ಸಾರಾಂಶ
ಗದಗ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ತಡೆಗಟ್ಟುವುದರ ಮೂಲಕ ರೇಬಿಸ್ ರೋಗ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಯವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ನಾಯಿ ಕಡಿತದ ಪ್ರಕರಣಗಳಿಗೆ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕಾಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆಯಲ್ಲಿ ಪೂರ್ಣ ಪ್ರಮಾಣದ ಲಸಿಕೆ ಲಭ್ಯವಿದ್ದು, ಲಸಿಕೆ ಹಾಕಿಸಿಕೊಳ್ಳಲು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ನಿರ್ದೇಶನ ನೀಡಿದರು.ಜಿಲ್ಲೆಯಲ್ಲಿ ಡೆಂಘೀ ಜ್ವರ ಬಾರದಂತೆ ಮುನ್ನೆಚ್ಚರಿಕೆ ವಹಿಸಿ ಅದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ನೀರು ಸಂಗ್ರಹಣಾ ಪರಿಕರ ಮೇಲಿಂದ ಮೇಲೆ ಸ್ವಚ್ಛಗೊಳಿಸಬೇಕು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಚರಂಡಿ ನಾಲೆಗಳಲ್ಲಿ ಕಸ ಕಡ್ಡಿ ಎಸೆಯದೇ ನೀರು ಸರಾಗವಾಗಿ ಹರಿಯುವಿಕೆಗೆ ತಡೆಯಾಗದಂತೆ ನೋಡಿಕೊಳ್ಳಬೇಕು. ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆಯು ಅ. 14 ರಂದು ಮಂಕಿಪಾಕ್ಸ್‌ನ್ನು ಅಂತಾರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಸ್ಥಿತಿ ಎಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ವೈದ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ. ಜಿಲ್ಲೆಯಲ್ಲಿ ಜನೆವರಿ 2024 ರಿಂದ ಅಗಸ್ಟ್ 2024ರ ವರೆಗೆ 3007 ಕರುಳು ಬೇನೆ ಪ್ರಕರಣಗಳು ಹಾಗೂ 245 ಡೆಂಘೀ ಹಾಗೂ 10 ಚಿಕುನ್ ಗುನ್ಯಾ ಪ್ರಕರಣಗಳು ವರದಿಯಾಗಿವೆ ಎಂದು ಮಾಹಿತಿ ನೀಡಿದರು.ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಲ್ಲಿ ರೇಬಿಸ್ ನಿಯಂತ್ರಣ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಅನುಷ್ಟಾನಗೊಂಡಿದೆ. ಜನೆವರಿ 2024 ರಿಂದ ಅಗಸ್ಟ 2024ರ ವರೆಗೆ ಒಟ್ಟು 8144 ನಾಯಿ ಕಡಿತದ ಪ್ರಕರಣಗಳು ವರದಿಯಾಗಿರುತ್ತವೆ. ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕಾಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆಯಲ್ಲಿ ಲಸಿಕೆಗಳು ಲಭ್ಯವಿದ್ದು, ಎಲ್ಲ ಪ್ರಕರಣಗಳಿಗೂ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಜನೆವರಿ 2024 ರಿಂದ ಅಗಸ್ಟ 2024ರ ವರೆಗೆ 124 ಹಾವು ಕಡಿತ ಪ್ರಕರಣಗಳು ವರದಿಯಾಗಿದ್ದು ಯಾವುದೇ ಮರಣ ಸಂಭವಿಸಿರುವುದಿಲ್ಲ. ಜಿಲ್ಲೆಯಲ್ಲಿರುವ ಎಲ್ಲ ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳಿಗೆ ಈ ಕುರಿತು ತರಬೇತಿ ನೀಡಲಾಗಿದೆ ಎಂದು ವಿವರಿಸಿದರು.
ಈ ವೇಳೆ ಜಿಪಂ ಸಿಇಒ ಭರತ್.ಎಸ್., ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ಬಿ. ಸಂಕದ, ಡಿಎಚ್‌ಒ ಡಾ.ಎಸ್.ಎಸ್. ನೀಲಗುಂದ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಮೀನಾಕ್ಷಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಬಿ.ಸಿ. ಕರಿಗೌಡ್ರ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ಕೆ. ಭಜಂತ್ರಿ ಸೇರಿದಂತೆ ಇತರರು ಇದ್ದರು.