ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಜಿಲ್ಲೆಯಾದ್ಯಂತ 7ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕಾ ಅಭಿಯಾನ ಏಪ್ರಿಲ್ 21 ರಿಂದ ಜೂನ್ 6 ರವರೆಗೆ ನಡೆಯಲಿದ್ದು, ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲಾ ಪಶು ವೈದ್ಯಾಧಿಕಾರಿಗಳು ಶ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.ಪಶುಪಾಲನಾ ಮತ್ತು ಪಶು ವೈದ್ಯಕೀಯ ಕಚೇರಿಯಲ್ಲಿ ಬುಧವಾರ ನಡೆದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 7ನೇ ಸುತ್ತಿನ ಕಾಲು ಬಾಯಿ ಬೇನೆ ಲಸಿಕಾ ಕಾರ್ಯಕ್ರಮದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆ ಮನೆಗೆ ತೆರಳಿ ಜಾನುವಾರುಗಳಿಗೆ ಉಚಿತ ಲಸಿಕೆ ಅಭಿಯಾನ ಹಮ್ಮಿಕೊಂಡಿರುವ ಕುರಿತು ಸ್ಥಳೀಯ ಮಟ್ಟದಲ್ಲಿ ಸಾರ್ವಜನಿಕರಿಗೆ ಮುಂಚಿತವಾಗಿಯೇ ಮಾಹಿತಿ ನೀಡಬೇಕು ಎಂದರು.ಏಳನೇ ಸುತ್ತಿಗೆ ೧೩ ಲಕ್ಷ ಲಸಿಕೆ ಸರಬರಾಜು ಆಗಿದೆ. ಕಳೆದ ವರ್ಷ ೩೦ ಸಾವಿರ ಲಸಿಕೆ ಬಾಕಿ ಉಳಿದಿದೆ. ಲಸಿಕಾ ಅಭಿಯಾನ ಯಶಸ್ಸಿಗೆ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು. ಎಸ್ಸಿ, ಎಸ್ಟಿ ವರ್ಗದವರಿಗೆ ಆಸಕ್ತ ಉಳ್ಳವರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ಪಡೆದು ಪಶು ಸಂಗೋಪನಾ ಇಲಾಖೆಯ ಯೋಜನೆಗಳು ಸಮರ್ಪಕವಾಗಿ ತಲುಪಿಸಬೇಕು ಎಂದು ತಿಳಿಸಿದರು. ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿ, ನಗರದಲ್ಲಿ ಬೀದಿ ನಾಯಗಳ ನಿರ್ವಹಣೆಗೆ ಮಹಾನಗರ ಪಾಲಿಕೆ, ಪ್ರಾಣಿ ದಯಾ ಸಂಘ, ಪಶು ಸಂಗೋಪನಾ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳೊಂದಿಗೆ ಸಮಯನ್ವದೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ.ರಾಜೀವ್ ಕೂಲೇರ್ ಮಾತನಾಡಿ, ೨೦ನೇ ಜಾನುವಾರುಗಳ ಗಣತಿಯ ಪ್ರಕಾರ ಜಿಲ್ಲೆಯಲ್ಲಿ ಒಟ್ಟು ೧೩,೯೩,೭೧೧ ಜಾನುವಾರುಗಳಿದ್ದು, ೬ನೇ ಸುತ್ತಿನ ಲಸಿಕಾ ಅಭಿಯಾನದಲ್ಲಿ ೧೨,೩೫,೧೨೩ ಜಾನುವಾರುಗಳಿಗೆ ಲಸಿಕೆ ನೀಡಲಾಗಿದೆ. 7ನೇ ಸುತ್ತಿನ ಕಾಲು ಬಾಯಿ ಬೇನೆ ಲಸಿಕೆ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಜಿಲ್ಲೆಯಲ್ಲಿ ಹದಿಮೂರು ಲಕ್ಷ ಲಸಿಕೆ ಲಭ್ಯವಿದ್ದು ಈ ಕಾರ್ಯಕ್ಕಾಗಿ ಇಲಾಖೆ ಹಾಗೂ ಇಲಾಖೆಯೇತರ ಒಟ್ಟು ೧,೧೧೧ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು. ಜಾನುವಾರುಗಳ ಸಂಖ್ಯೆ ಕಡಿಮೆ ಇರುವ ಕಾರಣ ಯರಗಟ್ಟಿಯಲ್ಲಿ ಕಳೆದ ವರ್ಷ ಲಸಿಕೆ ಪ್ರಮಾಣ ಕಡಿಮೆಯಾಗಿದೆ. ಲಸಿಕೆ ನೀಡುವುದರಿಂದ ಈವರೆಗೆ ಯಾವುದೇ ಅಡ್ಡ ಪರಿಣಾಮ ತೊಂದರೆಯಾಗಿಲ್ಲ ಎಂದು ವಿವರಿಸಿದರು. ಪೋಸ್ಟರ್ ಬಿಡುಗಡೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಸಿಇಒ ರಾಹುಲ್ ಶಿಂಧೆ ಅವರು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 7ನೇ ಸುತ್ತಿನ ಕಾಲು ಬಾಯಿ ಬೇನೆ ಲಸಿಕಾ ಅಭಿಯಾನದ ಪೋಸ್ಟರ್ ಬಿಡುಗಡೆಗೊಳಿಸಿದರು. ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ್ ಕಲಾದಗಿ, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಆನಂದ ಪಾಟೀಲ, ಪಶು ವೈದ್ಯಾಧಿಕಾರಿಗಳು, ಸಿಬ್ಬಂದಿ ಸಭೆಯಲ್ಲಿ ಉಪಸ್ಥಿತರಿದ್ದರು.