ಸಾರಾಂಶ
ರಾಜ್ಯದಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಭೀಕರ ಬರಗಾಲವಿದ್ದು, ರಾಮದುರ್ಗ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಜನರಿಗೆ ಮತ್ತು ಜಾನುವಾರಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕೆಂದು ವಿಧಾನಸಭೆಯ ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.
ಕನ್ನಡಪ್ರಭ ವಾರ್ತೆ ರಾಮದುರ್ಗ
ರಾಜ್ಯದಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಭೀಕರ ಬರಗಾಲವಿದ್ದು, ರಾಮದುರ್ಗ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಜನರಿಗೆ ಮತ್ತು ಜಾನುವಾರಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕೆಂದು ವಿಧಾನಸಭೆಯ ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಹೇಳಿದರು.ಗುರುವಾರ ತಾಪಂ ಸಭಾಭವನದಲ್ಲಿ ನಡೆದ ಟಾಸ್ಕ್‌ಪೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರ ಪ್ರದೇಶದ ಕೆಲ ಪ್ರದೇಶಗಳಿಗೆ ಇನ್ನೂ 24/7 ಕುಡಿಯುವ ನೀರು ಪೂರೈಕೆಯಾಗದ ವಾರ್ಡ್‌ಗಳಿಗೆ ಮತ್ತು ಗ್ರಾಮೀಣ ಭಾಗದಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಾಸವಾಗಬಾರದು. ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದು ಕಂಡು ಬಂದರೆ ಸೂಕ್ತ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ತಾಲೂಕಿನ ಯಾವುದೇ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೆ ಅಧಿಕಾರಿಗಳು ತಾಲೂಕಾಡಳಿತ ಮತ್ತು ತಮ್ಮ ಗಮನಕ್ಕೆ ತಂದರೆ ಕೊಳವೆ ಬಾವಿ ಕೊರೆಸಲಾಗುವುದು ಮತ್ತು ನೋಡಲ್ ಅಧಿಕಾರಿಗಳು ಜವಾಬ್ದಾರಿ ನೀಡಿದ ಪಂಚಾಯ್ತಿಗಳ ಉಸ್ತುವಾರಿ ಸಮರ್ಪಕವಾಗಿ ನಿರ್ವಹಿಸಬೇಕೆಂದು ತಿಳಿಸಿದರು.ತಹಸೀಲ್ದಾರ್ ಸುರೇಶ ಚವಲಾರ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಯಾಗುತ್ತಿದ್ದು ಕೆಲವಡೆ ಟ್ಯಾಂಕರ ನೀರು ಅನವಶ್ಯಕವಾಗಿ ಪೋಲಾಗುತಿದ್ದು, ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಗಮನ ಹರಿಸಬೇಕೆಂದು ಹೇಳಿದರು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಬರ ನಿರ್ವಹಣೆಗೆ ತಾಲೂಕಿನಲ್ಲಿ 9 ನೊಡಲ್ ಅಧಿಕಾರಿಗಳನ್ನು ನೇಮಕ ಮಾಡಿದ್ದು ಸಮರ್ಪಕ ಉಸ್ತುವಾರಿ ಮಾಡುವ ಮೂಲಕ ಯಾವುದೇ ಸಮಸ್ಯೆ ಉಂಟಾಗದಂತೆ ಕೆಲಸ ಮಾಡಬೇಕೆಂದು ತಿಳಿಸಿದರು.ಸಭೆಯಲ್ಲಿ ನೋಡಲ್ ಅಧಿಕಾರಿಗಳು, ತಾಲೂಕಿನ 37 ಗ್ರಾಮ ಪಂಚಾಯ್ತ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.