ಸಾರಾಂಶ
ಸುತ್ತೂರು ರಾಜೇಂದ್ರ ಶ್ರೀಗಳ 109 ನೇ ಜಯಂತಿಕನ್ನಡಪ್ರಭ ವಾರ್ತೆ ಯಳಂದೂರು
ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣದ ಮಹತ್ವ ತಿಳಿದಿದ್ದ ಸುತ್ತೂರು ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಹಲವು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಶೈಕ್ಷಣಿಕ ಕ್ರಾಂತಿಗೆ ಕಾರಣರಾಗಿದ್ದು, ಮನುಕುಲದ ಸೇವೆಗೆ ಪ್ರೇರಣೆಯಾಗಿದ್ದಾರೆ ಎಂದು ಬದನಗುಪ್ಪೆ ಪ್ರೌಢಶಾಲೆ ಅಧ್ಯಾಪಕ ಸಿದ್ದಮಲ್ಲಪ್ಪ ಅಭಿಪ್ರಾಯಪಟ್ಟರು.ಪಟ್ಟಣದಲ್ಲಿ ತಾಲೂಕು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ, ಎಸ್‌ಡಿವಿಎಸ್ ವಿದ್ಯಾಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸುತ್ತೂರು ಜಗದ್ಗುರು ಶಿವರಾತ್ರಿ ರಾಜೇಂದ್ರ ಸ್ವಾಮೀಜಿ 109ನೇ ಜಯಂತಿ ಕಾರ್ಯಕ್ರಮದಲ್ಲಿ ದತ್ತಿ ಉಪನ್ಯಾಸ ನೀಡಿದರು. ರಾಜೇಂದ್ರ ಶ್ರೀಗಳ ದೂರದೃಷ್ಟಿಯ ಫಲವಾಗಿ ಮೈಸೂರು ಚಾಮರಾಜನಗರ ಜಿಲ್ಲೆಯಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳು ಮತ್ತು ವಸತಿ ನಿಲಯಗಳು ಆರಂಭವಾಗಿ ಸಾವಿರಾರು ಬಡ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಪಡೆಯಲು ಸಾಧ್ಯವಾಗಿದೆ ಎಂದು ತಿಳಿಸಿದರು.
ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ವೀರಭದ್ರಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜೇಂದ್ರ ಶ್ರೀಗಳು ಶರಣ ಸಂಸ್ಕೃತಿ ಪ್ರಸಾರಕ್ಕಾಗಿ ಶರಣ ಸಾಹಿತ್ಯ ಪರಿಷತ್ ಸ್ಥಾಪಿಸಿ ಎಲ್ಲರಿಗೂ ಪ್ರೇರಕ ಶಕ್ತಿಯಾಗಿದ್ದಾರೆ ಎಂದರು.ಗೌಡಳ್ಳಿ ಮಠದ ಮರಿತೋಂಟಾದಾರ್ಯ ಸ್ವಾಮೀಜಿ ಸಾನ್ನಿದ್ಯ ವಹಿಸಿದ್ದರು. ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ವಿಜಯ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಸಮಾಜ ಸೇವಕರಾದ ದುಗ್ಗಟ್ಟಿ ವೀರಭದ್ರಪ್ಪ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ದೇವರಹಳ್ಳಿ ಮಹದೇವಪ್ಪ, ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಲಲಿತಾ ದೊರೆಸ್ವಾಮಿ, ಕಾರ್ಯದರ್ಶಿಗಳಾದ ಶಿವಲಂಕಾರ್, ರೇಚಣ್ಣ, ಮುಖ್ಯ ಶಿಕ್ಷಕ ವೀರಭದ್ರಸ್ವಾಮಿ, ಶಿಕ್ಷಕರಾದ ಗುಂಬಳ್ಳಿ ಬಸವರಾಜು, ಮಹದೇವು, ಶಿವಕುಮಾರ್ ಇತರರು ಇದ್ದರು.