ಸಾರಾಂಶ
ರಾಯಚೂರು ಜಿಪಂ ಸಭಾಂಗಣದಲ್ಲಿ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ ಕುರಿತ ಪೂರ್ವಭಾವಿ ಸಭೆಯಲ್ಲಿ ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ್ ಅವರು ಅಧ್ಯಕ್ಷತೆವಹಿಸಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ರಾಯಚೂರು
ಇದೇ ಮಾ.25ರಿಂದ ಜಿಲ್ಲೆಯಲ್ಲಿ ಎಸ್ಎಸ್ಎಲ್‌ಸಿ ವಾಷಿಕ ಪರೀಕ್ಷೆಗಳು ನಡೆಯುತ್ತಿದ್ದು, ಈ ವೇಳೆ ಯಾವುದೇ ರೀತಿಯ ನಕಲು ಇತರೆ ಅಹಿತಕರ ಘಟನೆಗಳ ಆಸ್ಪದಕೊಡದೇ, ಅಚ್ಚುಕಟ್ಟಾಗಿ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯವಾದ ಎಲ್ಲ ರೀತಿಯ ಕ್ರಮ ಜರುಗಿಸುವಂತೆ ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ್ ಸೂಚಿಸಿದರು.ಸ್ಥಳೀಯ ಜಿಪಂ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ ಕುರಿತ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಂಗಳವಾರ ಮಾತನಾಡಿದ ಅವರು, ಪರಿಕ್ಷಾ ಕೇಂದ್ರದ ಒಳಗೆ ಯಾವುದೇ ಎಲೆಕ್ಟ್ರಾನಿಕ್ ವಸ್ತು ನಿಷೇಧಿಸಲಾಗಿದ್ದು, ಪರೀಕ್ಷೆಗಳನ್ನು ನಿಯಮಾನುಸಾರವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಎಸ್ಎಸ್ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿರುವ 93 ಪರೀಕ್ಷಾ ಕೇಂದ್ರಗಳು ಹಾಗೂ 5 ಸೂಕ್ಷ್ಮ ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಕುಡಿವ ನೀರಿನ ವ್ಯವಸ್ಥೆ, ಶೌಚಾಲಯ ಸೇರಿ ಇನ್ನಿತರ ಮೂಲಭೂತ ಸೌಲಭ್ಯ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.ಎಸ್ಎಸ್ಎಲ್‌ಸಿ ಪರೀಕ್ಷೆ ಪಾರದರ್ಶಕವಾಗಿ ನಡೆಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದ ಒಳಗೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತು ತರುವಂತಿಲ್ಲ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 32,996 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಪರಿಕ್ಷೆಗೆ ಜಿಲ್ಲೆಯಲ್ಲಿ 93 ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದ್ದು, 93 ಅಭೀಕ್ಷಕ ಅಧಿಕಾರಿಗಳು, 93 ಸ್ಥಾನಿಕ ಜಾಗೃತದಳದ ಅಧಿಕಾರಿಗಳು, 93 ಮೊಬೈಲ್ ಸ್ವಾಧೀನ ಅಧಿಕಾರಿಗಳು, 38 ಮಾರ್ಗಗಳಿಗೆ 38 ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯ ನಿಭಾಯಿಸುವಂತೆ ತಿಳಿಸಿದರು.ಇದೇ ವೇಳೆ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಡಾ.ಬಿ.ವೈ ವಾಲ್ಮೀಕಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಡಿ ಬಡಿಗೇರ, ಅಧಿಕಾರಿ, ಸಿಬ್ಬಂದಿ ವರ್ಗದವರಿದ್ದರು.