ಸಾರಾಂಶ
ಚಿತ್ರದುರ್ಗ: ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಶೀಘ್ರದಲ್ಲೇ ವೇಳಾಪಟ್ಟಿ ಪ್ರಕಟಗೊಳ್ಳಲಿದ್ದು, ಘೋಷಣೆಯಾದ ತಕ್ಷಣದಿಂದಲೇ ನೀತಿಸಂಹಿತೆ ಜಾರಿಗೆ ಬರುತ್ತದೆ. ಹೀಗಾಗಿ ಚುನಾವಣೆಗಾಗಿ ಕೈಗೊಳ್ಳಲಾಗುವ ಎಲ್ಲ ಕಾರ್ಯಗಳ ಸಿದ್ಧತೆಗಳ ಬಗ್ಗೆ ಉದಾಸೀನ ಬೇಡ. ಎಲ್ಲರೂ ಖುದ್ದಾಗಿ ಪರಿಶೀಲಿಸಬೇಕು. ಟೆಲಿಕಾಂ ನೆಟ್ ವರ್ಕ್ ಸರಿಇದೆಯೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಹಸಿಲ್ದಾರರಿಗೆ ಸೂಚನೆ ನೀಡಿದರು.
ಲೋಕಸಭೆ ಚುನಾವಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಹಸೀಲ್ದಾರರೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ತಹಸೀಲ್ದಾರರ ಪಾತ್ರ ಅತಿ ಮುಖ್ಯವಾಗಿದೆ. ಕ್ಷೇತ್ರದಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ಕುರಿತಂತೆಯೂ ತಹಸೀಲ್ದಾರರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಚುನಾವಣೆಯಲ್ಲಿ ಎಲ್ಲಿಯೂ ಲೋಪಗಳಾಗದಂತೆ ಎಚ್ಚರವಹಿಸಬೇಕೆಂದರು.ಜಿಲ್ಲೆಯ ವಿವಿಧ ತಾಲೂಕುಗಳಲ್ಲಿನ ಮತಗಟ್ಟೆಗಳ ವ್ಯಾಪ್ತಿಯಲ್ಲಿ ನೆಟ್‍ವರ್ಕ್ ತೊಂದರೆ ಇರುವುದನ್ನು ಗಮನಿಸಲಾಗಿದೆ. ಈ ಕುರಿತು ಎಲ್ಲಾ ಟೆಲಿಕಾಂ ಕಂಪನಿಗಳ ಪ್ರತಿನಿಧಿಗಳೊಂದಿಗೆ ಇತ್ತೀಚೆಗೆ ಸಭೆ ನಡೆಸಿ, ನೆಟ್‍ವರ್ಕ್ ವ್ಯವಸ್ಥೆ ಸಮರ್ಪಕವಾಗಿ ಒದಗಿಸಲು ಸೂಚನೆ ನೀಡಲಾಗಿತ್ತು. ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರು ತಾಲೂಕುಗಳಲ್ಲಿನ ಕೆಲವು ಮತಗಟ್ಟೆಗಳ ವ್ಯಾಪ್ತಿಯಲ್ಲಿ ನೆಟ್‍ವರ್ಕ್ ತೊಂದರೆ ಇದೆ. ಇದರಿಂದಾಗಿ ಚುನಾವಣಾ ಕಾರ್ಯಕ್ಕೆ ತೊಂದರೆ ಉಂಟಾಗಲಿದ್ದು, ಕೂಡಲೆ ತಹಸೀಲ್ದಾರರು ಟೆಲಿಕಾಂ ಕಂಪನಿಗಳೊಂದಿಗೆ ಸಮನ್ವಯ ಮಾಡಿಕೊಂಡು ನೆಟ್‍ವರ್ಕ್ ಸಮರ್ಪಕಗೊಳಿಸಿದ್ದಾರೆಯೇ ಎಂಬುದನ್ನು ಪರಿಶೀಲಿಸಿ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಚುನಾವಣೆಗೆ ನೀತಿ ಸಂಹಿತೆ ಜಾರಿಯಾದ ಕೂಡಲೆ 24 ಗಂಟೆಗಳ ಒಳಗಾಗಿ ಎಲ್ಲ ಫ್ಲೆಕ್ಸ್‌ಗಳು, ಗೋಡೆ ಬರಹಗಳು, ಸರ್ಕಾರಿ ಜಾಹೀರಾತುಗಳನ್ನು ತೆರವುಗೊಳಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಪೌರಾಯುಕ್ತರೊಂದಿಗೆ ಸಮನ್ವಯ ಮಾಡಿಕೊಂಡು, ತೆರವುಗೊಳಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ವಿಚಾರದಲ್ಲಿ ಯಾವುದೇ ಬಗೆಯ ವಿನಾಯಿತಿ ತೋರುವಂತಿಲ್ಲವೆಂದರು.