ಜಲಜೀವನ ಮಿಷನ್ ಯೋಜನೆಯಡಿ ನಲ್ಲಿಗಳನ್ನು ಸರಿಯಾದ ರೀತಿಯಲ್ಲಿ ಅಳವಡಿಸದೇ ಇರುವುದು ಗಮನಕ್ಕೆ ಬಂದಿದೆ. ಅಲ್ಲದೇ ನಳ ಸಂಪರ್ಕಕ್ಕಾಗಿ ರಸ್ತೆ ಅಗೆದು ಬಿಡಲಾಗಿದೆ. ಅವಶ್ಯಕತೆ ಇರುವ ಕಡೆಯಲ್ಲಿ ಬೋರ್‌ವೆಲ್ ಕೊರೆಯಿಸಿ ಸಾರ್ವಜನಿಕರಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಬೇಕು.
ಹುಬ್ಬಳ್ಳಿ:
ಮಾರ್ಚ್ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಳವಾಗುವ ಸಂಭವವಿದ್ದು ಕೆರೆಗಳನ್ನು ಈಗಲೇ ಭರ್ತಿ ಮಾಡಿಕೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉಲ್ಬಣವಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಹೇಳಿದರು.ಇಲ್ಲಿನ ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯಿತಿಯಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ತಾಪಂ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಲಜೀವನ ಮಿಷನ್ ಯೋಜನೆಯಡಿ ನಲ್ಲಿಗಳನ್ನು ಸರಿಯಾದ ರೀತಿಯಲ್ಲಿ ಅಳವಡಿಸದೇ ಇರುವುದು ಗಮನಕ್ಕೆ ಬಂದಿದೆ. ಅಲ್ಲದೇ ನಳ ಸಂಪರ್ಕಕ್ಕಾಗಿ ರಸ್ತೆ ಅಗೆದು ಬಿಡಲಾಗಿದೆ. ಅವಶ್ಯಕತೆ ಇರುವ ಕಡೆಯಲ್ಲಿ ಬೋರ್‌ವೆಲ್ ಕೊರೆಯಿಸಿ ಸಾರ್ವಜನಿಕರಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸಬೇಕು. ರಸ್ತೆಗಳನ್ನು ಮರು ನಿರ್ಮಿಸಬೇಕು. ಕೆರೆಗಳ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿಟ್ಟುಕೊಳ್ಳಬೇಕು. ಫೆಬ್ರವರಿ ಅಂತ್ಯದೊಳಗೆ ಪ್ರಗತಿಯಲ್ಲಿರುವ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಕಲಿಕೆ ಕಡೆಗೆ ಹೆಚ್ಚಿನ ಆಸಕ್ತಿ ವಹಿಸುವಂತೆ ನೋಡಿಕೊಳ್ಳಬೇಕು. ಅಂಗನವಾಡಿ ಕಟ್ಟಡ, ಶಾಲಾ ಕಟ್ಟಡ, ಶೌಚಾಲಯಗಳ ನಿರ್ಮಾಣಕ್ಕೆ ಗಮನಹರಿಸಬೇಕಿದೆ. ವಿವಿಧ ಗ್ರಾಪಂಗಳ ವ್ಯಾಪ್ತಿಯಲ್ಲಿ ಬೀದಿದೀಪ ಅಳವಡಿಸಲು ಕ್ರಮವಹಿಸಬೇಕಾಗಿದೆ. ಸ್ಮಶಾನಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲು ಅಧಿಕಾರಿಗಳು ಮುಂದಾಗುವಂತೆ ಸೂಚಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆ ಪ್ರಗತಿ ವರದಿಯನ್ನು ಸಭೆಗೆ ತಿಳಿಸಿದರು.ಸಭೆಯಲ್ಲಿ ತಾಪಂ ಸಹಾಯಕ ನಿರ್ದೇಶಕ ಚಂದ್ರಶೇಖರ ಕುರ್ತಕೋಟಿ, ತಾಪಂ ಯೋಜನಾಧಿಕಾರಿ ಸಿ.ಆರ್. ಕೌಜಗೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ನಾಗರತ್ನ ಕ್ಯಾಸನೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಗ್ರಾಪಂಗಳ ಅಭಿವೃದ್ಧಿ ಅಧಿಕಾರಿಗಳಿದ್ದರು.