ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕಬ್ಬಿನ ಬೆಲೆ ನಿಗದಿ ಕುರಿತು ಚರ್ಚಿಸುವ ನೆಪದಲ್ಲಿ ರೈತ ಮುಖಂಡರನ್ನು ದೆಹಲಿಗೆ ಕರೆಸಿ, ರೈತರ ಬೇಡಿಕೆಗಳಿಗೆ ನ್ಯಾಯಯುತ ಪರಿಹಾರ ನೀಡದೆ ಅವಮಾನಿಸಿದರೆ ನಾವು ಸಹಿಸುವುದಿಲ್ಲ. ಕಬ್ಬು ಬೆಳೆಗಾರರ ಹಿತಾಸಕ್ತಿ ಕಡೆಗಣಿಸಿದರೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಂಘಟನೆಯ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹಾಗೂ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಎಚ್ಚರಿಕೆ ನೀಡಿದರು.

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಕಬ್ಬಿನ ಬೆಲೆ ನಿಗದಿ ಕುರಿತು ಚರ್ಚಿಸುವ ನೆಪದಲ್ಲಿ ರೈತ ಮುಖಂಡರನ್ನು ದೆಹಲಿಗೆ ಕರೆಸಿ, ರೈತರ ಬೇಡಿಕೆಗಳಿಗೆ ನ್ಯಾಯಯುತ ಪರಿಹಾರ ನೀಡದೆ ಅವಮಾನಿಸಿದರೆ ನಾವು ಸಹಿಸುವುದಿಲ್ಲ. ಕಬ್ಬು ಬೆಳೆಗಾರರ ಹಿತಾಸಕ್ತಿ ಕಡೆಗಣಿಸಿದರೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಂಘಟನೆಯ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹಾಗೂ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಎಚ್ಚರಿಕೆ ನೀಡಿದರು.

ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.12ರಂದು ದೆಹಲಿಯಲ್ಲಿ ನಡೆಯಲಿರುವ ಕಬ್ಬಿನ ಬೆಲೆ ಕುರಿತ ಸಭೆಯಲ್ಲಿ ರೈತರ ಪರವಾದ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದರೆ ಅ.13ರಿಂದ ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ತಡೆ ನಡೆಸುವುದರ ಜೊತೆಗೆ ಜೈಲ್‌ ಭರೋ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.ಕಳೆದ ಏಳೆಂಟು ವರ್ಷಗಳಿಂದ ಕಬ್ಬಿನ ಬೆಲೆಯಲ್ಲಿ ಸಮರ್ಪಕ ಹೆಚ್ಚಳವಾಗಿಲ್ಲ. ಒಂದು ಟನ್ ಕಬ್ಬು ಬೆಳೆಯಲು ಸುಮಾರು ₹4000 ವೆಚ್ಚವಾಗುತ್ತದೆ ಎಂದು ಕೃಷಿ ವಿಜ್ಞಾನಿಗಳ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಉತ್ಪಾದನಾ ವೆಚ್ಚವನ್ನೂ ಭರಿಸಲಾಗದ ಬೆಲೆ ನೀಡಿದರೆ ರೈತರು ಕೃಷಿ ಮುಂದುವರಿಸುವುದಾದರೂ ಹೇಗೆ ಎಂದು ಪ್ರಶ್ನಿಸಿದರು.ಸಾಲ ಮಾಡಿ ಬೆಳೆ ಬೆಳೆದು ಹಗಲಿರುಳು ಶ್ರಮಿಸುವ ರೈತರಿಗೆ ನ್ಯಾಯಯುತ ಆದಾಯ ದೊರೆಯುತ್ತಿಲ್ಲ. ಕಬ್ಬಿನ ಬೆಲೆ ಹೆಚ್ಚಳಕ್ಕೆ ಒತ್ತಾಯಿಸಿದಾಗ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು ಸರ್ಕಾರದತ್ತ ಬೆಟ್ಟು ಮಾಡಿ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿವೆ. ಸರ್ಕಾರಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.ಕಬ್ಬಿನ ತೂಕ, ರಿಕವರಿ ಬಗ್ಗೆ ಪಾರದರ್ಶಕತೆ ಇರಲಿ:

ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬಿನ ತೂಕದಲ್ಲಿ ಮೋಸವಾಗುತ್ತಿದೆ ಎಂಬ ದೂರುಗಳಿದ್ದು, ಸಂಬಂಧಿಸಿದ ಅಧಿಕಾರಿಗಳು ಸಮಗ್ರ ಪರಿಶೀಲನೆ ನಡೆಸಬೇಕು. ಕಾರ್ಖಾನೆಗಳು ರೈತರಿಗೆ ನೀಡುತ್ತಿರುವ ದರ, ಕಬ್ಬಿನ ತೂಕ, ಸಕ್ಕರೆ ರಿಕವರಿ ಪ್ರಮಾಣ ಹಾಗೂ ರೈತರು ಮತ್ತು ಕಾರ್ಮಿಕರಿಗೆ ಕಲ್ಪಿಸಿರುವ ಸೌಲಭ್ಯಗಳ ಕುರಿತು ಪಾರದರ್ಶಕ ಮಾಹಿತಿ ಒದಗಿಸಬೇಕು ಎಂದು ಆಗ್ರಹಿಸಿದರು.ಯರಗಲ್ಲ ಸಮೀಪದ ಶ್ರೀ ಬಾಲಾಜಿ ಸಕ್ಕರೆ ಕಾರ್ಖಾನೆ ಸೇರಿದಂತೆ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳಲ್ಲಿ ಕಾರ್ಮಿಕರ ಶೋಷಣೆ ತಡೆಯಲು ಜಿಲ್ಲಾಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಶ್ರೀ ಬಾಲಾಜಿ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಪೂಜೆಯನ್ನು ಜಿಲ್ಲಾಧಿಕಾರಿಗಳ ಅನುಮತಿ ಪಡೆದ ನಂತರವೇ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.ಕಾರ್ಖಾನೆಗಳಲ್ಲಿ ನೈಜ ಸಕ್ಕರೆ ರಿಕವರಿ ಪ್ರಮಾಣ ಎಷ್ಟಿದೆ, ರೈತರಿಗೆ ಮತ್ತು ಕಾರ್ಮಿಕರಿಗೆ ಯಾವೆಲ್ಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂಬುದನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.ಅ.13ಕ್ಕೆ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ:

