ಗಾಂಧಿ ಭಾರತ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿ ಸುರ್ಜೆವಾಲಾ

| Published : Dec 24 2024, 12:47 AM IST

ಸಾರಾಂಶ

ಬೆಳಗಾವಿ ನಗರದ ಸಿ.ಪಿ.ಎಡ್ ಮೈದಾನದಲ್ಲಿ ಡಿ.26, 27 ರಂದು ನಡೆಯುವ ಗಾಂಧಿ ಭಾರತ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ನಗರದ ಸಿ.ಪಿ.ಎಡ್ ಮೈದಾನದಲ್ಲಿ ಡಿ.26, 27 ರಂದು ನಡೆಯುವ ಗಾಂಧಿ ಭಾರತ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.

ನಂತರ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು, 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಟಿಳಕವಾಡಿಯ ಕಾಂಗ್ರೆಸ್‌ ಅಧಿವೇಶನ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೀರಸೌಧದ ಉದ್ಯಾನದಲ್ಲೇ ಡಿ.26ರಂದು ಸಿಡಬ್ಲ್ಯುಸಿ ಸಭೆ ನಡೆಯಲಿದ್ದು, ಕಾಂಗ್ರೆಸ್ ಐಡಿಯಾಲಜಿ ಕುರಿತು ಚರ್ಚೆ ನಡೆಯಲಿದೆ, ಭರದಿಂದ ನಡೆದ ಸಿದ್ಧತೆಗಳನ್ನು ವೀಕ್ಷಿಸಿ, ಸಂಘಟಕರಿಗೆ ಸಲಹೆ, ಸೂಚನೆ ನೀಡಿದರು.

ವೀರಸೌಧದಲ್ಲಿದ್ದ ಗಾಂಧೀಜಿ ಅವರ ಬಾಲ್ಯ, ಶಿಕ್ಷಣ, ಕುಟುಂಬದ ಜತೆಗೆ, ಬೆಳಗಾವಿಯ ಅಧಿವೇಶನದಲ್ಲಿ ಅವರು ಪಾಲ್ಗೊಂಡಿದ್ದ ಅಪರೂಪದ ಕಪ್ಪುಬಿಳುಪಿನ 50ಕ್ಕೂಅಧಿಕ ಚಿತ್ರಗಳನ್ನು ರಣದೀಪ್ ಸಿಂಗ್ ಸುರ್ಜೆವಾಲಾ ವೀಕ್ಷಿಸಿದರು.

ಬೆಳಗಾವಿಯಲ್ಲಿ ಎರಡು ದಿನ ಕಾಲ ನಡೆಯುವ ಗಾಂಧಿ ಭಾರತ ಕಾರ್ಯಕ್ರಮ ಸರ್ವ ಸಿದ್ಧತೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರೊಂದಿಗೆ ಚರ್ಚಿಸಿದರು.

ಬಳಿಕ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಮಾಧ್ಯಮದವರೊಂದಿಗೆ ಮಾತನಾಡಿ, ಡಿ. 26, 27ರಂದು ಬೆಳಗಾವಿಯಲ್ಲಿ ನಡೆಯಲಿರುವ ಗಾಂಧಿ ಭಾರತ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಐತಿಹಾಸಿಕ ಕಾರ್ಯಕ್ರಮದಲ್ಲಿ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್‌ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ಸುವರ್ಣಸೌಧದ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ವಿರೋಧ ಪಕ್ಷಗಳ ನಾಯಕರು, ಸಂಸದರು, ಉಭಯ ಸದನಗಳ ಸಭಾಧ್ಯಕ್ಷರು ಹಾಗೂ ಸಭಾಪತಿಗಳು, ಎಲ್ಲಾ ಪಕ್ಷಗಳ ಶಾಸಕರು ಹಾಗೂ ಪರಿಷತ್ ಸದಸ್ಯರು ಸೇರಿ ಎಲ್ಲಾ ಪಕ್ಷಗಳಿಗೂ ಆಹ್ವಾನ ನೀಡಲಾಗುವುದು. ಇದು ಸಂಪೂರ್ಣ ಸರ್ಕಾರಿ ಕಾರ್ಯಕ್ರಮ. ಭದ್ರತಾ ದೃಷ್ಟಿಯಿಂದ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಆಹ್ವಾನ ಇಲ್ಲ. ಬೆಳಗಾವಿಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಇತರೆ ವಿಶೇಷ ಅತಿಥಿಗಳಿಗೆ ಆಹ್ವಾನ ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಎಐಸಿಸಿ ಕಾರ್ಯದರ್ಶಿ ಅಂಜಲಿ ನಿಂಬಾಳಕರ್‌, ಶಾಸಕರಾದ ಗಣೇಶ ಹುಕ್ಕೇರಿ, ರಾಜು ಸೇಠ್‌, ಯೂತ್‌ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್, ಬೆಳಗಾವಿ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷ ವಿನಯ ನಾವಲಗಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಸುನೀಲ ಹಣಮನ್ನವರ್‌ ಮೊದಲಾದವರು ಉಪಸ್ಥಿತರಿದ್ದರು.