ಸಾರಾಂಶ
ವಿವಿಧ ಇಲಾಖೆಗಳಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಿಗೆ ಕಾರ್ಯಕ್ರಮಗಳಿಗೆ ಸರ್ಕಾರಿದಿಂದ ಬಿಡುಗಡೆಯಾಗುವ ಅನುದಾನವನ್ನು ಪ್ರಸ್ತುತ ಆರ್ಥಿಕ ವರ್ಷದಲ್ಲಿ ಪೂರ್ಣಗೊಳಿಸಿ ಸಮರ್ಪಕವಾಗಿ ಯೋಜನೆಗಳನ್ನು ಜಾರಿ ಗೊಳಿಸಬೇಕು
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಸರ್ಕಾರ ಜಾರಿಗೆ ತಂದಿರುವ ಮಹತ್ವಕಾಂಕ್ಷಿ 5 ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಲು, ಜಿಲ್ಲೆಯ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಮನೆ ಮನೆ ಸಮೀಕ್ಷೆ ಮಾಡಿಸಿ ಮಾಹಿತಿ ಪಡೆದು ನಂತರ ಸೂಕ್ತ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಎನ್.ಮಂಜುಳಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾವೀಗ ಆರ್ಥಿಕ ವರ್ಷದ ಅಂತಿಮ ಹಂತದಲ್ಲಿದ್ದು, ಈ ಅವಧಿಯಲ್ಲಿ ಹೆಚ್ಚು ಜಾಗೃತರಾಗಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದರು.ಅನುದಾನ ಬಳಸದಿದ್ದರೆ ಕ್ರಮ
ವಿವಿಧ ಇಲಾಖೆಗಳಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಿಗೆ ಕಾರ್ಯಕ್ರಮಗಳಿಗೆ ಸರ್ಕಾರಿದಿಂದ ಬಿಡುಗಡೆಯಾಗುವ ಅನುದಾನವನ್ನು ಪ್ರಸ್ತುತ ಆರ್ಥಿಕ ವರ್ಷದಲ್ಲಿ ಪೂರ್ಣಗೊಳಿಸಿ ಸಮರ್ಪಕವಾಗಿ ಯೋಜನೆಗಳನ್ನು ಜಾರಿ ಗೊಳಿಸಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟವರೇ ಹೊಣೆಯಾಗಬೇಕಾಗುತ್ತದೆ ಎಂದು ತಿಳಿಸಿದರು. ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾಗಿದ್ದು, ಈ ಕುರಿತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.ಸಭೆಯಲ್ಲಿ ಜಿಲ್ಲಾಧಿಕಾರಿ ಪಿ. ಎನ್ ರವೀಂದ್ರ, ಜಿಪಂ ಸಿಇಒ ಪ್ರಕಾಶ್ ಜಿ.ಟಿ ನಿಟ್ಟಾಲಿ, ಉಪಕಾರ್ಯದರ್ಶಿ ಡಾ. ಭಾಸ್ಕರ್, ಉಪವಿಭಾಗಧಿಕಾರಿ ಅಶ್ವಿನ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜನಂದ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.