ಸಾಹಿತ್ಯ ಸಮ್ಮೇಳನಕ್ಕೆ ಸುವರ್ಣ ಸಂಭ್ರಮ ಲಾಂಛನ ಕಡ್ಡಾಯ

| Published : Jul 26 2024, 01:37 AM IST

ಸಾಹಿತ್ಯ ಸಮ್ಮೇಳನಕ್ಕೆ ಸುವರ್ಣ ಸಂಭ್ರಮ ಲಾಂಛನ ಕಡ್ಡಾಯ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಎಲ್ಲಾ ಪತ್ರ ವ್ಯವಹಾರಗಳಲ್ಲಿ ಹಾಗೂ ಆಯೋಜಿಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ಕರ್ನಾಟಕ ನಾಮಕರಣದ 50ನೇ ವರ್ಷದ ಸುವರ್ಣ ಸಂಭ್ರಮ ಲಾಂಛನವನ್ನು ಕಡ್ಡಾಯವಾಗಿ ಬಳಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸೂಚಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮಂಡ್ಯದಲ್ಲಿ ಡಿಸೆಂಬರ್‌ 20ರಿಂದ 21ರವರೆಗೆ ಆಯೋಜಿಸಲು ಉದ್ದೇಶಿಸಿರುವ ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಎಲ್ಲಾ ಪತ್ರ ವ್ಯವಹಾರಗಳಲ್ಲಿ ಹಾಗೂ ಆಯೋಜಿಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ಕರ್ನಾಟಕ ನಾಮಕರಣದ 50ನೇ ವರ್ಷದ ಸುವರ್ಣ ಸಂಭ್ರಮ ಲಾಂಛನವನ್ನು ಕಡ್ಡಾಯವಾಗಿ ಬಳಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಸೂಚಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರೊಂದಿಗೆ ಜಂಟಿ ಅಧ್ಯಕ್ಷತೆಯಲ್ಲಿ ನಡೆದ ಸಾಹಿತ್ಯ ಸಮ್ಮೇಳನ ಆಯೋಜನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಸಾಹಿತ್ಯ ಸಮ್ಮೇಳನಕ್ಕೆ 30 ಕೋಟಿ ರು.ಗಳ ಅನುದಾನದ ಅಗತ್ಯವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಕೋರಿದ್ದಾರೆ. ಈ ಬಗ್ಗೆ ಸರ್ಕಾರ ಶೀಘ್ರವೇ ಕ್ರಮಕೈಗೊಂಡು ತಿಳಿಸಲಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜನೆಯ ಸಂಪೂರ್ಣ ಕ್ರಿಯಾಯೋಜನೆ ಸಿದ್ಧಪಡಿಸಿ, ಸಲ್ಲಿಸುವಂತೆ ಸೂಚಿಸಿದರು.

ಕಸಾಪ ಅಧ್ಯಕ್ಷ ಮಹೇಶ್‌ ಜೋಶಿ ಮಾತನಾಡಿ, ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ವಿಶೇಷ ಮಹತ್ವವಿದೆ. ಈ ಸಮ್ಮೇಳನಕ್ಕೆ ಅಮೆರಿಕದಿಂದ ಅನೇಕ ಗಣ್ಯರು ಆಗಮಿಸಲಿದ್ದಾರೆ. ಹಾಗೆಯೇ 87ನೇ ಸಮ್ಮೇಳನದ ಅಂಗವಾಗಿ 87 ಸಾಧಕರನ್ನು ಸನ್ಮಾನಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಮಾತನಾಡಿ, ಈಗಾಗಲೇ ಸಮ್ಮೇಳನ ಆಯೋಜನೆಗೆ ಎರಡು ಸ್ಥಳಗಳನ್ನು ಪರಿಶೀಲನೆ ಮಾಡಲಾಗಿದೆ. ಇದರಲ್ಲಿ ಯಾವುದು ಸೂಕ್ತ ಎಂಬುದನ್ನು ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ನಿರ್ಧರಿಸಲಿ. ಆದಷ್ಟು ಶೀಘ್ರವಾಗಿ ಸ್ಥಳ ನಿಗದಿಯಾದರೆ, ಅಲ್ಲಿಗೆ ಬೇಕಾದ ಅನುಕೂಲಗಳನ್ನು ಕಲ್ಪಿಸುವ ಕೆಲಸವನ್ನು ಆರಂಭಿಸಬಹುದು ಎಂದರು. ಸಭೆಯಲ್ಲಿ ಶಾಸಕರಾದ ಎ.ಬಿ. ರಮೇಶ್ ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ, ಕೆ.ಎಂ.ಉದಯ, ಪಿ.ಎಂ. ನರೇಂದ್ರಸ್ವಾಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್, ನಿರ್ದೇಶಕರಾದ ಡಾ. ಧರಣಿ ದೇವಿ ಮಾಲಗತ್ತಿ ಸೇರಿದಂತೆ ಮತ್ತಿತರರು ಹಾಜರಿದ್ದರು.

ಫೋಟೋ

ವಿಕಾಸಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹಾಗೂ ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಡೆಯಿತು. ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಮಹೇಶ್‌ ಜೋಶಿ ಉಪಸ್ಥಿತರಿದ್ದರು.