ಜಿಲ್ಲಾಸ್ಪತ್ರೆ ಅವ್ಯವಸ್ಥೆಗಳಿಗೆ ಆಗಬೇಕಿದೆ ಸರ್ಜರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

| Published : Nov 21 2024, 01:01 AM IST

ಜಿಲ್ಲಾಸ್ಪತ್ರೆ ಅವ್ಯವಸ್ಥೆಗಳಿಗೆ ಆಗಬೇಕಿದೆ ಸರ್ಜರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ
Share this Article
  • FB
  • TW
  • Linkdin
  • Email

ಸಾರಾಂಶ

ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿರುವ (ಬಿಮ್ಸ್) ಅವ್ಯವಸ್ಥೆಗಳಿಗೆ ಸರ್ಜರಿ ಆಗಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿರುವ (ಬಿಮ್ಸ್) ಅವ್ಯವಸ್ಥೆಗಳಿಗೆ ಸರ್ಜರಿ ಆಗಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವಿಗೀಡಾದ ಪ್ರಕರಣ ಸಂಬಂಧ ತಪ್ಪಿತಸ್ಥರ ಮೇಲೆ ಕಠಿಣ ಕ್ರಮವಾಗಬೇಕು. ಶಿಸ್ತು, ಆರೋಗ್ಯದ ದೃಷ್ಟಿಯಿಂದ ಆಸ್ಪತ್ರೆಯಲ್ಲಿ ಕೆಲವೊಂದು ವ್ಯವಸ್ಥೆಗಳನ್ನು ಸರಿಪಡಿಸಬೇಕಿದೆ. ನಾವು ಕೇವಲ ಬಾಯಿ ಮಾತಿಗೆ ಹೇಳಬಾರದು. ಇದನ್ನು ಜಾರಿಗೆ ತರಬೇಕು. ಈ ಮೊದಲು ನಾನು ಆಸ್ಪತ್ರೆಗೆ ಭೇಟಿ ನೀಡಿದ್ದು, ಮತ್ತೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸುವೆ ಎಂದು ಹೇಳಿದರು.

ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿದವರಿಗೆ, ತೆರಿಗೆ ಕಟ್ಟದವರಿಗೆ ಗೃಹಲಕ್ಷ್ಮೀ ಹಣ ಸಂದಾಯ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.

80 ಸಾವಿರ ಬಿಪಿಎಲ್ ಕಾರ್ಡ್ ರದ್ದತಿ ಮಾಡುವ ಬದಲಿಗೆ ಎಪಿಎಲ್‌ಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿರುವುದರಿಂದ ಯಾವುದೇ ಗೊಂದಲ ಇಲ್ಲ, ಎಪಿಎಲ್, ಬಿಪಿಎಲ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬಂದೇ ಬರುತ್ತದೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇಡೀ ದೇಶದಲ್ಲಿ ಈ ರೀತಿಯ ವ್ಯವಹಾರ ನಡೆಯುತ್ತಿದೆ. ಬಿಜೆಪಿಯವರು ನಿರಂತರವಾಗಿ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್ ಶಾಸಕರು ಗಟ್ಟಿಯಾಗಿದ್ದಾರೆ. ಸುಭದ್ರವಾಗಿರುವ ಸರ್ಕಾರವನ್ನು ಯಾರು ಏನೂ ಮಾಡಲು ಸಾಧ್ಯವಿಲ್ಲ ಎಂದ ಅವರು, ಸಚಿವ ಸಂಪುಟ ಪುನಾರಚನೆ ವಿಷಯ ನನ್ನ ಗಮನಕ್ಕೆ ಬಂದಿಲ್ಲ, ಖಾತೆ ಬದಲಾವಣೆ ಚರ್ಚೆ ಆಗಿಲ್ಲ ಎಂದು ಹೇಳಿದರು.

ಡಿ.9 ರಿಂದ 10 ದಿನಗಳ ಕಾಲ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯಲಿದೆ. ಈ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಬೆಳಗಾವಿ ಜಿಲ್ಲೆ ವಿಭಜನೆ ಬಗ್ಗೆ ಅಧಿವೇಶನದಲ್ಲಿ ಚರ್ಚೆಗೆ ಬರಬಹುದು. ಈ ಕುರಿತು ಎಲ್ಲ ಶಾಸಕರ ಜತೆಗೆ ಒಂದು ಸುತ್ತು ಮಾತನಾಡಲಾಗಿದೆ, ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಮಹಾರಾಷ್ಟ್ರದಲ್ಲಿ ನಾನು ಕೂಡ ಐದು ದಿನಗಳ ಕಾಲ ಪ್ರಚಾರ ಮಾಡಿದ್ದೇನೆ. ಕಾಂಗ್ರೆಸ್ ಒಳಗೊಂಡ ಮಹಾವಿಕಾಸ ಆಘಾಡಿ (ಎಂವಿಎ) ಸರ್ಕಾರ ರಚಿಸಲಿದೆ. ರಾಜ್ಯದ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.