ಸಂಚಾರ ಪೊಲೀಸ್ ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಅಗತ್ಯವಿರುವೆಡೆ ಆಟೋ ಸ್ಟ್ಯಾಂಡ್ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸಬೇಕು.
ಹೊಸಪೇಟೆ: ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಅಗತ್ಯವಿರುವೆಡೆ ಸಿಸಿಟಿವಿ, ಸಂಚಾರ ನಿಯಂತ್ರಣ ಸೂಚನಾ ಫಲಕ, ಹಂಪ್ಸ್ ಹಾಗೂ ರಸ್ತೆ ದುರಸ್ತಿ ಮುಂತಾದ ಕಾರ್ಯಗಳನ್ನು ನಿಗದಿತ ವೇಳೆಯಲ್ಲಿ ತ್ವರಿತವಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಗುರುವಾರ ನಡೆದ ರಸ್ತೆ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ 6 ತಾಲೂಕುಗಳಲ್ಲಿ ಅಗತ್ಯವಿರುವ ಕಡೆ ಆಟೋ ಸ್ಟ್ಯಾಂಡ್ ನಿರ್ಮಾಣ ಮಾಡಲು ಮನವಿ ಇದ್ದು, ಸ್ಥಳೀಯ ಆಡಳಿತ ಸಂಸ್ಥೆ ಅಧಿಕಾರಿಗಳು, ಸಂಚಾರ ಪೊಲೀಸ್ ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಅಗತ್ಯವಿರುವೆಡೆ ಆಟೋ ಸ್ಟ್ಯಾಂಡ್ ನಿರ್ಮಾಣಕ್ಕೆ ಅಗತ್ಯ ಕ್ರಮ ವಹಿಸಬೇಕು. ನಗರದ ಪುನೀತ್ ರಾಜಕುಮಾರ್ ವೃತ್ತದ ಬಳಿ ಹಾಗೂ ಸಿದ್ಧಿಪ್ರಿಯಾ ಬೇಕರಿಯಿಂದ ವಿಜಯನಗರ ಕಾಲೇಜ್ ವರೆಗೆ ಲಘು ವಾಹನಗಳಿಗೆ ನಿಲುಗಡೆಗೆ ಸ್ಥಳ ಗುರುತಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್ ಈ ಕುರಿತು ಸ್ಥಳ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು.
ಹೆದ್ದಾರಿಯಲ್ಲಿ ಸಿಸಿ ಕ್ಯಾಮೆರಾ:ನಗರದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಬರುವ ಟನಲ್ ನಲ್ಲಿ ಸಿಸಿ ಕ್ಯಾಮೆರಾ, ಟನಲ್‌ನಿಂದ ಹೊಸಪೇಟೆಗೆ, ಹೊಸಪೇಟೆಯಿಂದ ನೆರೆ ಜಿಲ್ಲೆಗೆಳಿಗೆ ಸಂಪರ್ಕಿಸುವ ರಸ್ತೆ ಬಳಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ನಿರ್ದೇಶಿಸಿದರು.
ಈಗಾಗಲೇ ಅಗತ್ಯವಿರುವೆಡೆ ಸಿಸಿ ಕ್ಯಾಮೆರಾ, ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಹಾಗೆಯೇ ನಗರದ ಅನಂತಶಯನಗುಡಿ ಬಳಿ ರಸ್ತೆ ಸಂಪೂರ್ಣ ಹಾಳಾಗಿರುವುದರಿಂದ ಸ್ಥಳೀಯ ಆಡಳಿತ ಸಂಸ್ಥೆ ರಸ್ತೆ ದುರಸ್ತಿಗೆ ಅಗತ್ಯ ಕ್ರಮ ವಹಿಸುವಂತೆ ನಿರ್ದೇಶಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನಗರಸಭೆ ಅಧಿಕಾರಿಗಳು ಈ ಕುರಿತು ಈಗಾಗಲೇ ಯೋಜನೆ ರೂಪಿಸಲಾಗಿದೆ. ಅನುದಾನ ಕೊರೆತೆಯಿಂದ ದುರಸ್ತಿ ಕಾರ್ಯ ವಿಳಂಬವಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.ಜಿಲ್ಲೆಯಲ್ಲಿ ರಸ್ತೆ ಸಂಚಾರ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಹಾಗೆಯೇ ಜಿಲ್ಲೆಯಾದ್ಯಂತ ಮೈನಿಂಗ್ ವಾಹನಗಳ ಹಾವಳಿ ಹೆಚ್ಚಾಗಿದ್ದು, ಆ ವಾಹನಗಳ ವೇಗ ನಿಯಂತ್ರಣಕ್ಕೆ ಕಡಿವಾಣ ಹಾಕಬೇಕು ಎಂದು ಆರ್‌ಟಿಒ ಕೆ. ದಾಮೋದರ್‌ಗೆ ಸೂಚಿಸಿದರು.
ಈಗಾಗಲೇ ಜಿಲ್ಲೆಯಾದ್ಯಂತ ರಸ್ತೆ ಸಂಚಾರ ಸುರಕ್ಷತೆಯ ಬಗ್ಗೆ ಸಾಕಷ್ಟು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇನ್ನು ಮುಂದೆಯೂ ನಿರಂತರವಾಗಿ ಆಯೋಜಿಸಲಾಗುವುದು. ಮೈನಿಂಗ್ ವಾಹನಗಳ ಬಗ್ಗೆ ಜಿಲ್ಲೆಯಾದ್ಯಂತ ನಿರಂತರವಾಗಿ ತಪಾಸಣೆ ನಡೆಸಲಾಗುತ್ತಿದೆ. ಸಾಕಷ್ಟು ದಂಡ ಸಹ ವಿಧಿಸಲಾಗುತ್ತಿದೆ ಎಂದು ಆರ್‌ಟಿಒ ಸಭೆಗೆ ಮಾಹಿತಿ ನೀಡಿದರು.ಲೋಕೋಪಯೋಗಿ ಇಲಾಖೆ ಕಾರ್ಯ ನಿರ್ವಾಹಕ ಎಂಜಿನಿಯರ್ ದೇವದಾಸ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.