1994 ರಲ್ಲಿ ಮೊದಲ ಬಾರಿಗೆ ದಾವಣಗೆರೆಯಿಂದ ವಿಧಾನಸಭೆಗೆ ಆಯ್ಕೆಯಾದರು. ಅನಂತರ ಸತತವಾಗಿ ಆರು ಬಾರಿ ಶಾಸಕರಾಗಿ ಆಯ್ಕೆಯಾದುದು ಅವರ ಜನಪ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. 1998 ರಲ್ಲಿ ಲೋಕಸಭೆಗೂ ಆಯ್ಕೆಯಾಗಿದ್ದರು.

ಕನ್ನಡಪ್ರಭ ವಾರ್ತೆ ಮೈಸೂರು

ಹಿರಿಯ ರಾಜಕೀಯ ಮುತ್ಸದ್ದಿಗಳು, ಶಾಸಕರು ಹಾಗೂ ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಅವರು ಭಾನುವಾರ ಸಂಜೆ ದೈವಾಧೀನರಾದುದು ವಿಷಾದದ ಸಂಗತಿ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.

ಸಜ್ಜನ ರಾಜಕಾಣಿಗಳೆಂದೇ ಹೆಸರಾಗಿದ್ದರವರು. ದಾವಣಗೆರೆ ಜಿಲ್ಲೆ ಶಾಮನೂರು ಗ್ರಾಮದ ಕೃಷಿಕ ಕುಟುಂಬದಲ್ಲಿ ಜನಿಸಿದವರು. ಬಿಎಸ್ಸಿ ಪದವೀಧರರು. ಅಕ್ಕಿಯ ವ್ಯಾಪಾರೋದ್ಯಮವನ್ನು ಪ್ರಾರಂಭಿಸಿ ಅದರಲ್ಲಿ ಯಶಸ್ವಿಯಾಗಿದ್ದರು. ಹಿಂದೆ ಚಿತ್ರದುರ್ಗ ಜಿಲ್ಲೆಯ ಭಾಗವಾಗಿದ್ದ ದಾವಣಗೆರೆ ನಗರಸಭೆಯ ಸದಸ್ಯರಾಗಿ ಆಯ್ಕೆಯಾಗಿ, ಬಳಿಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

1994 ರಲ್ಲಿ ಮೊದಲ ಬಾರಿಗೆ ದಾವಣಗೆರೆಯಿಂದ ವಿಧಾನಸಭೆಗೆ ಆಯ್ಕೆಯಾದರು. ಅನಂತರ ಸತತವಾಗಿ ಆರು ಬಾರಿ ಶಾಸಕರಾಗಿ ಆಯ್ಕೆಯಾದುದು ಅವರ ಜನಪ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. 1998 ರಲ್ಲಿ ಲೋಕಸಭೆಗೂ ಆಯ್ಕೆಯಾಗಿದ್ದರು.

ಕಾಂಗ್ರೆಸ್ ಪಕ್ಷದಲ್ಲಿ ಐದು ದಶಕಗಳಿಂದ ರಾಜಕಾರಣದಲ್ಲಿದ್ದವರು. ದೇಶದ ಅತ್ಯಂತ ಹಿರಿಯ ಸಕ್ರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದರು. ತೋಟಗಾರಿಕೆ ಮತ್ತು ಕೃಷಿ ಮಾರುಕಟ್ಟೆ ಸಚಿವರಾಗಿ ಇಳಿ ವಯಸ್ಸಿನಲ್ಲೂ ಅತ್ಯಂತ ದಕ್ಷತೆಯಿಂದ ಕಾರ್ಯ ನಿರ್ವಹಿಸಿದ್ದರು.

ಶಿಕ್ಷಣ ಪ್ರೇಮಿಗಳಾಗಿದ್ದ ಅವರು, ಬಾಪೂಜಿ ಶಿಕ್ಷಣಸಂಸ್ಥೆಗಳ ಸಂಸ್ಥಾಪಕರಾಗಿ ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣ ಕ್ಷೇತ್ರಗಳಲ್ಲಿ ಕ್ರಾಂತಿಯನ್ನೇ ಮಾಡಿದ್ದರು. ದಾವಣಗೆರೆಯನ್ನು ಶೈಕ್ಷಣಿಕ ಕೇಂದ್ರವಾಗಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಸಮರ್ಥವಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದರು. ಡಾ. ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ಮೂಲಕ ಹಲವಾರು ಜನಪರ ಕಾರ್ಯಕ್ರಮಗಳನ್ನು ಕೈಗೊಂಡಿದ್ದರು.

ದೈವಭಕ್ತರು, ಅಧ್ಯಾತ್ಮಜೀವಿಗಳೂ ಆಗಿದ್ದರು. ಮಠಮಾನ್ಯಗಳು ಹಾಗೂ ಧಾರ್ಮಿಕ ಕೇಂದ್ರಗಳ ಬಗ್ಗೆ ಅಪಾರ ಗೌರವವನ್ನು ಹೊಂದಿದ್ದರು. ಸುತ್ತೂರು ಮಠದೊಂದಿಗೆ ಅತ್ಯಂತ ಅವಿನಾಭಾವ ಸಂಬಂಧವನ್ನು ಹೊಂದಿದ್ದರು. ಜಾತ್ರೆ, ಜಯಂತಿ, ಶ್ರೀಮಠದ ಹಾಗೂ ಸಂಸ್ಥೆಗಳ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಶ್ರೀಮಠಕ್ಕೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಸುತ್ತೂರು ಶ್ರೀಕ್ಷೇತ್ರದಲ್ಲಿ ಅತಿಥಿಗೃಹವನ್ನು ನಿರ್ಮಿಸಿದ ಕೊಡುಗೈ ದಾನಿಗಳು.

ಸಾರ್ವಜನಿಕ ಜೀವನದಲ್ಲಿ ಸಜ್ಜನಿಕೆಯ ಮೂರ್ತಿಯಾಗಿದ್ದರು. ಸದಾಜನಪರ ನಿಲುವನ್ನು ಹೊಂದಿದ್ದರು. ಅವರ ರಾಜಕೀಯ ಜೀವನ ಒಂದು ತೆರೆದ ಪುಸ್ತಕವಾಗಿತ್ತು. ಅವರಿಗೆ ಎಲ್ಲಾ ಪಕ್ಷಗಳಲ್ಲಿಯೂ ಅಭಿಮಾನಿಗಳಿದ್ದರು. ಅವರೊಬ್ಬ ಅಜಾತಶತ್ರುಗಳಾಗಿದ್ದರು.

ಅವರ ಅಗಲುವಿಕೆಯಿಂದ ಕರ್ನಾಟಕದ ಹಿರಿಯಚೇತನವೊಂದು ಅಸ್ತಂಗತವಾದಂತಾಗಿದೆ. ದಿವಂಗತರ ಆತ್ಮಕ್ಕೆ ಶಾಂತಿಯನ್ನು, ಅವರ ಕುಟುಂಬ ವರ್ಗದವರರು, ಬಂಧು ಬಾಂಧವರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಈ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲೆಂದು ಶ್ರೀಗಳು ಹಾರೈಸಿದ್ದಾರೆ.