ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು
ಮೊಬೈಲ್ ಆ್ಯಪ್ ಆಧಾರಿಸಿ ನಗರದ ಬೀದಿ ವ್ಯಾಪಾರಿಗಳ ಸಮೀಕ್ಷೆಯನ್ನು ಬಿಬಿಎಂಪಿ ಆರಂಭಿಸಿದೆ ಎಂದು ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.600ಕ್ಕೂ ಅಧಿಕ ಗಣತಿದಾರರು ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಈವರೆಗೆ ವಲಯವಾರು ಸುಮಾರು 1,800 ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಸಮೀಕ್ಷೆಯ ಅನುಸಾರ ಅರ್ಹ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು. ಅಲ್ಲದೇ, ವಲಯ ಮಟ್ಟದಲ್ಲಿ ಪಟ್ಟಣ ಮಾರಾಟ ಸಮಿತಿಗಳನ್ನು ರಚಿಸಿ, ಬೀದಿ ಬದಿ ವ್ಯಾಪಾರಿಗಳ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತದೆ. ವ್ಯಾಪಾರಿಗಳ ಅನುಕೂಲಕ್ಕಾಗಿ ವ್ಯಾಪಾರ ವಲಯಗಳನ್ನು (ವೆಂಡಿಂಗ್ ಜೋನ್) ಗುರುತಿಸುವ ಕಾರ್ಯವೂ ಚುರುಕಾಗಿ ನಡೆಯುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮೀಕ್ಷೆ ಬಗ್ಗೆ ಹಾಗೂ ದೊರೆಯುವ ಸೌಲಭ್ಯಗಳ ಬಗ್ಗೆ ವ್ಯಾಪಾರಿಗಳಲ್ಲಿ ಜಾಗೃತಿ ಮೂಡಿಸಲು ಬೀದಿ ನಾಟಕ ಹಾಗೂ ಕರಪತ್ರಗಳನ್ನು ವಿತರಿಸಿ ಅರಿವು ಮೂಡಲಾಗುವುದು ಎಂದಿದ್ದಾರೆ.ದೊರೆಯುವ ಸೌಲಭ್ಯ: ಬೀದಿ ಬದಿ ವ್ಯಾಪಾರಿಗಳ ಸಬಲೀಕರಣದ ಉದ್ದೇಶಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಯೋಜನೆಗಳಿದ್ದು, ಕಿರು ಸಾಲ ಒದಗಿಸುವ ಪಿಎಂ ಸ್ವನಿಧಿ ಯೋಜನೆ, ಪಾಲಿಕೆಯ ಕಲ್ಯಾಣ ವಿಭಾಗದಿಂದ ಇ-ಮಾರಾಟ ವಾಹನ ಖರೀದಿಗೆ ಸಹಾಯಧನ, ಒಂಟಿ ಮನೆ ಅಥವಾ ಅಮೃತ ಮಹೋತ್ಸವ ಮನೆ ಯೋಜನೆ ಸಹಾಯಧನ, ಗಂಭೀರ ಖಾಯಿಲೆ ಇರುವವರಿಗೆ ವೈದ್ಯಕೀಯ ವೆಚ್ಚ ಮರುಪಾವತಿ, ಕೌಶಲ್ಯ ತರಬೇತಿ ಕಾರ್ಯಕ್ರಮ, ಬೀದಿ ಬದಿ ವ್ಯಾಪಾರಿಗಳ ಮಕ್ಕಳ ಶಿಕ್ಷಣಕ್ಕೆ ಶುಲ್ಕ ಮರುಪಾವತಿ ಸೇರಿದಂತೆ ಇನ್ನಿತರೆ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬಹುದು.
ಸಮೀಕ್ಷೆ ವೇಳೆ ದಾಖಲೆ ಸಲ್ಲಿಸಿ: ಸಮೀಕ್ಷೆಗೆ ಗಣತಿದಾರರು ಆಗಮಿಸಿದ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಿಗಳು ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಬುಕ್, ಕುಟುಂಬ ಪಡಿತರ ಚೀಟಿ, ಕುಟುಂಬ ಸದಸ್ಯರ ಮಾಹಿತಿ, ಸ್ವಯಂ ಘೋಷಣೆ ಪ್ರಮಾಣ ಪತ್ರ ಈ ದಾಖಲೆಗಳನ್ನು ಸಲ್ಲಿಸಬೇಕಿದೆ.