ಸಾರಾಂಶ
ಬಳ್ಳಾರಿ: ಬೇಸಿಗೆ ಹಿನ್ನೆಲೆ ಪಟ್ಟಣ, ಗ್ರಾಮ ಹಾಗೂ ಹಳ್ಳಿಗಳಲ್ಲಿ ಕುಡಿಯುವ ನೀರಿನ ಪೂರೈಕೆ ಸಮಪರ್ಕವಾಗಿರಬೇಕು. ನಿರ್ವಹಣೆಯಲ್ಲಿ ಯಾವುದೇ ಲೋಪವಾಗುವಂತಿಲ್ಲ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯಮಂತ್ರಿಯವರ ವಿಡಿಯೋ ಸಂವಾದ ಸಭೆಯ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗಬಾರದು. ಅಗತ್ಯ ಮೇವಿನ ದಾಸ್ತಾನು ಇಟ್ಟುಕೊಳ್ಳಬೇಕು. ಮೇವು ಅಂತರ್ ಜಿಲ್ಲಾ ಸಾಗಾಣಿಕೆ ಕುರಿತು ನಿಗಾ ವಹಿಸಬೇಕು ಎಂದು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಈಗಾಗಲೇ ಜಿಲ್ಲೆಯ ರೈತರಿಗೆ ಮೊದಲ ಹಂತದ ಬರ ಪರಿಹಾರ ಹಣ ಜಮೆಯಾಗಿದ್ದು, ಬರ ಪರಿಹಾರ ಪಡೆಯದ ಅರ್ಹ ರೈತರನ್ನು ಗುರುತಿಸಿ ಫ್ರುಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳುವಂತೆ ಕ್ರಮ ವಹಿಸಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಬಳ್ಳಾರಿ ನಗರದಲ್ಲಿ ಕುಡಿಯುವ ನೀರಿಗೆ ಕೊರತೆಯಾಗಬಾರದು. ಅಗತ್ಯವಿದ್ದಲ್ಲಿ ಕೊಳವೆ ಬಾವಿ ಕೊರೆಸಲು ಕ್ರಮ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರಿಗೆ ತಿಳಿಸಿದರು.1077 ಸಹಾಯವಾಣಿ ಸಂಪರ್ಕಿಸಿ: ಜಿಲ್ಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಸಮಸ್ಯೆ ಕುರಿತಂತೆ ಇನ್ನಿತರ ಸಮಸ್ಯೆಗಳಿದ್ದಲ್ಲಿ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 1077 ಸಹಾಯವಾಣಿ ಆರಂಭಿಸಲಾಗಿದ್ದು, ಕರೆ ಮಾಡಬಹುದು. ಇಲ್ಲವೇ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಗೆ ಸಂಪರ್ಕಿಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಮಿಶ್ರಾ ಹೇಳಿದರು.
ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಜತೆ ಮುಖ್ಯಮಂತ್ರಿಗಳು ವೀಡಿಯೋ ಸಂವಾದ ನಡೆಸಿ, ಬೇಸಿಗೆಯಲ್ಲಿ ನೀರಿನ ಕೊರತೆಯಾಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ನೀರಿನ ಸಮಸ್ಯೆ ಉದ್ಭವಿಸಿದಲ್ಲಿ 24 ಗಂಟೆಗಳೊಳಗಾಗಿ ಟ್ಯಾಂಕರ್, ಖಾಸಗಿ ಕೊಳವೆಬಾವಿ ಸೇರಿದಂತೆ ಯಾವುದೇ ಜಲಮೂಲಗಳಿಂದ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಿಂದಾಗಿ ಭಾರಿ ಪ್ರಮಾಣದ ಬರಗಾಲ ಉಂಟಾಗಿದೆ. ಸುಮಾರು 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬರುವ ತೀವ್ರ ಬರಗಾಲವನ್ನು ಎದುರಿಸಲು ಸಜ್ಜಾಗಬೇಕಿದೆ.ಪ್ರಸ್ತುತ ಇರುವ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಮತ್ತು ಮುಂಬರುವ ಸಮಸ್ಯೆಗಳನ್ನು ಹೇಗೆ ಎದುರಿಸಬೇಕು ಎಂಬುದಕ್ಕೆ ಸೂಕ್ತ ಯೋಜನೆ ರೂಪಿಸಬೇಕು. ಮಾಧ್ಯಮಗಳಲ್ಲಿ ಪ್ರಕಟವಾಗುವ ಜನರ ಸಮಸ್ಯೆಗಳ ಕುರಿತ ವರದಿಗಳನ್ನು ಪರಿಶೀಲಿಸಿ, ಅವುಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಸೂಚಿಸಿದರು.