ಗುಬ್ಬಿ: ಇತ್ತೀಚಿನ ದಿನದಲ್ಲಿ ಯುವಜನತೆ ಮಾನಸಿಕ ಒತ್ತಡಕ್ಕೆ ತುತ್ತಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂದು ತಹಸೀಲ್ದಾರ್ ಬಿ. ಆರತಿ ತಿಳಿಸಿದರು.

ತಾಲೂಕು ಕಚೇರಿಯ ಮುಂಭಾಗದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ನಶಾ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯುವ ಜನರು ಗಾಂಜಾ, ಹೆರಾಯಿನ್, ಅಫೀಮು ಮತ್ತಿತರ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುತ್ತಿದ್ದಾರೆ. ಸಾರ್ವಜನಿಕರು ಯುವಜನತೆಯ ಚಲನ ವಲನ ಕಡೆಗೆ ಗಮನಹರಿಸಿ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದರು.ಸರ್ಕಲ್ ಇನ್‌ಸ್ಪೆಕ್ಟರ್ ರಾಘವೇಂದ್ರ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ಮಾದಕ ವಸ್ತುಗಳ ವ್ಯಸನಕ್ಕೆ ದಾಸರಾಗುತ್ತಿರುವುದು ಸಮಾಜಕ್ಕೆ ಮಾರಕವಾಗಿದೆ. ಮಾದಕ ವಸ್ತುಗಳ ಬಳಕೆಯಿಂದಾಗಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು ಈ ಬಗ್ಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದರು.

ಜಾಥಾ ಕಾರ್ಯಕ್ರಮದಲ್ಲಿ ಸಬ್ ಇನ್‌ಸ್ಪೆಕ್ಟರ್ ರಾಜೇಶ್ವರಿ, ಪ್ರೊಫೆಷನರಿ ಪಿಎಸ್ಐ ಸಿದ್ದೇಶ್, ಗಂಗರಾಜ್ ಎಸ್., ಇಮಾಕಾಂತ್, ಪಲ್ಲವಿ, ಶ್ರೀನಿವಾಸ್, ಶ್ಯಾಮರಾಜು, ಸೇರಿದಂತೆ ಪೊಲೀಸ್ ಸಿಬ್ಬಂದಿ, ಶಾಲಾ ಮಕ್ಕಳು ಶಿಕ್ಷಕರು ಉಪಸ್ಥಿತರಿದ್ದರು.