ಸಾರಾಂಶ
ಕನ್ನಡಪ್ರಭ ವಾರ್ತೆ ರಾಯಚೂರು
ಬೇಸಿಗೆಕಾಲ ಶುರುವಾಗಿದೆ, ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಆಯಾ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಈ ವಿಚಾರವಾಗಿ ನಿರ್ಲಕ್ಷ್ಯ ತೋರುವವರನ್ನು ಅಮಾನತು ಮಾಡಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ಎಂ.ಎ.ರಹೀಮ್ ಖಾನ್ ಎಚ್ಚರಿಸಿದರು.
ಸ್ಥಳೀಯ ಜಿಪಂ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾದಾಗ ಜವಾಬ್ದಾರಿ ಹೊಂದಿರುವ ಅಧಿಕಾರಿಗಳನ್ನು ಅಮಾನತುಗೊಳಿಸಲು ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎಂದರು.
ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಹೆಚ್ಚಾಗುಸ ಸಾಧ್ಯತೆಯಿದ್ದು, ತೀವ್ರ ಕುಡಿಯುವ ನೀರಿನ ಸಮಸ್ಯೆಯಿರುವ ಸ್ಥಳಗಳಿಗೆ ಖುದ್ದು ಸಂಬಂಧಪಟ್ಟ ಅಧಿಕಾರಿಗಳು ತೆರಳಿ ಸ್ಥಳಪರಿಶೀಲನೆ ನಡೆಸಬೇಕು ಮತ್ತು ಜನರಿಗೆ ಯಾವುದೇ ರೀತಿಯಿಂದಲೂ ನೀರಿನ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ನೀರಿನ ಸಮಸ್ಯೆ ಕಂಡುಬಂದಲ್ಲಿ ಟ್ಯಾಂಕರ್ ಅಥವಾ ಬೋರ್‌ವೆಲ್‌ಗಳ ಮೂಲಕ ಜನರಿಗೆ ನೀರೊದಗಿಸುವ ಕಾರ್ಯವಾಗಬೇಕು. ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ಲೋಪದೋಷಗಳಾಗದಂತೆ ಕರ್ತವ್ಯ ನಿರ್ವಹಿಸಬೇಕು. ಒಂದು ವೇಳೆ ಸಮಸ್ಯೆ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ ಎಂದರು.
ಕುಡಿಯುವ ನೀರಿನ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ತಪ್ಪು ಮಾಡಿದ ಅಧಿಕಾರಿಗಳು ವಿರುದ್ಧ ಕ್ರಮವನ್ನು ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿರುವ ಇಂದಿರಾ ಕ್ಯಾಂಟಿನ್‌ಗಳ ಮೂಲಕ ಜನರಿಗೆ ಉತ್ತಮ ಆಹಾರವನ್ನು ನೀಡಲಾಗುತ್ತಿದ್ದು, ಈಗಾಗಲೇ ಜಿಲ್ಲೆಯಲ್ಲಿ ತಾಲೂಕು ಮಟ್ಟದಲ್ಲಿ ಇಂದಿರಾ ಕ್ಯಾಂಟೀನ್‌ಗಳಿದ್ದು, ಹೊಸದಾಗಿ ಜಿಲ್ಲೆಗೆ ಐದು ಇಂದಿರಾ ಕ್ಯಾಂಟಿನ್‌ಗಳಿಗೆ ಅನುಮೋದನೆ ದೊರಕಿದೆ.
ಮುಂದಿನ ದಿನಗಳಲ್ಲಿ ಕ್ಯಾಂಟೀನ್ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು. ಅಲ್ಲದೇ ಹಿಂದೆ ಇಂದಿರಾ ಕ್ಯಾಂಟಿನ್‌ಗಳಲ್ಲಿ ಇದ್ದ ಆಹಾರ ಪದ್ಧತಿಯನ್ನು ಆ ಪ್ರದೇಶಕ್ಕೆ ಅನುಗುಣವಾಗಿ ಬದಲಾವಣೆ ಮಾಡಲಾಗಿದೆ ಎಂದು ಹೇಳಿದರು.ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಮುಖ್ಯ ಜವಾಬ್ದಾರಿಯಾಗಿರುತ್ತದೆ. ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.
ಜಿಲ್ಲೆಯಲ್ಲಿ ತಾಲೂಕು ಮಟ್ಟದಲ್ಲಿ ಇಂದಿರಾ ಕ್ಯಾಂಟಿನ್‌ಗಳಿದ್ದು, ಹೊಸದಾಗಿ ಜಿಲ್ಲೆಗೆ ಐದು ಇಂದಿರಾ ಕ್ಯಾಂಟಿನ್‌ಗಳಿಗೆ ಅನುಮೋದನೆ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಕ್ಯಾಂಟೀನ್ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜನಸಾಮಾನ್ಯರ ಸೇವೆಗೆ ರಾಜಕಾರಣ ಮಾಡುವುದು ಸರಿಯಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ಪಕ್ಷ ಹಾಗೂ ರಾಜಕಾರಣ ಇರಲಿ. ಆದರೆ, ಜನರ ಸೇವೆಯಲ್ಲಿ ರಾಜಕಾರಣ ಸಲ್ಲದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ನಗರಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿ ವೆಂಕಟರಮಣ ರೆಡ್ಡಿ, ಪೌರಾಡಳಿತ ನಿರ್ದೇಶನಾಲಯದ ಜಂಟಿ ನಿರ್ದೇಶಕ ರುದ್ರಮುನಿ, ಸ್ಥಳೀಯ ಸಂಸ್ಥೆಗಳ ಅಧಿಕಾರಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.