ಸಾರಾಂಶ
ಗದಗ: ಜಿಲ್ಲೆಯಲ್ಲಿ ಕುಡಿಯುವ ನೀರು ಸರಬರಾಜು ಸಮರ್ಪಕ ನಿರ್ವಹಣೆಗೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸ್ಥಿತಿಗತಿಯ ಸಮರ್ಪಕವಾಗಿ ಯಾವುದೇ ತೊಂದರೆಯಾಗದಂತೆ ನಿರ್ವಹಿಸಬೇಕು. ಕುಡಿಯುವ ನೀರು, ಮೇವಿನ ಸ್ಥಿತಿಗತಿ ಸಂಬಂಧಿಸಿದಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸಬೇಕು. ಒಂದು ವೇಳೆ ನೀರಿನ ಸಮಸ್ಯೆ ಉದ್ಭವಿಸಿದರೆ ಮುಂಜಾಗ್ರತವಾಗಿ ಖಾಸಗಿ ಬೋರ್‌ವೆಲ್‌ಗಳ ಮೂಲಕ ನೀರು ಸರಬರಾಜು ಮಾಡಲು ಅಂತಹ ಬೋರ್‌ವೆಲ್‌ಗಳ ಸುಸ್ಥಿತಿಯಲ್ಲಿವೆಯೋ ಹೇಗೆ ಎಂಬುದರ ಕುರಿತು ಪರಿಶೀಲಿಸಬೇಕು. ಪ್ರಸಕ್ತ ಪೂರ್ವ ಮುಂಗಾರು ಮಳೆ ಉತ್ತಮವಾಗಿ ಶುರುವಾಗಿದ್ದು, ಮುಂಗಾರು ಮಳೆಯೂ ಕೂಡ ಉತ್ತಮವಾಗುವ ನಿರೀಕ್ಷೆಯಿದೆ ಎಂದರು.
ರೋಣ ಮತ್ತು ನರಗುಂದ ತಾಲೂಕಿನ ಬಹುಗ್ರಾಮ ಕುಡಿಯುವ ನೀರಿನ ಕೆರೆಗಳಿಗೆ ನವಿಲು ತೀರ್ಥ ಜಲಾಶಯದಿಂದ ನೀರು ಬಿಡುಗಡೆ ಮಾಡುವ ಕುರಿತು ಚರ್ಚೆ ನಡೆಸಿದ ನಂತರ ಮಾತನಾಡಿದ ಅವರು, ಅನಗತ್ಯವಾಗಿ ನೀರು ಪೋಲಾಗದಂತೆ ಅದನ್ನು ಮರುಬಳಕೆ ಮಾಡುವ ಕುರಿತು ಯೋಚಿಸಿ ನೀರಿನ ಸಂಪನ್ಮೂಲಗಳ ಸಮರ್ಪಕ ಬಳಕೆಯಾಗುವಂತೆ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.ಜಿಪಂ ಸಿಇಒ ಭರತ್.ಎಸ್ ಮಾತನಾಡಿ, ಎಲ್ಲ ನೀರಿನ ಮೂಲಗಳಲ್ಲಿ ನೀರು ಕುಡಿಯಲು ಯೋಗ್ಯ ಎಂಬುದರ ಕುರಿತು ಪರೀಕ್ಷೆ ನಡೆಸಬೇಕು. ಬೋರ್‌ವೆಲ್‌ದ ಸುತ್ತಮುತ್ತ ಕಲುಷಿತ ಅಂಶ ಇವೆಯೋ ಇಲ್ಲವೋ ಎಂಬುದರ ಕುರಿತು ಪರಿಶೀಲನೆ ನಡೆಸಿ ಖಚಿತಪಡಿಸಿಕೊಳ್ಳಬೇಕು. ವಾಟರ್ ಹೆಡ್ ಟ್ಯಾಂಕ್ ಸ್ವಚ್ಛತೆಗೆ ನಿಗಾ ವಹಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಎಚ್.ನಾಗರಾಜ ಮಾತನಾಡಿ, ಜಿಲ್ಲೆಯಲ್ಲಿ ಜಾನುವಾರುಗಳಿಗೆ ಸಾಕಷ್ಟು ಮೇವಿನ ದಾಸ್ತಾನವಿದೆ. ಯಾವುದೇ ಕೊರತೆಯಿರುವುದಿಲ್ಲ ಎಂದು ತಿಳಿಸಿದರು.ಈ ವೇಳೆ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ.ಎಂ, ಉಪವಿಭಾಗಾಧಿಕಾರಿ ಗಂಗಪ್ಪ.ಎಂ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವರಾಜ ಕೊಟ್ಟೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.