ಅಬಕಾರಿ ಅಕ್ರಮದ ಕುರಿತು ಚರ್ಚಿಸಲು ಕೆ.ಡಿ.ಪಿ. ಸಭೆಗೆ ಗೈರು ಹಾಜರಾದ ಸಂಬಂಧಪಟ್ಟ ಅಬಕಾರಿ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವರು ತಿಳಿಸಿದರು.

ಕಾರವಾರ: ಜಿಲ್ಲೆಯಲ್ಲಿ ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಅಕ್ರಮಗಳನ್ನು ತಡೆಯುವಲ್ಲಿ ಅಬಕಾರಿ ಅಧಿಕಾರಿಗಳು ವಿಫಲವಾಗಿದ್ದು, ಈ ಅಕ್ರಮಗಳನ್ನು ಸಂಪೂರ್ಣವಾಗಿ ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅವರು ಗುರುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉತ್ತರ ಕನ್ನಡ ಜಿಲ್ಲೆಯ ಮಾರ್ಗವಾಗಿ ಟ್ಯಾಂಕರ್‌ಗಳ ಮೂಲಕ ಅಕ್ರಮವಾಗಿ ಸ್ಪಿರಿಟ್ ಸಾಗಾಣೆಯ ಗೋವಾ ರಾಜ್ಯಕ್ಕೆ ತೆರಳುತ್ತಿದ್ದು, ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ, ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಅಬಕಾರಿ ಇಲಾಖೆಯ ಚೆಕ್ ಪೋಸ್ಟ್‌ಗಳು ಇದ್ದರೂ ಕೂಡಾ ಈ ಅಕ್ರಮ ಸಾಗಾಣಿಕೆ ನಡೆಯಿತ್ತಿರುವುದು ಅಬಕಾರಿ ಇಲಾಖೆ ಅಧಿಕಾರಿಗಳ ಕಾರ್ಯ ವೈಫಲ್ಯ ತೋರಿಸುತ್ತದೆ. ಈ ಅಕ್ರಮ ಸಾಗಾಟದಿಂದ ರಾಜ್ಯದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿಗಳ ನಷ್ಟವಾಗುತ್ತಿದೆ ಎಂದ ಸಚಿವರು, ಇದನ್ನು ತಡೆಯಲು ಅಬಕಾರಿ ಇಲಾಖೆಯಿಂದ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಈ ಘಟನೆಯು ಅಬಕಾರಿ ಅಕ್ರಮ ತಡೆಗೆ ಇರುವ ಇಲಾಖೆಯೇ ಬೇಲಿ ಇದ್ದು ಹೊಲ ಮೇಯ್ದಂತೆ ಆಗಿದೆ. ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಮನೆಗೆ ಕಳಿಸಲಾಗುವುದು ಎಂದು ಎಚ್ಚರಿಸಿದ ಸಚಿವರು, ಈ ಬಗ್ಗೆ ಪೊಲೀಸ್ ಇಲಾಖೆಯ ಮೂಲಕವೂ ಪರಿಶೀಲನೆ ಕಾರ್ಯ ನಡೆಸುವಂತೆ ತಿಳಿಸಿದರು.

ಈ ಅಬಕಾರಿ ಅಕ್ರಮದ ಕುರಿತು ಚರ್ಚಿಸಲು ಕೆ.ಡಿ.ಪಿ. ಸಭೆಗೆ ಗೈರು ಹಾಜರಾದ ಸಂಬಂಧಪಟ್ಟ ಅಬಕಾರಿ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವರು ತಿಳಿಸಿದರು.

ಜಿಲ್ಲೆಯಲ್ಲಿ ಬರ ಘೋಷಣೆಯಾಗಿರುವ ಈ ಸಂದರ್ಭದಲ್ಲಿ ಕುಡಿಯುವ ನೀರಿನ ಮತ್ತು ಮೇವಿನ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಸಚಿವರು ಈಗಾಗಲೇ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ಬಿಡುಗಡೆಯಾಗಿರುವ 1 ಕೋಟಿ ರೂಗಳಿಗೆ ಶಾಸಕರ ಅನುಮೋದನೆಯೊಂದಿಗೆ ಟಾಸ್ಕ್ ಪೋರ್ಸ್ ಮೂಲಕ ತುರ್ತು ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿ, ಹೆಚ್ಚಿನ ಅನುದಾನದ ಅಗತ್ಯವಿದ್ದಲ್ಲಿ ಸರ್ಕಾರದಿಂದ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದರು.