ಇಂದು ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಕಬ್ಬು ಬೆಳೆಗಾರರ ಪರವಾದ ನಿರ್ಧಾರ ಕೈಗೊಳ್ಳದಿದ್ದರೆ, ಅ.13ರಂದು ರಾಜ್ಯದಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ತಡೆ ನಡೆಸಲಾಗುವುದು. ಇದರೊಂದಿಗೆ ಜೈಲಭರೋ ಚಳವಳಿಯನ್ನೂ ಹಮ್ಮಿಕೊಂಡು ಸರ್ಕಾರದ ಗಮನ ಸೆಳೆಯಲಾಗುವುದು. ರೈತರಿಗೆ ನ್ಯಾಯ ದೊರೆಯುವವರೆಗೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಶಾಂತಗೌಡ ಪಾಟೀಲ ನಡಹಳ್ಳಿ ಹಾಗೂ ಸಂಗಮೇಶ ಸಗರ ಸ್ಪಷ್ಟಪಡಿಸಿದರು.ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ, ನಿಡಗುಂದಿ ತಾಲೂಕು ಘಟಕದ ಅಧ್ಯಕ್ಷ ಸೀತಪ್ಪ ಗಣಿ, ಪ್ರಧಾನ ಕಾರ್ಯದರ್ಶಿ ಶಶಿಕಾಂತ ಪಾಟೀಲ, ತಾಳಿಕೋಟೆ ಯುವ ಘಟಕದ ಅಧ್ಯಕ್ಷ ದೇವರಾಜ ಗುಂಡಕನಾಳ, ಅಡವಿಸೋಮನಾಳ ಪಂಚಾಯಿತಿ ಘಟಕದ ಅಧ್ಯಕ್ಷ ಸಂಗು ಪೂಜಾರಿ ಸೇರಿದಂತೆ ಹಲವಾರು ರೈತ ಮುಖಂಡರು ಉಪಸ್ಥಿತರಿದ್ದರು.

----

ಕೋಟ್‌ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ವಿಫಲವಾಗಿವೆ. ಕೃಷಿಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧ, ಕಾರ್ಮಿಕರ ಕೂಲಿ ಹಾಗೂ ಸಾಗಣೆ ವೆಚ್ಚ ನಿರಂತರವಾಗಿ ಏರಿಕೆಯಾಗುತ್ತಿದ್ದರೂ ಕಬ್ಬಿಗೆ ಮಾತ್ರ ಸೂಕ್ತ ಬೆಲೆ ಸಿಗುತ್ತಿಲ್ಲ. ಸಕ್ಕರೆಯ ಬೆಲೆ ಹೆಚ್ಚಾದರೂ ಅದರ ಲಾಭ ಕಬ್ಬು ಬೆಳೆಗಾರರಿಗೆ ತಲುಪುತ್ತಿಲ್ಲ.ಶಾಂತಗೌಡ ಪಾಟೀಲ ನಡಹಳ್ಳಿ, ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷಬಾಕ್ಸ್‌ಶೋಷಣೆ ತಡೆಯದಿದ್ದರೆ ಕಚೇರಿಗೆ ಬೀಗಸಕ್ಕರೆ ಕಾರ್ಖಾನೆಗಳಲ್ಲಿ ಕಾರ್ಮಿಕರ ಹಕ್ಕುಗಳ ಉಲ್ಲಂಘನೆ ಮತ್ತು ಶೋಷಣೆ ನಡೆಯುತ್ತಿದ್ದರೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಮೌನ ವಹಿಸಬಾರದು. ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸದಿದ್ದರೆ ಕಾರ್ಮಿಕ ಇಲಾಖೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.ರೈತರು ದೇಶದ ಅನ್ನದಾತರಾಗಿದ್ದರೂ ತಮ್ಮ ಬೆಳೆಗಳಿಗೆ ನ್ಯಾಯಯುತ ಬೆಲೆ ಪಡೆಯಲು ಬೀದಿಗಿಳಿದು ಹೋರಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸಭೆಗಳಿಗೆ ಕರೆಸಿ ಭರವಸೆ ನೀಡಿ ಕಳುಹಿಸುವ ಪದ್ಧತಿಗೆ ಅಂತ್ಯ ಹಾಡಬೇಕು. ರೈತರ ತಾಳ್ಮೆಯನ್ನು ಪರೀಕ್ಷಿಸದೆ ಅವರ ಬೇಡಿಕೆಗಳಿಗೆ ಸರ್ಕಾರಗಳು ತಕ್ಷಣ ಸ್ಪಂದಿಸಬೇಕು ಎಂದು ಹೇಳಿದರು.