ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮವಹಿಸಿ

| Published : Mar 20 2024, 01:21 AM IST

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮವಹಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮವಹಿಸಿ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮವಹಿಸಿ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರು ಸಂಬಂಧ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೇಸಿಗೆ ಸಮಯವಾದ್ದರಿಂದ ಕುಡಿಯುವ ನೀರಿನ ಪೂರೈಕೆಗೆ ಮುತುವರ್ಜಿ ವಹಿಸಬೇಕಿದೆ. ಕುಡಿಯುವ ನೀರಿನ ಕಾಮಗಾರಿಗಳು ನಿಗದಿತ ವೇಳೆಗೆ ಪೂರ್ಣವಾಗಬೇಕು. ಜನರಿಗೆ ತುರ್ತಾಗಿ ನೀರು ಒದಗಿಸಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿದರು. ಕುಡಿಯುವ ನೀರಿನ ತೊಂದರೆಗಳು ಕಾಣಿಸಿಕೊಳ್ಳುವ ಮೊದಲೇ ಸೂಕ್ತ ವ್ಯವಸ್ಥೆ ಮಾಡಬೇಕು. ತಹಸೀಲ್ದಾರರು, ತಾಪಂ ಇಒಗಳು ಗ್ರಾಮಗಳಿಗೆ ಖುದ್ದು ಭೇಟಿ ನೀಡಿ ಪರಿಹಾರ ಕ್ರಮಗಳಿಗೆ ಮುಂದಾಗಬೇಕು. ನಗರ, ಪಟ್ಟಣ ಪ್ರದೇಶಗಳಲ್ಲಿ ಮುಖ್ಯಾಧಿಕಾರಿಗಳು ಭೇಟಿ ಕೊಟ್ಟು ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಕುಡಿಯುವ ನೀರಿನ ಸಮಸ್ಯೆಯನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ಸಹಾಯವಾಣಿ ಆರಂಭಿಸಲಾಗಿದೆ. ಸಾರ್ವಜನಿಕರೊಂದಿಗೆ ಮಾತನಾಡಿ ಎಲ್ಲಿ ಸಮಸ್ಯೆ ಕಂಡು ಬಂದಿದೆಯೋ ಅಲ್ಲಿ ಶೀಘ್ರ ತೆರಳಿ ಸಮಸ್ಯೆ ಬಗೆಹರಿಸಬೇಕು. ಎಲ್ಲಿಯೂ ದೂರು ಬಾರದಂತೆ ಅಧಿಕಾರಿಗಳು ಕೂಡಲೇ ಪರಿಹರಿಸಬೇಕು. ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಎಡಿಸಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಎಂ. ಶಿವಮೂರ್ತಿ, ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮಧುಸೂಧನ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಎಂ.ವಿ. ಸುಧಾ, ನಗರಸಭೆ ಪೌರಾಯುಕ್ತ ಎಸ್.ವಿ. ರಾಮದಾಸ್, ಎಲ್ಲಾ ತಾಲೂಕುಗಳ ತಹಸೀಲ್ದಾರರು, ತಾಪಂ ಇಒಗಳು ಸಭೆಯಲ್ಲಿ ಉಪಸ್ಥಿತರಿದ್ದರು.