ಬೀದಿನಾಯಿಗಳ ಸಂತಾನಶಕ್ತಿ ಹರಣ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲು ಸೂಕ್ತ ಜಾಗಗಳನ್ನು ಗುರುತಿಸಿ ಕ್ರಮ ಜರುಗಿಸಬೇಕು. ಪ್ರತಿ ಹೋಬಳಿ ಮಟ್ಟಗಳಲ್ಲಿ ಬೀದಿನಾಯಿಗಳ ಪಾಲನಾ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.
ಗದಗ: ಜಿಲ್ಲೆಯಲ್ಲಿ ಬೀದಿನಾಯಿಗಳ ಹಾವಳಿ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಬೀದಿನಾಯಿಗಳ ಹಾವಳಿ ನಿಯಂತ್ರಣ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಗರದ ಬಸ್ ನಿಲ್ದಾಣ, ಅಂಗನವಾಡಿ ಕೇಂದ್ರ, ಹೋಟೆಲ್, ಹಾಸ್ಟೆಲ್‌ಗಳ ವ್ಯಾಪ್ತಿಯಲ್ಲಿ ಸಂಬಂಧಿತ ಅಧಿಕಾರಿಗಳು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಅವರ ಮೂಲಕ ಬೀದಿನಾಯಿಗಳ ಸಂಖ್ಯೆಯ ವಿವರವನ್ನು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದರು.
ಬೀದಿನಾಯಿಗಳ ಸಂತಾನಶಕ್ತಿ ಹರಣ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲು ಸೂಕ್ತ ಜಾಗಗಳನ್ನು ಗುರುತಿಸಿ ಕ್ರಮ ಜರುಗಿಸಬೇಕು. ಪ್ರತಿ ಹೋಬಳಿ ಮಟ್ಟಗಳಲ್ಲಿ ಬೀದಿನಾಯಿಗಳ ಪಾಲನಾ ಕೇಂದ್ರಗಳನ್ನು ಸ್ಥಾಪಿಸಬೇಕು. ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ಈವರೆಗೆ ಕೈಗೊಂಡ ಕ್ರಮಗಳ ಕುರಿತು ಆಯಾ ಸಂಸ್ಥೆಗಳ ಮುಖ್ಯಸ್ಥರು ಮುಚ್ಚಳಿಕೆ ಪತ್ರ ಸಲ್ಲಿಸಲು ಸೂಚಿಸಿದರು.ಬೀದಿನಾಯಿಗಳಿಂದ ಮಕ್ಕಳಿಗೆ, ಮಹಿಳೆಯರಿಗೆ, ಹಿರಿಯ ನಾಗರಿಕರಿಗೂ ಅಪಾಯ ಉಂಟಾಗುತ್ತಿರುವ ಘಟನೆಗಳು ಕೆಲವೆಡೆ ವರದಿಯಾಗಿರುವ ಹಿನ್ನೆಲೆ ಸಮಸ್ಯೆ ಗಂಭೀರವಾಗುವ ಮುನ್ನ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.ಬೀದಿನಾಯಿಗಳನ್ನು ಸುರಕ್ಷಿತವಾಗಿ ವಶಪಡಿಸಿಕೊಳ್ಳಲು ವಿಶೇಷ ತಂಡ ರಚನೆ, ಅವುಗಳಿಗೆ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ, ರೇಬಿಸ್ ಲಸಿಕೆ, ಆರೋಗ್ಯ ತಪಾಸಣೆ ನಡೆಸಿ, ಗುರುತು ಹಾಕಿ ಹಿಂದಿರುಗಿ ಬೀಡುವ ಕುರಿತು ಚರ್ಚಿಸಲಾಯಿತು.
ಜಿಲ್ಲಾದ್ಯಂತ ಕಸದ ಸಮರ್ಪಕ ನಿರ್ವಹಣೆಗಾಗಿ ಮಾರುಕಟ್ಟೆ, ಹೋಟೆಲ್, ಮಾಂಸದಂಗಡಿಗಳು, ಸಾರ್ವಜನಿಕ ಸ್ಥಳಗಳ ತ್ಯಾಜ್ಯವನ್ನು ಮುಚ್ಚಿದ ಡಬ್ಬಿಗಳಲ್ಲಿ ಸಂಗ್ರಹಿಸುವ ಬಗ್ಗೆ ಕಟ್ಟುನಿಟ್ಟಿನ ಸೂಚನೆ ನೀಡಲು ಚರ್ಚಿಸಲಾಯಿತು.ಈ ವೇಳೆ ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಿವೈಎಸ್‌ಪಿ ಮಹಾಂತೇಶ ಸಜ್ಜನ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮೆಹಬೂಬ ತುಂಬರಮಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ. ಸೇರಿದಂತೆ ನಗರ, ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ ಇದ್ದರು.