ರಾಮನಗರ: ಮಕ್ಕಳು ಸೂಕ್ಷ್ಮ ಮತಿಗಳು. ಅದನ್ನ ಅರ್ಥೈಸಿಕೊಂಡು ಅವರ ಮೇಲೆ ನಿಗಾ ಇರಿಸಿ, ಅವರಲ್ಲೇನಾದರೂ ಸಮಸ್ಯೆಗಳು ಕಂಡುಬಂದರೆ ಅವುಗಳನ್ನು ಪರಿಹರಿಸುವ ಮೂಲಕ ಉತ್ತಮ ಶಿಕ್ಷಣ ಪಡೆಯುವಂತೆ ಹಾಗೂ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗದಂತೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮವಹಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಸ್.ಮಂಜು ನಿರ್ದೇಶನ ನೀಡಿದರು
ರಾಮನಗರ: ಮಕ್ಕಳು ಸೂಕ್ಷ್ಮ ಮತಿಗಳು. ಅದನ್ನ ಅರ್ಥೈಸಿಕೊಂಡು ಅವರ ಮೇಲೆ ನಿಗಾ ಇರಿಸಿ, ಅವರಲ್ಲೇನಾದರೂ ಸಮಸ್ಯೆಗಳು ಕಂಡುಬಂದರೆ ಅವುಗಳನ್ನು ಪರಿಹರಿಸುವ ಮೂಲಕ ಉತ್ತಮ ಶಿಕ್ಷಣ ಪಡೆಯುವಂತೆ ಹಾಗೂ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗದಂತೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮವಹಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಸ್.ಮಂಜು ನಿರ್ದೇಶನ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೆಂಗಳೂರಿನ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟದಕ ಸಹಯೋಗದೊಂದಿಗೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೌಲಭ್ಯಗಳನ್ನು ತಲುಪಿಸಲು ಕ್ರಮ ವಹಿಸಬೇಕು. 18 ವರ್ಷದೊಳಗಿನ ಮಕ್ಕಳ ಮಾಹಿತಿ ಪಡೆದು ಮಕ್ಕಳು ಶಾಲೆಯಿಂದ ಹೊರಗುಳಿದಿದ್ದರೆ ಮರಳಿ ಶಾಲೆಗೆ ದಾಖಲಿಸುವ ಹಾಗೂ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಗಮನ ಹರಿಸಿ ಮಕ್ಕಳ ಶ್ರೇಯಸ್ಸಿಗೆ ಕೆಲಸ ಮಾಡಬೇಕು, ಆರ್.ಟಿ.ಇ., ಪೋಕ್ಸೋ, ಬಾಲನ್ಯಾಯ ಕಾಯ್ದೆ (ಮಕ್ಕಳ ರಕ್ಷಣೆ ಮತ್ತು ಪೋಷಣೆ) ಬಾಲ್ಯವಿವಾಹ ನಿಷೇಧ ಕಾಯ್ದೆಗಳ ಕುರಿತು ಅರಿವು ಮೂಡಿಸಬೇಕು.
ಹದಿನೆಂಟು ವರ್ಷದೊಳಗಿನ ಮಕ್ಕಳು ಹಾಗೂ ವಿಕಲಚೇತನ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳು, ಯೋಜನೆಗಳು ಹಾಗೂ ಹಕ್ಕುಗಳನ್ನು ಸಮರ್ಪಕವಾಗಿ ಅನುಷ್ಠಾನವಾಗಬೇಕು ಎಂದು ಮಂಜು ತಿಳಿಸಿದರು.ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಿ.ಆರ್.ಸವಿತಾ ಮಾತನಾಡಿ, ಮಕ್ಕಳ ಹಕ್ಕುಗಳು ಉಲ್ಲಂಘನೆ ಆಗದಿರಲು ಎಲ್ಲಾ ಇಲಾಖೆ ಅಧಿಕಾರಿಗಳ ಸಹಕಾರ ಅಗತ್ಯ. ವಲಸೆ ಬಂದವರ ಮಕ್ಕಳೂ ಸಹ ಶಿಕ್ಷಣದಿಂದ ವಂಚಿತರಾಗದಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು. 0ರಿಂದ 6 ವರ್ಷದೊಳಗಿನ ಅಂಗನವಾಡಿ ಮಕ್ಕಳಿಗೆ ಉತ್ತಮ ಪೌಷ್ಠಿಕಾಂಶವುಳ್ಳ ಆಹಾರವನ್ನು ನೀಡಿದರೆ ಭವಿಷ್ಯಕ್ಕೆ ಭದ್ರಬುನಾದಿ ನೀಡಿದಂತಾಗುತ್ತದೆ. ಆದ್ದರಿಂದ ಎಲ್ಲಾ ಮಕ್ಕಳಿಗೂ ಉತ್ತಮ ಪೌಷ್ಠಿಕಾಂಶವುಳ್ಳ ಆಹಾರವನ್ನು ಕಡ್ಡಾಯವಾಗಿ ನೀಡಬೇಕು ಎಂದರು.
