ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

| Published : Nov 08 2024, 01:25 AM IST / Updated: Nov 08 2024, 10:50 AM IST

ಸಾರಾಂಶ

  ಮಹಿಳಾ ಸುರಕ್ಷತಾ ಕ್ರಮ ಕೈಗೊಂಡು ಸಹಾಯವಾಣಿ, ಬಾಲ್ಯ ವಿವಾಹ, ಮತ್ತು ಪೋಕ್ಸೋ ಕಾಯ್ದೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

 ಬೆಳಗಾವಿ : ಮಹಿಳೆಯರ ಸುರಕ್ಷತೆ ಹಾಗೂ ಸಬಲೀಕರಣಕ್ಕೆ ವಿಶೇಷ ಗಮನ ನೀಡಬೇಕು. ಮಹಿಳಾ ಸುರಕ್ಷತಾ ಕ್ರಮ ಕೈಗೊಂಡು ಸಹಾಯವಾಣಿ, ಬಾಲ್ಯ ವಿವಾಹ, ಮತ್ತು ಪೋಕ್ಸೋ ಕಾಯ್ದೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಇಲಾಖೆಯ ಜಿಲ್ಲಾಮಟ್ಟದ ಸಮನ್ವಯ/ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯನಿರ್ವಹಿಸಬೇಕು. ನ್ಯಾಯಾಲಯ ಹಂತದಲ್ಲಿರುವ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ವಹಿಸಬೇಕು ಎಂದು ಹೇಳಿದರು.

ನಿರಾಶ್ರಿತ ಕೇಂದ್ರಗಳಲ್ಲಿ ಮಹಿಳೆಯರಿಗೆ ವಸತಿ ಸೌಲಭ್ಯ ಕಲ್ಪಿಸಲು ಪೊಲೀಸ್ ಇಲಾಖೆಯಿಂದ ಉಲ್ಲೇಖ ಪತ್ರ ನೀಡಲಾಗುವುದು. ಅದರ ಅನ್ವಯ ವಸತಿ ಸೌಲಭ್ಯ ನೀಡಬೇಕು. ಒಂದು ವೇಳೆ ಆಶ್ರಯ ಕೇಂದ್ರಗಳಲ್ಲಿ ಯಾವುದೇ ರೀತಿಯ ತೊಂದರೆ ಎದುರಾದಲ್ಲಿ 112 ಸಹಾಯವಾಣಿಗೆ ಕರೆ ಮಾಡಬೇಕು.

ಗ್ರಾಪಂ ಮಟ್ಟದಲ್ಲಿ ಸಭೆ ಕಡ್ಡಾಯ:

ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ ತಾಲೂಕುಗಳಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಹಿಳಾ ದೌರ್ಜನ್ಯ ನಿಯಂತ್ರಣ ಸಮಿತಿಯ ಸಭೆಗಳಾಗುತ್ತಿವೆ. ಆದರೆ ಸವದತ್ತಿ, ಹುಕ್ಕೇರಿ, ಖಾನಾಪುರ ತಾಲೂಕಿನಲ್ಲಿ ನಿಯಮಾನುಸಾರ ಸಭೆಗಳು ಆಗಬೇಕಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಗ್ರಾಪಂ ಮಟ್ಟದಲ್ಲಿ ಸಭೆಗಳನ್ನು ಕಡ್ಡಾಯವಾಗಿ ಆಯೋಜನೆ ಮಾಡಬೇಕು ಎಂದು ತಿಳಿಸಿದರು.

ಅಗತ್ಯವಿರುವ ಪ್ರದೇಶಗಳ ಶಾಲಾ ಕಾಲೇಜುಗಳಲ್ಲಿ ಜಾಗೃತಿ, ಅರಿವು ಕಾರ್ಯಕ್ರಮ ಆಯೋಜಿಸಬೇಕು. ವಿದ್ಯಾರ್ಥಿನಿಯರ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಕಡ್ಡಾಯವಾಗಿದೆ. ಕುಡಿಯುವ ನೀರು, ಶೌಚಾಲಯ ಸ್ವಚ್ಛತೆ, ಕಿಟ್ ವಿತರಣೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಬೇಕು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಸಖಿ ಒನ್ ಸ್ಟಾಫ್ ಸೆಂಟರ್ ಮೂಲಕ ಕಾನೂನು ಸಲಹೆ, ಆಪ್ತ ಸಮಾಲೋಚಕರಿಂದ ಸಮಾಲೋಚನೆ, ಸಖಿ ಕೇಂದ್ರದ ಕುರಿತು ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳಾಗುತ್ತಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ ಬಸರಗಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ದಿನೇಶ್ ಕುಮಾರ ಮೀನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್. ನಾಗರಾಜ, ಜಿಪಂ ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ ದಿವಿಟರ, ಎಸಿಪಿ ಸದಾಶಿವ ಕಟ್ಟಿಮನಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಅಬ್ದುಲ್ ರಸೀದ್ ಮಿರಜನ್ನವರ್, ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಎನ್.ಜಿ.ಒ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಇದ್ದರು.

ಸಖಿ ಒನ್ ಸ್ಟಾಫ್ ಸಹಾಯವಾಣಿ ಸಂಖ್ಯೆ ನಿರಂತರ ಚಾಲ್ತಿಯಲ್ಲಿರಬೇಕು. ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ ತಡೆಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಬೆಂಬಲ ಪಡೆಯಬೇಕು. ಮಹಿಳೆಯರಿಗೆ ಭದ್ರತೆ, ಉದ್ಯೋಗ, ಶೈಕ್ಷಣಿಕ ಸೌಲಭ್ಯ, ಚಿಕಿತ್ಸೆ ಕಲ್ಪಿಸಲು ಅಧಿಕಾರಿಗಳು ಕ್ರಮ ವಹಿಸಬೇಕು.

- ಮೊಹಮ್ಮದ್ ರೋಷನ್ ಜಿಲ್ಲಾಧಿಕಾರಿ