ಮಡಿಕೇರಿ ಎ.ಎಲ್.ಜಿ. ಕ್ರೆಸೆಂಟ್ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಡಿಕೇರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು ವತಿಯಿಂದ ವಿದ್ಯಾರ್ಥಿಗಳಿಗಾಗಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮದ ಅಂಗವಾಗಿ ದುಶ್ಚಟಗಳಿಂದಾಗುವ ಹಾನಿಗಳು ಹಾಗೂ ಅವುಗಳಿಂದ ದೂರವಿರುವ ಕುರಿತು ಜಾಗೃತಿ ಕಾರ್ಯಾಗಾರ ನಡೆಯಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಮಡಿಕೇರಿ ಎ.ಎಲ್.ಜಿ. ಕ್ರೆಸೆಂಟ್ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಡಿಕೇರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು ವತಿಯಿಂದ ವಿದ್ಯಾರ್ಥಿಗಳಿಗಾಗಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮದ ಅಂಗವಾಗಿ ದುಶ್ಚಟಗಳಿಂದಾಗುವ ಹಾನಿಗಳು ಹಾಗೂ ಅವುಗಳಿಂದ ದೂರವಿರುವ ಕುರಿತು ಜಾಗೃತಿ ಕಾರ್ಯಾಗಾರ ನಡೆಯಿತು.ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಪನ್ಯಾಸಕರಾದ ನಂದಕುಮಾರ್ ಪಿ ಪಿ ಅವರು ವಿದ್ಯಾರ್ಥಿಗಳಿಗೆ ದುಶ್ಚಟಗಳ ದುಷ್ಪರಿಣಾಮಗಳು, ಅವುಗಳಿಂದ ಆರೋಗ್ಯ ಮತ್ತು ಭವಿಷ್ಯದ ಮೇಲೆ ಉಂಟಾಗುವ ಹಾನಿಗಳು ಹಾಗೂ ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಜೀವನ ನಡೆಸುವ ಕುರಿತು ಪರಿಣಾಮಕಾರಿಯಾಗಿ ಮಾಹಿತಿ ನೀಡಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕೊಡಗು ಜಿಲ್ಲೆಯ ಸದಸ್ಯರಾದ ಟಿ.ಎಂ. ಅಯ್ಯಪ್ಪ ಅವರು ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ, ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು ವ್ಯಸನಮುಕ್ತರಾಗಿ ಯಶಸ್ವಿ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲೀಲಾ ಅವರು ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಕಲಿಕೆಯತ್ತ ಗಮನಹರಿಸಿ, ಶಿಸ್ತು ಮತ್ತು ಸತ್ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉಜ್ವಲ ಭವಿಷ್ಯವನ್ನು ನಿರ್ಮಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ವಿನೋದ, ಸೇವಾಪ್ರತಿನಿಧಿ ಪ್ರೇಮ, ಶಾಲೆಯ ಪ್ರಾಂಶುಪಾಲರಾದ ಜಾಯ್ಸ್ ವಿನಯ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸುವುದರೊಂದಿಗೆ, ಆರೋಗ್ಯಕರ, ಶಿಸ್ತುಬದ್ಧ ಮತ್ತು ಜವಾಬ್ದಾರಿಯುತ ಜೀವನ ನಡೆಸುವ ಸಂಕಲ್ಪವನ್ನು ಬಲಪಡಿಸಿತು.