ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆಕನ್ನಡಪ್ರಭ ವಾರ್ತೆ ಗದಗ
ಜಿಲ್ಲೆಯಲ್ಲಿ ಮುಂಗಾರು ಮಳೆ ಬಹುತೇಕ ಕೈಕೊಟ್ಟಿರುವ ಹಿನ್ನೆಲೆ ಬರ ನಿರ್ವಹಣೆಗೆ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ರೈತರಿಗೆ ಬೆಳೆ ಪರಿಹಾರ ಹಾಗೂ ಉದ್ಯೋಗ ಸೃಷ್ಟಿ ಸೇರಿದಂತೆ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ವಿ. ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಬೆಳೆಯಬಹುದಾದ ಪರ್ಯಾಯ ಬೆಳೆಗಳ ಕುರಿತು ರೈತರಿಗೆ ಕೃಷಿ ಇಲಾಖೆಯ ಅಧಿಕಾರಿಗಳು ಸೂಕ್ತ ಮಾಹಿತಿ ನೀಡಬೇಕು. ಸ್ಥಳೀಯ ಹವಾಮಾನ ಹಾಗೂ ಮಣ್ಣಿನ ಗುಣಧರ್ಮಕ್ಕೆ ಅನುಗುಣವಾಗಿ ಬೆಳೆಗಳನ್ನು ಬೆಳೆಯಲು ರೈತರನ್ನು ಪ್ರೋತ್ಸಾಹಿಸಬೇಕು. ಬರ ಪರಿಹಾರಕ್ಕಾಗಿ ಜಿಲ್ಲಾಡಳಿತದಿಂದ ಈಗಾಗಲೇ 263 ಕೋಟಿ.ಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಪರಿಹಾರ ವಿತರಣೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಬೆಳೆ ವಿಮೆ ಪರಿಹಾರವೂ ಅರ್ಹ ರೈತರಿಗೆ ಯಾವುದೇ ವಿಳಂಬವಿಲ್ಲದೆ ಸಮರ್ಪಕವಾಗಿ ತಲುಪುವಂತೆ ಕ್ರಮ ವಹಿಸಬೇಕು.ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಮುಂಚಿತವಾಗಿಯೇ ಖಾಸಗಿ ಕೊಳವೆಬಾವಿಗಳನ್ನು ಗುರುತಿಸಿ, ಅಗತ್ಯವಿದ್ದಲ್ಲಿ ಅವುಗಳ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು. ನಗರ ಪ್ರದೇಶಗಳಲ್ಲಿಯೂ ಕುಡಿಯುವ ನೀರಿನ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಎದುರಾದ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತ್ವರಿತವಾಗಿ ಪರಿಹರಿಸಬೇಕು.
ಜಾನುವಾರುಗಳಿಗೆ ಅಗತ್ಯವಿರುವ ಮೇವಿನ ಲಭ್ಯತೆ ಹಾಗೂ ಮುಂದಿನ ದಿನಗಳ ಬೇಡಿಕೆಯನ್ನು ಈಗಿನಿಂದಲೇ ಅಂದಾಜಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.
ಆಹಾರ ಇಲಾಖೆ ಅಧಿಕಾರಿಗಳು ವಿವಿಧೆಡೆ ಪರಿಶೀಲನೆ ಹಾಗೂ ದಾಳಿ ನಡೆಸುವ ಸಂದರ್ಭದಲ್ಲಿ ಡೈರಿ ಉತ್ಪನ್ನಗಳ ಗುಣಮಟ್ಟ ಮತ್ತು ಸಂಬಂಧಿತ ಅಂಶಗಳ ಬಗ್ಗೆಯೂ ಪರಿಶೀಲನೆ ನಡೆಸಬೇಕು.
ಬರ ಪರಿಸ್ಥಿತಿಯ ಹಿನ್ನೆಲೆ ವಿಬಿಜಿ-ರಾಮ್ಜಿ ಯೋಜನೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಉದ್ಯೋಗ ಅರಸಿ ಗುಳೆ ಹೋಗುವುದನ್ನು ತಡೆಯಬೇಕು.ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಕನಿಷ್ಠ ಒಂದಾದರೂ ಕೆರೆ ನಿರ್ಮಾಣವಾಗಬೇಕು. ಮಳೆನೀರನ್ನು ಸಂಗ್ರಹಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಲು ಹಾಗೂ ಜಲಸಂರಕ್ಷಣೆಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.
ಜಿಪಂ ಸಿಇಓ ಮುಕುಲ್ ಜೈನ್, ಎಸ್ಪಿ ಮಿಥುನ್ ಎಚ್.ಎನ್. ಮಾತನಾಡಿ, ತಮ್ಮ ಇಲಾಖೆಗಳ ವ್ಯಾಪ್ತಿಯ ಪ್ರಗತಿ ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.ಎಡಿಸಿ ಡಾ. ದುರಗೇಶ ಕೆ.ಆರ್. ಮಾತನಾಡಿ ಜಿಲ್ಲೆಯ ಸಮಗ್ರ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಎ.ಎ. ಕಂಬಾಳಿಮಠ, ಎಂ.ವಿ. ಚಳಗೇರಿ, ಡಾ. ನಂದಾ ಹಣಬರಟ್ಟಿ, ಜಿ.ಜೆ. ರುದ್ರಣ್ಣಗೌಡ, ಆರ್.ಎಸ್. ಬುರಡಿ, ಎಸ್.ಡಿ. ಪಾಟೀಲ, ಡಾ. ಎಸ್.ಎಸ್. ನೀಲಗುಂದ, ಡಾ. ಬಸವರಾಜ ಬಳ್ಳಾರಿ, ಅಮೀತ್ ಬಿದರಿ, ರಾಧಾ ಮಣ್ಣೂರ, ಡಾ. ಎಚ್.ಬಿ. ಹುಲಗಣ್ಣನವರ, ರಾಜಾರಾಮ ಪವಾರ, ಶರಣು ಗೋಗೇರಿ, ವಸಂತ ಮಡ್ಲೂರ, ಜಯಲಕ್ಷ್ಮಿ ವಸ್ತ್ರದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.