ಶಿಕ್ಷಣ ಪಡೆಯುತ್ತಿರುವ ಎಲ್ಲಾ ಮಕ್ಕಳ ಮೇಲೆ ನಿಗಾ ವಹಿಸಬೇಕು. ಒಂದು ವೇಳೆ ಶಾಲೆಗೆ ಗೈರು ಹಾಜರಿಯಾಗುತ್ತಿರುವ ಮಕ್ಕಳ ಮೇಲೆ ಗಮನಹರಿಸಿ ಆ ಮಕ್ಕಳನ್ನು ಶಾಲೆಗೆ ವಾಪಸ್ ತರುವಂತಹ ಕೆಲಸಗಳನ್ನು ಮಾಡುವ ಮೂಲಕ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ಸಂಬಂಧಿಸಿದ ಅಧಿಕಾರಿಗಳು ಮಕ್ಕಳ ಹಕ್ಕುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದರು.ಗ್ರಾಮ ಮಟ್ಟದ ಅಧಿಕಾರಿಗಳಿಗೂ ಮಕ್ಕಳ ಸುರಕ್ಷತೆಯ ಬಗ್ಗೆ ಜವಾಬ್ದಾರಿಗಳಿರುತ್ತದೆ. ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಂಡು ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡಲು ಸಾಧ್ಯವಾಗುವುದಿಲ್ಲ. ಅಧಿಕಾರಿಗಳು ಶಾಲಾ-ಕಾಲೇಜು, ಆಸ್ಪತ್ರೆ, ವಸತಿ ನಿಲಯಗಳು, ಇಟ್ಟಿಗೆ ಫ್ಯಾಕ್ಟರಿಗಳಿಗೆ ಭೇಟಿ ನೀಡಬೇಕು ಎಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿದೆಯೋ ಅಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಜಿಪಂ ಸಹಾಯಕ ಕಾರ್ಯದರ್ಶಿ ಶಿವಕುಮಾರ್, ಬಾಲನ್ಯಾಯ ಮಂಡಳಿಯ ಸದಸ್ಯ ಕಾರ್ಯದರ್ಶಿ ಶಂಕರಪ್ಪ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ನಾಗರತ್ನ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಲಕ್ಷ್ಮಿ ಪ್ರಸನ್ನ ಉಪನ್ಯಾಸ ನೀಡಿದರು.ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ದಿನೇಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶಿವಕುಮಾರ್, ಆರ್.ಸಿ.ಎಚ್. ಅಧಿಕಾರಿ ಡಾ. ರಾಜು, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಅಧಿಕಾರಿ ಬಿಲಾಲ್, ಕಾರ್ಮಿಕ ಅಧಿಕಾರಿ ನಾಗೇಂದ್ರ, ವೃತ್ತ ನಿರೀಕ್ಷಕರಾದ ರಮೇಶ್, ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಅಧಿಕಾರಿ ರಜನಿ ಉಪಸ್ಥಿತರಿದ್ದರು.
23ಕೆಆರ್ ಎಂಎನ್ 2.ಜೆಪಿಜಿರಾಮನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಗಾರವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಎಸ್. ಮಂಜು ಉದ್ಘಾಟಿಸಿದರು.