ಹಾರನಹಳ್ಳಿ ಸುಕ್ಷೇತ್ರ ಕೋಡಿಮಠದ ಉತ್ತರಾಧಿಕಾರಿ ಚೇತನ್ ಮರಿದೇವರ ಸಾನ್ನಿಧ್ಯದಲ್ಲಿ ಆ. 30ರಂದು ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ನಾಡಿನ ವಿವಿಧ ಭಾಗಗಳಿಂದ ಆಗಮಿಸುವ ಸಾವಿರಾರು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜಾತ್ರಾ ಮಹೋತ್ಸವದ ಪ್ರಮುಖ ಧಾರ್ಮಿಕ ಆಚರಣೆಗಳಲ್ಲಿ ಒಂದಾಗಿರುವ ಮೃತ್ತಿಕೆ ತರಿಸುವ ಕಾರ್ಯಕ್ರಮಕ್ಕೆ ಗ್ರಾಮದಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕೋಡಿಮಠದ ಮಹಾತಪಸ್ವಿ ಯೋಗಸಮಾಧಿಯಲ್ಲಿರುವ ಶಿವಲಿಂಗಜ್ಜಯ್ಯ ಹಾಗೂ ನೀಲಮ್ಮ ದೇವಿಯ ಕೃಪಾ ಆಶೀರ್ವಾದದೊಂದಿಗೆ, ಜಗದ್ಗುರು ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅವರ ಸಂಕಲ್ಪದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.

ಕನ್ನಡಪ್ರಭ ವಾರ್ತೆ ಅರಸೀಕೆರೆ

ತಾಲೂಕಿನ ಮಾಡಾಳು ಗ್ರಾಮದ ಆರಾಧ್ಯ ದೇವತೆ ಹಾಗೂ ಶಕ್ತಿ ದೇವತೆ ಎಂದೇ ರಾಜ್ಯದ ವಿವಿಧೆಡೆ ಭಕ್ತರ ನಂಬಿಕೆಗೆ ಪಾತ್ರವಾಗಿರುವ ಮೂಲಸ್ಥಾನ ಶ್ರೀ ಸ್ವರ್ಣಗೌರಮ್ಮ ದೇವಿಯ 167ನೇ ವರ್ಷದ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಶತಮಾನಕ್ಕೂ ಮಿಗಿಲಾದ ಪರಂಪರೆ ಹಾಗೂ ವಿಶಿಷ್ಟ ಧಾರ್ಮಿಕ ಆಚರಣೆಗಳೊಂದಿಗೆ ನಡೆಯಲಿರುವ ಜಾತ್ರಾ ಮಹೋತ್ಸವದ ಅಂಗವಾಗಿ ಆ. 30ರಂದು ದೇವಿಯ ಮೂರ್ತಿ ನಿರ್ಮಾಣಕ್ಕೆ ಅಗತ್ಯವಾದ ಮೃತ್ತಿಕೆ ಮಣ್ಣನು ಧಾರ್ಮಿಕ ವಿಧಿವಿಧಾನಗಳೊಂದಿಗೆ ಪುರ ಪ್ರವೇಶ ಮಾಡಿಸಲಾಗುವುದು.ಹಾರನಹಳ್ಳಿ ಸುಕ್ಷೇತ್ರ ಕೋಡಿಮಠದ ಉತ್ತರಾಧಿಕಾರಿ ಚೇತನ್ ಮರಿದೇವರ ಸಾನ್ನಿಧ್ಯದಲ್ಲಿ ಆ. 30ರಂದು ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ನಾಡಿನ ವಿವಿಧ ಭಾಗಗಳಿಂದ ಆಗಮಿಸುವ ಸಾವಿರಾರು ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜಾತ್ರಾ ಮಹೋತ್ಸವದ ಪ್ರಮುಖ ಧಾರ್ಮಿಕ ಆಚರಣೆಗಳಲ್ಲಿ ಒಂದಾಗಿರುವ ಮೃತ್ತಿಕೆ ತರಿಸುವ ಕಾರ್ಯಕ್ರಮಕ್ಕೆ ಗ್ರಾಮದಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕೋಡಿಮಠದ ಮಹಾತಪಸ್ವಿ ಯೋಗಸಮಾಧಿಯಲ್ಲಿರುವ ಶಿವಲಿಂಗಜ್ಜಯ್ಯ ಹಾಗೂ ನೀಲಮ್ಮ ದೇವಿಯ ಕೃಪಾ ಆಶೀರ್ವಾದದೊಂದಿಗೆ, ಜಗದ್ಗುರು ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅವರ ಸಂಕಲ್ಪದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.ಆ.30ರಂದು ಬೆಳಿಗ್ಗೆ 11 ಗಂಟೆಗೆ ಮಾಡಾಳು ಗ್ರಾಮದ ಮೂಲ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ. ಬಳಿಕ ಗ್ರಾಮದ ಹೊರವಲಯದಲ್ಲಿರುವ ಶ್ರೀ ಪಂಚಲಿಂಗೇಶ್ವರ ದೇವಾಲಯದ ಮುಂಭಾಗದ ತೋಟದಿಂದ ದೇವಿಯ ಮೂರ್ತಿ ನಿರ್ಮಾಣಕ್ಕೆ ಅಗತ್ಯವಾದ ಪವಿತ್ರ ಮೃತ್ತಿಕೆಯನ್ನು ಧಾರ್ಮಿಕ ಆಚರಣೆಗಳ ಮೂಲಕ ಸಂಗ್ರಹಿಸಲಾಗುವುದು. ನಂತರ ಶ್ರೀಗಳ ಪಾದಪೂಜೆ ನೆರವೇರಿಸಿ, ಎರಡು ಕುಕ್ಕೆಗಳಲ್ಲಿ ಮೃತ್ತಿಕೆಯನ್ನು ಭಕ್ತರು ಶ್ರದ್ಧಾಭಕ್ತಿಯಿಂದ ತಲೆಯ ಮೇಲೆ ಹೊತ್ತುಕೊಂಡು ಮಂಗಳವಾದ್ಯಗಳೊಂದಿಗೆ ಮೆರವಣಿಗೆಯಲ್ಲಿ ಗ್ರಾಮದ ಪ್ರಮುಖ ಬೀದಿಗಳ ಮೂಲಕ ಸಾಗಲಿದ್ದಾರೆ. ಬಳಿಕ ಮೃತ್ತಿಕೆಯನ್ನು ಮೂಲ ಸನ್ನಿಧಿಗೆ ತಂದು ಮುಂದಿನ ಧಾರ್ಮಿಕ ಕಾರ್ಯಗಳಿಗೆ ಬಳಸಿಕೊಳ್ಳಲಾಗುವುದು.167 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಸ್ವರ್ಣಗೌರಮ್ಮ ದೇವಿಯ ಜಾತ್ರಾ ಮಹೋತ್ಸವವು ತನ್ನದೇ ಆದ ವಿಶಿಷ್ಟ ಸಂಪ್ರದಾಯ ಮತ್ತು ಧಾರ್ಮಿಕ ಆಚರಣೆಗಳಿಂದ ಭಕ್ತರ ಗಮನ ಸೆಳೆಯುತ್ತಿದೆ. ಜಾತ್ರೆಯ ಹಿನ್ನೆಲೆಯಲ್ಲಿ ಮಾಡಾಳು ಗ್ರಾಮದಲ್ಲಿ ಈಗಾಗಲೇ ಹಬ್ಬದ ವಾತಾವರಣ ನಿರ್ಮಾಣವಾಗಿದೆ.ಜಾತ್ರಾ ಮಹೋತ್ಸವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಭಕ್ತರ ಅನುಕೂಲಕ್ಕಾಗಿ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವ ಕಾರ್ಯವೂ ನಡೆಯುತ್ತಿದೆ. ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಜಾತ್ರಾ ಮಹೋತ್ಸವವನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ.