ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಪಡೆದು ಪ್ರಗತಿ ಸಾಧಿಸಿ

| Published : Dec 18 2023, 02:00 AM IST

ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಪಡೆದು ಪ್ರಗತಿ ಸಾಧಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಎಲ್‍ಇಡಿ ಪರದೆಯ ವಾಹನಗಳ ಮೂಲಕ ಗ್ರಾಪಂ ಹಾಗೂ ನಗರ ಪ್ರದೇಶದಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಬಳ್ಳಾರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ಆಯೋಜಿಸಿದ್ದು, ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದು ಶಾಸಕ ವೈ.ಎಂ. ಸತೀಶ್ ತಿಳಿಸಿದರು.

ಕೆನರಾ ಬ್ಯಾಂಕ್ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್‌ನ ಆಶ್ರಯದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಂಗವಾಗಿ ನಗರದ ಕೆಇಬಿ ವೃತ್ತದ ಕೆಇಬಿ ಅತಿಥಿಗೃಹ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

2047ರ ವೇಳೆಗೆ ನಮ್ಮ ದೇಶವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂಕಲ್ಪ ಹೊಂದಿದ್ದಾರೆ. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಎಲ್‍ಇಡಿ ಪರದೆಯ ವಾಹನಗಳ ಮೂಲಕ ಗ್ರಾಪಂ ಹಾಗೂ ನಗರ ಪ್ರದೇಶದಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಪಾಲಿಕೆ ಸದಸ್ಯೆ ಸುರೇಖಾ ಮಲ್ಲನಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇಂದ್ರ ಸರ್ಕಾರ ನಾಗರಿಕರ ಅಭಿವೃದ್ಧಿಗೆ ನೂರಾರು ಯೋಜನೆಗಳನ್ನು ರೂಪಿಸಿದೆ. ಕೇಂದ್ರ ಸರ್ಕಾದ ಯೋಜನೆಗಳು ಸಮಾಜದ ಕಟ್ಟ ಕಡೆಯ ನಾಗರಿಕರಿಗೂ ತಲುಪಿಸುವುದೇ ಕೇಂದ್ರ ಸರ್ಕಾರದ ಗುರಿಯಾಗಿದೆ. ಅರ್ಹರು ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಂಡು ಪ್ರಗತಿ ಕಂಡುಕೊಳ್ಳಬೇಕು ಎಂದರು.

ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸೋಮನಗೌಡ ಐನಾಪುರ ಪ್ರಾಸ್ತಾವಿಕವಾಗಿ ಮಾತನಾಡಿ, ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಈಗಾಗಲೇ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಂಚರಿಸಿದ್ದು, ಬಳ್ಳಾರಿ ನಗರದಲ್ಲಿ ಡಿ. 16ರಿಂದ 26ರ ವರೆಗೆ ಸಂಚರಿಸಲಿದೆ ಎಂದರು.

ಕೇಂದ್ರ ಸರ್ಕಾರದ 2024ರ ಕ್ಯಾಲೆಂಡರ್ ಗಣ್ಯರಿಂದ ಬಿಡುಗಡೆಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ಕುರಿತ ಕಿರುಪುಸ್ತಕಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.

ಕೇಂದ್ರ ಸರ್ಕಾರದ ಪಿಎಂ ಸ್ವಾನಿಧಿ ಯೋಜನೆಯಡಿ ಸಾಲ ಸೌಲಭ್ಯ ಪಡೆದುಕೊಂಡ ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಕೇಂದ್ರ ಸಂವಹನ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತ ಮಾಹಿತಿ ಫಲಕಗಳನ್ನು ಪ್ರದರ್ಶಿಸಲಾಯಿತು ಮತ್ತು ಆರೋಗ್ಯ ಇಲಾಖೆಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು. ಪಾಲಿಕೆ ಆಯುಕ್ತ ಜಿ. ಖಲೀಲ್ ಸಾಬ್, ಎಸ್‍ಬಿಐನ ಮಹೇಶ್ವರ ರಾವ್, ರಾಜೇಶ್ ನೀಲಾ ಶಂಕರ್, ದಿನೇಶ್ ಕುಮಾರ್, ಕೇಂದ್ರ ಸಂವಹನ ಇಲಾಖೆಯ ರಾಮಕೃಷ್ಣ ಮತ್ತಿತರರಿದ್ದರು.