ಜಿಲ್ಲೆಯ ಜನತೆ ಬೇಡ್ತಿ- ಅಘನಾಶಿನಿ ನದಿ ಯೋಜನೆಗೆ ತೀವ್ರ ಪ್ರತಿಭಟನೆ ಮತ್ತು ವಿರೋಧ ವ್ಯಕ್ತಪಡಿಸುತ್ತಿದ್ದು, ಈ ಯೋಜನೆಯನ್ನು ವಿರೋಧಿಸಿ ಕೆ.ಡಿ.ಪಿ ಸಭೆಯಲ್ಲಿ ನಿರ್ಣಯ ಕೈಗೊಳ್ಳುವಂತೆ ಶಾಸಕ ಭೀಮಣ್ಣ ನಾಯ್ಕ ಮತ್ತು ಶಿವರಾಮ ಹೆಬ್ಬಾರ್ ಕೋರಿದ್ದು, ಈ ನಿರ್ಣಯವನ್ನು ಅನುಮೋದಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಹಳೆಯ ಸ್ಕ್ರ್ಯಾಫ್ ಮಾಡಿದ ಬಸ್‌ಗಳಿಗೆ ಅನುಗುಣವಾಗಿ ಹೊಸ ಬಸ್ ಗಳನ್ನು ಒದಗಿಸುವಂತೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಸಿದ್ದಾಪುರದಲ್ಲಿ ಬಸ್ ಡಿಪೋ ಆರಂಭಿಸುವ ಕುರಿತಂತೆ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಾರಿಗೆ ಸಚಿವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಅಕ್ಷರ ದಾಸೋಹ ಕಾರ್ಯಕ್ರಮದಡಿಯಲ್ಲಿ ಮಕ್ಕಳಿಗೆ ನೀಡುತ್ತಿರುವ ಊಟದ ಗುಣಮಟ್ಟವನ್ನು ಖುದ್ದು ಅಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮಕ್ಕಳೊಂದಿಗೆ ಊಟ ಮಾಡಬೇಕು, ಈ ಕುರಿತು ಪೋಟೋಗಳನ್ನು ಸಲ್ಲಿಸುವಂತೆ ತಿಳಿಸಿದ ಅವರು, ಮಕ್ಕಳಿಗೆ ನೀಡುವ ಆಹಾರದ ಗುಣಮಟ್ಟದಲ್ಲಿ ವ್ಯತ್ಯಾಸವಾಗದಂತೆ ಎಚ್ಚರಿಕೆ ವಹಿಸಬೇಕು, ಎನ್.ಜಿ.ಓಗಳ ಮೂಲಕ ನೀಡುವ ಆಹಾರವನ್ನು ಕೂಲಂಕುಷವಾಗಿ ಪರಿಶೀಲಿಸುವಂತೆ ಸೂಚಿಸಿದರು.

ಶಿರಸಿಯ ಸರ್ಕಾರಿ ಆಸ್ಪತ್ರೆಗೆ ಅಗತ್ಯವಿರುವ ಹೊಸ ಯಂತ್ರೋಪಕರಣಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು, ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಕೊರತೆಯಾಗಬಾರದು, ತಜ್ಞ ವೈದ್ಯರ ಕೊರತೆ ಇರುವ ಕಡೆಗಳಲ್ಲಿ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳಬೆಕು ಎಂದು ನಿರ್ದೇಶನ ನೀಡಿದರು.

ಲೋಕೋಪಯೋಗಿ ಇಲಾಖೆ ವತಿಯಿಂದ ರಸ್ತೆಗಳ ಗುಂಡಿ ಮುಚ್ಚದೇ ಇರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಅಪಘಾತಗಳು ಸಂಭವಿಸುತ್ತಿರುವ ಬಗ್ಗೆ ಶಾಸಕರು ನೀಡಿದ ದೂರಿನ ಕುರಿತಂತೆ, ಲೋಕೋಪಯೋಗಿ ಇಲಾಖೆಗೆ ರಸ್ತೆ ನಿರ್ವಹಣೆ ಯೋಜನೆಗೆ ಬರುವ ಅನುದಾನದ ಬಳಕೆ ಕುರಿತಂತೆ ಮೂರನೇ ವ್ಯಕ್ತಿಯಿಂದ ತಪಾಸಣೆ ನಡೆಸಿ, ಇದುವರೆಗೆ ಬಿಡುಗಡೆಯಾಗಿರುವ ಮತ್ತು ವೆಚ್ಚವಾಗಿರುವ ಮೊತ್ತದ ಮಾಹಿತಿಯನ್ನು ಪಡೆಯುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ರಾಜ್ಯ ಸರ್ಕಾರದಿಂದ ರೈತರಿಗೆ ನೀಡುವ ರು.2500 ಗಳ ಬರ ಪರಿಹಾರ ಯೋಜನೆಯಡಿ ಜಿಲ್ಲೆಯಲ್ಲಿ ರು.2.51 ಕೋಟಿ ಮೊತ್ತ ಪಾವತಿಸಲು ಅನುಮೋದನೆಗೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲೆಯ 15 ಮಂದಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಲ್ಲಿ ನೋಂದಣಿ ಮಾಡುವಾಗ ಅವರು ಜೀವಂತವಿದ್ದರೂ ತಂತ್ರಾಂಶದಲ್ಲಿ ಮೃತರು ಎಂದು ತೋರಿಸುತ್ತಿದ್ದು, ಈ ಸಮಸ್ಯೆಯನ್ನು ಬಗೆಹರಿಸುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ ಮನವಿ ಮಾಡಿದರು.

ಮುಂದಿನ ಕ್ಯಾಬಿನೆಟ್ ಸಭೆಯನ್ನು ಜಿಲ್ಲೆಯಲ್ಲಿ ಆಯೋಜನೆ ಮಾಡುವಂತೆ ಸಾಶಕ ಭೀಮಣ್ಣ ನಾಯ್ಕ ಕೋರಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ, ಜಿಲ್ಲಾಧಿಕಾರಿ ಹರ್ಷಲ್ ಬೊಯರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.