ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆ ಈಚೆಗೆ ನಡೆದ ಜಾಗೃತ ಸಭೆಯಲ್ಲಿ ದೇವದಾಸಿ ಪದ್ಧತಿ ಬಗ್ಗೆ ಗಮನ ಸೆಳೆದಿದೆ. ಅದರ ಫಲವಾಗಿ ಇದೀಗ ಮತ್ತೊಮ್ಮೆ ದೇವದಾಸಿಯಂತ ಅನಿಷ್ಟ ಪದ್ಧತಿ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದೆ. ಮಹಿಳೆಯರನ್ನು ಶೋಷಣೆ ಮಾಡುವ ಕೆಲಸ ನಿಲ್ಲಬೇಕಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ರಾಜ್ಯದಲ್ಲಿ ದೇವದಾಸಿ ಪದ್ಧತಿ ನಿರ್ಮೂಲನೆ ಮಾಡುವ ಉದ್ದೇಶದಿಂದ ಮತ್ತೊಮ್ಮೆ ಸಮೀಕ್ಷೆ ಕಾರ್ಯ ಆರಂಭಿಸಲಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಪಟ್ಟಣದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಕ್ಷಮ್ ಅಂಗನವಾಡಿ 2.0 ಯೋಜನೆಯಡಿ 95 ಅಂಗನವಾಡಿ ಕೇಂದ್ರಗಳಿಗೆ ಎಲ್ಇಡಿ ಟಿವಿ ವಿತರಣೆ ಹಾಗೂ ಬಾಲ್ಯ ವಿವಾಹ ನಿಷೇಧ ಕುರಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆ ಈಚೆಗೆ ನಡೆದ ಜಾಗೃತ ಸಭೆಯಲ್ಲಿ ದೇವದಾಸಿ ಪದ್ಧತಿ ಬಗ್ಗೆ ಗಮನ ಸೆಳೆದಿದೆ. ಅದರ ಫಲವಾಗಿ ಇದೀಗ ಮತ್ತೊಮ್ಮೆ ದೇವದಾಸಿಯಂತ ಅನಿಷ್ಟ ಪದ್ಧತಿ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದೆ. ಮಹಿಳೆಯರನ್ನು ಶೋಷಣೆ ಮಾಡುವ ಕೆಲಸ ನಿಲ್ಲಬೇಕಿದೆ ಎಂದರು.

ಮಕ್ಕಳಿಗೆ ಪೂರಕ ಪೌಷ್ಟಿಂಕ ಆಹಾರದೊಂದಿಗೆ ಶಿಕ್ಷಣ ನೀಡಿ ಪೋಷಿಸುವ ಜವಾವ್ದಾರಿಯನ್ನು ಸರ್ಕಾರವೇ ವಹಿಸಿಕೊಂಡಿದೆ. ಮೈಕ್ರೋ ಫೈನಾನ್ಸ್ ಹಾವಳಿಯ ಬಗ್ಗೆ ಧ್ವನಿ ಎತ್ತಿ ಕಡಿವಾಣ ಹಾಕುವ ಕೆಲಸ ಮಾಡಲಾಗುತ್ತಿದೆ. ಅದಕ್ಕೆ ನಿಮ್ಮೆಲ್ಲರ ಸಹಕಾರ ಬೇಕು. ಸರ್ಕಾರಿ ವ್ಯವಸ್ಥೆಯಲ್ಲಿನ ಸಹಕಾರಿ ಸಂಸ್ಥೆಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ತಾಲೂಕಿನಲ್ಲಿ ಸ್ವಂತ ಕಟ್ಟಡಗಳಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಶೀಘ್ರ ಹೊಸ ಕಟ್ಟಡಗಳ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ತಾಲೂಕಿನಲ್ಲಿ 65 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿಲ್ಲ. ಅವುಗಳಲ್ಲಿ 20 ಕೇಂದ್ರಗಳಿಗೆ ಹೊಸ ಕಟ್ಟಡ ಮಂಜೂರಾಗಿದೆ. ಮುಂದಿನ ದಿನಗಳಲ್ಲಿ ಶೇ.100ರಷ್ಟು ಕಟ್ಟಡಗಳ ನಿರ್ಮಾಣ ಕಾರ್ಯಕ್ಕೆ ನಡೆಯಲಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ರಾಜಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿನ ಅಂಗನವಾಡಿ ಕಾರ್ಯಕರ್ತೆಯರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ತಂತ್ರಜ್ಞಾನ ಆಧಾರಿತದಿಂದ ಕೂಡಿದ ಸುಮಾರು 250 ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭಕ್ಕೆ ಶೀಘ್ರ ಚಾಲನೆ ಸಿಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ, ತಾಪಂ ಇಒ ಎಚ್.ಜಿ.ಶ್ರೀನಿವಾಸ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಂಜಮಣಿ ಪಾಲ್ಗೊಂಡಿದ್ದರು.