ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆ ಹಾಗೂ ತಾಲೂಕಿನಲ್ಲಿ ಬರಗಾಲದ ಛಾಯೆ ಆವರಿಸಿದೆ. ಇಂತಹ ಸಂದರ್ಭದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಳ್ಳುವುದಕ್ಕಿಂತ ಗ್ರಾಮೀಣ ಭಾಗಗಳಿಗೆ ತೆರಳಿ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು.

ಬ್ಯಾಡಗಿ: ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆ ಹಾಗೂ ತಾಲೂಕಿನಲ್ಲಿ ಬರಗಾಲದ ಛಾಯೆ ಆವರಿಸಿದೆ. ಇಂತಹ ಸಂದರ್ಭದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಳ್ಳುವುದಕ್ಕಿಂತ ಗ್ರಾಮೀಣ ಭಾಗಗಳಿಗೆ ತೆರಳಿ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಕುಡಿಯುವ ನೀರು, ಮೇವು, ವಿದ್ಯುತ್ ಸೇರಿದಂತೆ ಯಾವುದೇ ಮೂಲಭೂತ ಸೌಲಭ್ಯಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಶಾಸಕ ಬಸವರಾಜ ಶಿವಣ್ಣನವರ ಖಡಕ್ ಎಚ್ಚರಿಕೆ ನೀಡಿದರು.

ಸೋಮವಾರ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆ ಅಭಾವದಿಂದ ರೈತರು ಬೆಳೆ ಹಾನಿ, ನೀರಿನ ಕೊರತೆ ಹಾಗೂ ಜಾನುವಾರುಗಳಿಗೆ ಮೇವು ಸಿಗದ ಸಮಸ್ಯೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಅಧಿಕಾರಿಗಳು ಪರಿಸ್ಥಿತಿಯ ಗಂಭೀರತೆಯನ್ನು ಅರಿತು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಕಾಮಗಾರಿಗಳಿಗೆ ವೇಗ ನೀಡಿ:ಜಿಲ್ಲಾ ಪಂಚಾಯತ್, ಲೋಕೋಪಯೋಗಿ ಇಲಾಖೆ, ಸಣ್ಣ ನೀರಾವರಿ, ನಿರ್ಮಿತಿ ಕೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಕೋಟ್ಯಂತರ ರುಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗುತ್ತಿರುವುದಕ್ಕೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು. "ಕೆಲವು ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿವೆ, ಇನ್ನೂ ಕೆಲವು ಆರಂಭವೇ ಆಗಿಲ್ಲ. ಸರ್ಕಾರ ಜನರ ಅಭಿವೃದ್ಧಿಗಾಗಿ ಹಣ ಬಿಡುಗಡೆ ಮಾಡಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯೋಜನೆಗಳು ನನೆಗುದಿಗೆ ಬಿದ್ದಿವೆ. ತಕ್ಷಣ ಕಾಮಗಾರಿಗಳಿಗೆ ವೇಗ ನೀಡಿ, ಇಲ್ಲವಾದರೆ ತಾಲೂಕು ಬಿಟ್ಟು ಹೋಗಲು ಸಿದ್ಧರಾಗಿ " ಎಂದು ಎಚ್ಚರಿಸಿದರು.

ಕುಡಿಯುವ ನೀರಿಗೆ ಮೊದಲ ಆದ್ಯತೆ:ತಾಲೂಕಿನ ಅನೇಕ ಗ್ರಾಮಗಳಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಕೊಳವೆಬಾವಿಗಳು ಬತ್ತುತ್ತಿವೆ. ಈ ಹಿನ್ನೆಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತಕ್ಷಣ ದುರಸ್ತಿ ಮಾಡಬೇಕು. ಅಗತ್ಯವಿದ್ದರೆ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ಗ್ರಾಮಗಳಿಗೆ ನೀರು ಪೂರೈಸಬೇಕು. ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಪರಿಸ್ಥಿತಿ ಬಂದರೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪಟ್ಟಣದ ಬಹುನಿರೀಕ್ಷಿತ ಮುಖ್ಯರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಿಯಾಗಿರುವ ಹಾಗೂ ವಿದ್ಯು ತ್ ಕಂಬಗಳನ್ನು ಕೂಡಲೇ ತೆರವುಗೊಳಿಸಿ ಕಾಮಗಾರಿ ಆರಂಭಿಸಬೇಕು. ಜಾಗ ನೀಡಿ ಸಹಕರಿಸಿದ ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಗೆ ಅನಗತ್ಯ ತೊಂದರೆಯಾಗದಂತೆ ಕಾಮಗಾರಿ ನಡೆಸಬೇಕು. ಮಳೆಗಾಲ ಆರಂಭವಾಗುವ ಮುನ್ನವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡುವಂತೆ ಸಂಬಂಧಿಸಿದ ಇಲಾಖೆಗೆ ಸೂಚಿಸಿದರು.

