ಸಾರಾಂಶ
ಕಾರವಾರ: ಮಳೆಗಾಲದ ಸಂದರ್ಭದಲ್ಲಿ ತಾಲೂಕಿನ ಅರಗಾ ನೌಕಾನೆಲೆ ಪ್ರದೇಶದಿಂದ ಚಂಡಿಯಾ, ಅರಗಾ ಸೇರಿದಂತೆ ಹಲವು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನೌಕಾನೆಲೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿವರ್ಷ ಮಳೆಗಾಲದಲ್ಲಿ ನೌಕಾನೆಲೆ ಪ್ರದೇಶದಲ್ಲಿ ನೆರೆ ಪರಿಸ್ಥಿತಿ ಉಂಟಾಗುತ್ತಿದ್ದು, ಈ ಸಮಸ್ಯೆಗೆ ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹೂಳೆತ್ತುವುದು, ಪೈಪ್ ಅಳವಡಿಕೆ ಸೇರಿದಂತೆ ಅತ್ಯಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕು. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ, ಸಣ್ಣ ನೀರಾವರಿ ಇಲಾಖೆಯ, ತಾಪಂ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು.
ನೌಕಾನೆಲೆ ಅಧಿಕಾರಿಗಳು, ನೌಕಾನೆಲೆಯ ಒಳಗೆ ನಡೆಯುತ್ತಿದ್ದ ಸೇತುವೆ ನಿರ್ಮಾಣ ಕಾಮಗಾರಿ ಮುಕ್ತಾಯಗೊಂಡಿದ್ದು, ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಮೂಲಕ ನೌಕಾನೆಲೆ ಒಳಬರುವ ಮಳೆ ನೀರು ಯಾವುದೇ ಅಡೆತಡೆಗಳಿಲ್ಲದೇ ಸರಾಗವಾಗಿ ಹರಿದುಹೋಗುವಂತೆ ಮಾಡಲಾಗಿದೆ ಎಂದರು.ಮುಂದಿನ ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆ ಕಂಡುಬರದಂತೆ ನೋಡಿಕೊಳ್ಳಿ ಎಂದು ಡಿಸಿ ಸೂಚಿಸಿದರು.ಹಳೆಯ ಕಾಳಿ ಸೇತುವೆಯ ಅವಶೇಷಗಳ ತೆರವು ಕಾರ್ಯವನ್ನು ಮಾ. 15ರೊಳಗೆ ಸಂಪೂರ್ಣವಾಗಿ ಮುಕ್ತಾಯಗೊಳಿಸುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿ, ಹೆದ್ದಾರಿ ಬದಿ ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಅತಿಕ್ರಮಣ ಕಟ್ಟಡಗಳನ್ನು ಕಾಲಮಿತಿಯಲ್ಲಿ ತೆರವುಗೊಳಿಸುವಂತೆ ಕುಮಟಾ ಉಪವಿಭಾಗಾಧಿಕಾರಿ ಮತ್ತು ಅಂಕೋಲಾ ತಹಸೀಲ್ದಾರ್ ಸೂಚಿಸಿದರು.
ಹೆದ್ದಾರಿ ವ್ಯಾಪ್ತಿಯಲ್ಲಿ ಜಿಎಸ್ಐ ವತಿಯಿಂದ ಗುರುತಿಸಲಾಗಿರುವ ಗುಡ್ಡ ಕುಸಿತ ಪ್ರದೇಶಗಳಲ್ಲಿ ಮಳೆಗಾಲಕ್ಕೂ ಮುನ್ನ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಆ ಪ್ರದೇಶದಲ್ಲಿ ಗುಡ್ಡ ಕುಸಿತವಾಗುವುದನ್ನು ತಡೆಯುವಂತೆ ಪ್ರಾಧಿಕಾರದ ಆಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಕದ್ರಾ ಮತ್ತು ಗೇರಸೊಪ್ಪ ಜಲಾಶಯಗಳಲ್ಲಿ ಮಳೆಗಾಲದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಂತೆ ಎಸ್‌ಒಪಿ ರಚಿಸಿ ಅದರಂತೆ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬರಬಹುದಾದ ಸ್ಥಳಗಳ ಬಗ್ಗೆ ಸಾಕಷ್ಟು ಮುಂಚಿತವಾಗಿ ಗುರುತಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಕಾಡಿನಲ್ಲಿ ಕಾಡ್ಗಿಚ್ಚು ನಿಯಂತ್ರಿಸುವ ಕುರಿತಂತೆ ಎಸ್‌ಒಪಿ ರಚಿಸಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರಕುಮಾರ ಕಾಂದೂ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಉಪವಿಭಾಗಾಧಿಕಾರಿಗಳಾದ ಕನಿಷ್ಕ, ಕಲ್ಯಾಣಿ ಕಾಂಬ್ಳೆ, ನೌಕಾನೆಲೆ ಮತ್ತು ಕೈಗಾ ಅಧಿಕಾರಿಗಳು ಇದ್ದರು.