ಚುನಾವಣೆಗಾಗಿ ಈಗಾಗಲೇ ನಿಗದಿಪಡಿಸಲಾಗಿರುವ ಮತಗಟ್ಟೆಗಳಿಗೆ ಖುದ್ದು ತಹಸೀಲ್ದಾರರು ಭೇಟಿ ನೀಡಿ, ವಿಕಲಚೇತನರಿಗಾಗಿ ರ್‍ಯಾಂಪ್ ವ್ಯವಸ್ಥೆ ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ, ಸಿದ್ಧಪಡಿಸಬೇಕು. ಅದೇ ರೀತಿ ಮತಗಟ್ಟೆಗಳಿಗೆ ಶೌಚಾಲಯ, ವಿದ್ಯುತ್ ಸಂಪರ್ಕ ಸೇರಿದಂತೆ ಮೂಲಭೂತ ಸೌಕರ್ಯಗಳು ಇರುವಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಆಯಾ ಸಂದರ್ಭದ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ಚುನಾವಣೆಗಾಗಿ ಈಗಾಗಲೆ ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳ ನೇಮಕ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಅಧಿಕಾರಿ, ಸಿಬ್ಬಂದಿಗಳಿಗೆ ತರಬೇತಿ ನೀಡಬೇಕಿದೆ. ಹೀಗಾಗಿ ಚುನಾವಣೆ ಕಾರ್ಯಕ್ಕೆ ನಿಯುಕ್ತಿಗೊಳ್ಳುವ ಅಧಿಕಾರಿ, ಸಿಬ್ಬಂದಿಗಳಿಗೆ ಸೂಕ್ತ ತರಬೇತಿಗಾಗಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ವೆಂಕಟೇಶ್ ಸೂಚನೆ ನೀಡಿದರು.ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ ಮಾತನಾಡಿ, ಚುನಾವಣಾ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ಸಲುವಾಗಿ ಚೆಕ್‍ಪೋಸ್ಟ್‌ಗಳನ್ನು ಸ್ಥಾಪಿಸಲಾಗುವ ಸ್ಥಳಗಳನ್ನು ಈಗಾಗಲೆ ಗುರುತಿಸಲಾಗಿದೆ. ಅಲ್ಲದೆ ಚೆಕ್‍ಪೋಸ್ಟ್ ನಿರ್ಮಾಣ ಸಂಬಂಧ ಟೆಂಡರ್ ಪ್ರಕ್ರಿಯೆ ಕೂಡ ಕೈಗೊಳ್ಳಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಕೂಡಲೇ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಚೆಕ್‍ಪೋಸ್ಟ್ ಕಾರ್ಯಾರಂಭ ಮಾಡಬೇಕಾಗುತ್ತದೆ. ಹೀಗಾಗಿ ತಹಸಿಲ್ದಾರರು, ಚೆಕ್‍ಪೋಸ್ಟ್ ಸ್ಥಾಪಿಸಲಾಗುವ ಸ್ಥಳಗಳಿಗೆ ಭೇಟಿ ನೀಡಿ, ಒದಗಿಸಬಹುದಾದ ಸೌಲಭ್ಯಗಳ ಬಗ್ಗೆ ಹಾಗೂ ಚೆಕ್‍ಪೋಸ್ಟ್ ನಿರ್ಮಾಣಕ್ಕೆ ಸಂಬಂಧಿಸಿದ ಕೆಲಸಗಳನ್ನು ಪರಿಶೀಲಿಸಿ, ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು. ಉಪವಿಭಾಗಾದಿಕಾರಿ ಕಾರ್ತಿಕ್, ಜಿಲ್ಲಾ ಎನ್ಐಸಿ ಅಧಿಕಾರಿ ಕೆ.ಶಾಸ್ತ್ರಿ, ಸೇರಿದಂತೆ ಜಿಲ್ಲೆಯ ಎಲ್ಲ ತಹಸಿಲ್ದಾರರು, ಚುನಾವಣೆ ಶಾಖೆಯ ಎಲ್ಲ ಅಧಿಕಾರಿ, ಸಿಬ್ಬಂದಿ ಪಾಲ್ಗೊಂಡಿದ್ದರು.
-----------8 ಸಿಟಿಡಿ7
ಲೋಕಸಭೆ ಚುನಾವಣೆ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.