ಹೆಸ್ಕಾಂ ಇಲಾಖೆ ರೈತರಿಗೆ ಸತತ ಏಳು ಗಂಟೆಗಳ ಕಾಲ ವಿದ್ಯುತ್ ನೀಡುತ್ತಿರುವುದರಿಂದ ನೀರಿಲ್ಲದ ಕೊಳವೆಬಾವಿಗಳಲ್ಲಿ ಮೋಟಾರ್‌ಗಳು ಹಾಳಾಗುತ್ತಿವೆ. ಆದ್ದರಿಂದ ಹಗಲು 4 ಗಂಟೆ ಹಾಗೂ ರಾತ್ರಿ 3 ಗಂಟೆ ವಿದ್ಯುತ್ ಪೂರೈಸಬೇಕು. ಟಿಸಿ ಸುಟ್ಟ ರೈತರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸದೆ ತ್ವರಿತವಾಗಿ ಹೊಸ ಟ್ರಾನ್ಸಫಾರ್ಮರ್ ಅಳವಡಿಸಬೇಕು ಎಂದು ಸೂಚಿಸಿದರು.

ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿ ಎರಡು ವರ್ಷಗಳಾದರೂ ಕಾಮಗಾರಿ ಪೂರ್ಣಗೊಳ್ಳದಿರುವುದಕ್ಕೆ ಜಿಪಂ ಎಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡ ಶಾಸಕರು, "ಸರ್ಕಾರದಲ್ಲಿ ಹಣ ಇಲ್ಲ ಎನ್ನುವ ನೆಪ ಹೇಳುವುದನ್ನು ಬಿಟ್ಟು ಜನರ ಕೆಲಸ ಮಾಡಿ. ಕಚೇರಿಯಲ್ಲೇ ಕುಳಿತು ಕಾಲಹರಣ ಮಾಡಲು ಸರ್ಕಾರಿ ಉದ್ಯೋಗ ನೀಡಿಲ್ಲ. ಪ್ರತಿಯೊಬ್ಬ ಅಧಿಕಾರಿಯೂ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು " ಎಂದು ಕಿಡಿಕಾರಿದರು.

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಬರ ಪರಿಸ್ಥಿತಿಯ ಕುರಿತು ದಿನನಿತ್ಯ ವರದಿ ಸಲ್ಲಿಸಬೇಕು. ಕುಡಿಯುವ ನೀರು, ಮೇವು, ಜಾನುವಾರುಗಳ ಆರೋಗ್ಯ, ಬೆಳೆ ಹಾನಿ ಹಾಗೂ ವಿದ್ಯುತ್ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು. ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಸ್ಥಳದಲ್ಲಿಯೇ ಪರಿಹರಿಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಹಾವೇರಿ ಹಾಗೂ ಬ್ಯಾಡಗಿ ತಹಸೀಲ್ದಾರರು, ಬ್ಯಾಡಗಿ, ರಾಣೆಬೆನ್ನೂರ, ಹಾವೇರಿ, ತಾಲೂಕಿನ ತಾಲೂಕ ಮಟ್ಟದ ಎಲ್ಲಾ ಅಧಿಕಾರಿಗಳು ಪಿಡಿಓ ಗ್ರಾಮ ಲೆಕ್ಕಾಧಿಕಾರಿಗಳು ಭಾಗವಹಿಸಿದ್ದರು.

ಮುಖ್ಯರಸ್ತೆಯಲ್ಲಿ ಬಸ್ ಸಂಚಾರ ಪುನರಾರಂಭಿಸಿ: ಮುಖ್ಯರಸ್ತೆ ಮೂಲಕ ಎಂದಿನಂತೆ ಬಸ್ ಸಂಚಾರ ಆರಂಭಿಸಬೇಕು. ಬಸ್‌ಗಳು ಬಸ್ ನಿಲ್ದಾಣಕ್ಕೆ ತೆರಳುವಂತೆ ವ್ಯವಸ್ಥೆ ಮಾಡಬೇಕು. ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗುವುದರ ಜೊತೆಗೆ ಆಟೋ ಚಾಲಕರು ಹಾಗೂ ಸಣ್ಣ ವ್ಯಾಪಾರಿಗಳ ಜೀವನೋಪಾಯಕ್ಕೂ ನೆರವಾಗಲಿದೆ. ನಾಳೆಯಿಂದಲೇ ಬಸ್ ಸಂಚಾರ ಆರಂಭಿಸಿ ಯಾವುದೇ ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಡಿಪೋ ವ್ಯವಸ್ಥಾಪಕರಿಗೆ ಶಾಸಕರು ಸೂಚನೆ ನೀಡಿದರು.