ಸುಮಾರು 50 ಸಾವಿರ ಜನಸಂಖ್ಯೆ ಹೊಂದಿರುವ ಇಂಡಿ ನಗರಕ್ಕೆ ಕಳೆದ 25 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗದಿರುವುದಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ನಗರಸಭೆ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಕನ್ನಡಪ್ರಭ ವಾರ್ತೆ ಇಂಡಿ
ಸುಮಾರು 50 ಸಾವಿರ ಜನಸಂಖ್ಯೆ ಹೊಂದಿರುವ ಇಂಡಿ ನಗರಕ್ಕೆ ಕಳೆದ 25 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗದಿರುವುದಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ನಗರಸಭೆ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ನಗರದ ಪ್ರವಾಸಿ ಮಂದಿರದಲ್ಲಿ ನಗರ ಪ್ರದೇಶದ ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಜನತೆಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವುದು ನಗರಸಭೆಯ ಪ್ರಮುಖ ಜವಾಬ್ದಾರಿಯಾಗಿದೆ. ಆದರೆ, 25 ದಿನಗಳಿಂದ ನೀರು ಪೂರೈಕೆಯಾಗದಿದ್ದರೇ ಜನರು ಜೀವನ ನಡೆಸುವುದಾದರೂ ಹೇಗೆ? ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯವಾದ ಕುಡಿಯುವ ನೀರನ್ನು ಒದಗಿಸಲು ಸಾಧ್ಯವಾಗದಿದ್ದರೇ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಹೇಗೆ ನಿರ್ವಹಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.ಕುಡಿಯುವ ನೀರಿನ ಕುರಿತು ಸಾಮಾನ್ಯ ಸಭೆಗಳಲ್ಲಿ ಹಲವು ಬಾರಿ ಕುಡಿಯುವ ನೀರಿನ ಸಮಸ್ಯೆ ಕುರಿತು ಚರ್ಚಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ನಿರೀಕ್ಷಿತ ಕ್ರಮ ಕೈಗೊಂಡಿಲ್ಲ. ಜವಾಬ್ದಾರಿಯುತ ಹುದ್ದೆಯಲ್ಲಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಕೇವಲ ಸಭೆಗಳಲ್ಲಿ ಭರವಸೆ ನೀಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಜನರಿಗೆ ಕುಡಿಯುವ ನೀರು ತಲುಪುವಂತೆ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.ಪ್ರಸಕ್ತ ವರ್ಷ ಸಮರ್ಪಕ ಮಳೆಯಾಗದೇ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕುಡಿಯುವ ನೀರಿನ ಅಭಾವ ಎದುರಾಗದಂತೆ ಮುಂಚಿತವಾಗಿಯೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿತ್ತು. ಲೋಣಿ ಕೆ.ಡಿ ಗ್ರಾಮದ ಕೆರೆಗೆ ಕಾಲುವೆ ಮೂಲಕ ನೀರು ಹರಿಸಿ ಕೆರೆ ತುಂಬಿಸುವ ಕಾರ್ಯವನ್ನು ಕೆಬಿಜೆಎನ್ಎಲ್ ಹಾಗೂ ನಗರಸಭೆ ಅಧಿಕಾರಿಗಳು ಸಮನ್ವಯದಿಂದ ಕೈಗೊಳ್ಳಬೇಕು. ಈ ಕಾರ್ಯವನ್ನು ಇಂದಿನಿಂದಲೇ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.ನಗರದ ವಿವಿಧ ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳನ್ನು ಗುರುತಿಸಿ, ಅಗತ್ಯವಿರುವ ಕಡೆಗಳಲ್ಲಿ ಹೊಸ ಕೊಳವೆಬಾವಿಗಳನ್ನು ಕೊರೆಸಬೇಕು. ಈಗಾಗಲೇ ಇರುವ ಕೊಳವೆಬಾವಿಗಳ ನೀರಿನ ಲಭ್ಯತೆ ಪರಿಶೀಲಿಸಿ, ದುರಸ್ತಿಗೆ ಬಂದಿರುವ ಪಂಪ್ಸೆಟ್ಗಳನ್ನು ತಕ್ಷಣ ಸರಿಪಡಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಇದೇ ವೇಳೆ ನಗರದ ಬಹುನಿರೀಕ್ಷಿತ ಜಲಧಾರೆ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದ ಶಾಸಕರು, ಜನವರಿ ತಿಂಗಳೊಳಗೆ ಯೋಜನೆಯನ್ನು ಪೂರ್ಣಗೊಳಿಸಿ ನಗರಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಕಲ್ಪಿಸಬೇಕು. ಕಾಮಗಾರಿಯಲ್ಲಿ ವಿಳಂಬವಾಗದಂತೆ ಅಧಿಕಾರಿಗಳು ನಿರಂತರ ಮೇಲ್ವಿಚಾರಣೆ ನಡೆಸಬೇಕು ಎಂದರು.ನಗರದ ಜನತೆಗೆ ಕುಡಿಯುವ ನೀರು ಪೂರೈಸುವ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ಸಹಿಸುವುದಿಲ್ಲ. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ತಕ್ಷಣದ ಹಾಗೂ ದೀರ್ಘಕಾಲೀನ ಪರಿಹಾರಕ್ಕೆ ಆದ್ಯತೆ ನೀಡಬೇಕು. ಸಾರ್ವಜನಿಕರಿಗೆ ಪ್ರತಿದಿನ ಎದುರಾಗುತ್ತಿರುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಎಸಿ ಚಿದಾನಂದ ಗುರುಸ್ವಾಮಿ,ತಹಸೀಲ್ದಾರ್ ನಾಗೇಂದ್ರ ಕೊಳಶೆಟ್ಟಿ, ಡಿವೈಎಸ್ಪಿ ಸದಾಶಿವ ಕಟ್ಟಿಮನಿ, ಕೆಬಿಜೆಎನ್ಎಲ್ ಇಇ ಸಂತೋಷ, ಅಶೋಕ, ಪೌರಾಯುಕ್ತ ಶಿವಾನಂದ ಪೂಜಾರಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.