪೀಠ ಹೇಳಿದರು.ಇದೇ ವೇಳೆ ಕಾಂಗ್ರೆಸ್ ಮುಖಂಡರಾದ ರಘು ದಾಸರಕೊಪ್ಪಲು, ರಂಗಸ್ವಾಮಿ ಬನವಾಸೆ, ವೆಂಕಟೇಗೌಡ, ಆರೀಫ್ ಇತರರು ಉಪಸ್ಥಿತರಿದ್ದರು.