ಶೇಕಡವಾರು ಮತದಾನ ಹೆಚ್ಚಿಸಲು ಕ್ರಮ ಕೈಗೊಳ್ಳಿ: ಪಿ.ಎಸ್.ವಸ್ತ್ರದ್

| Published : Apr 04 2024, 01:01 AM IST

ಶೇಕಡವಾರು ಮತದಾನ ಹೆಚ್ಚಿಸಲು ಕ್ರಮ ಕೈಗೊಳ್ಳಿ: ಪಿ.ಎಸ್.ವಸ್ತ್ರದ್
Share this Article
  • FB
  • TW
  • Linkdin
  • Email

ಸಾರಾಂಶ

ರಜತಾದ್ರಿಯ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಸ್ವೀಪ್ ಚಟುವಟಿಕೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್ ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಮಣಿಪಾಲ

ಈ ಲೋಕಸಭಾ ಚುನಾವಣೆಯಲ್ಲಿ ಕಳೆದ ಚುನಾವಣೆಗಿಂತ ಶೇಕಡವಾರು ಹೆಚ್ಚು ಮತದಾನವಾಗುವಂತೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್ ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

ಅವರು ಬುಧವಾರ ರಜತಾದ್ರಿಯ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಸ್ವೀಪ್ ಚಟುವಟಿಕೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

2019ರ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಕೇಂದ್ರಗಳಲ್ಲಿ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಪಾರದರ್ಶಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೆಯ ಮಾಹಿತಿ, ಸಹಾಯವಾಣಿ ಹಾಗೂ ಕುಂದುಕೊರತೆಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚುನಾವಣಾ ಆಪ್ ಗಳಾದ ವಿ.ಹೆಚ್.ಎ, ಸಕ್ಷಮ್, ಸುವಿಧಾ, ಸಿ-ವಿಜಿಲ್ ಮತ್ತು 1950 ಸಹಾಯವಾಣಿ ಕುರಿತಂತೆ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲೆಯಲ್ಲಿ ವಿಶೇಷವಾಗಿ ಮಹಿಳಾ ಮತದಾರರೇ ಹೆಚ್ಚಿದ್ದಾರೆ. ಅವರಿಗೆ ಮತದಾರರ ಸಾಕ್ಷರತೆಯ ಅರಿವು ಮೂಡಿಸುವುದರ ಜೊತೆಗೆ ಮತದಾನ ಮಾಡಲು ಉತ್ತೇಜಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಖೀ ಮತಗಟ್ಟೆಗಳು ಆಕರ್ಷಣೀಯವಾಗಿ ಇರುವಂತೆ ಮಾಡಬೇಕು. ಶ್ರವಣದೋಷವುಳ್ಳ ಮತದಾರರಿಗೆ ವಿಶೇಷ ಸಂಜ್ಞೆ ತಜ್ಞರ ಮೂಲಕ ಅರಿವು ಮೂಡಿಸುವ ಕೆಲಸವಾಗಬೇಕು ಎಂದರು.

ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್ ಅವರು, ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ಚುನಾವಣಾ ಜಾಗೃತಿ ಸ್ವೀಪ್ ಚಟುವಟಿಕೆಗಳು ಹಾಗೂ ಕಡಿಮೆ ಮತದಾನ ಕೇಂದ್ರಗಳಲ್ಲಿ ಶೇಕಡವಾರು ಮತದಾನ ಹೆಚ್ಚಿಸಲು ಕೈಗೊಂಡ ಕ್ರಮಗಳ ಕುರಿತು ಸಭೆಗೆ ವಿವರವಾದ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ರಾಧಾಕೃಷ್ಣ ಅಡಿಗ, ಡಯಟ್ ಪ್ರಾಂಶುಪಾಲ ಗೋವಿಂದ ಮಡಿವಾಳ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.