ಕನ್ನಡಪ್ರಭ ವಾರ್ತೆ ಮಂಡ್ಯ

ಬೇಸಿಗೆಯ ಅವಧಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಸಕಾಲ ಯೋಜನೆಯಡಿ ಸ್ವೀಕರಿಸಿದ ಎಲ್ಲಾ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ಕುಮಾರ್ ಮೀನಾ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಸಕಾಲ ಯೋಜನೆಯಡಿ ಸ್ವೀಕರಿಸಿದ ಎಲ್ಲಾ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಗೊಳಿಸಿ ಸಾರ್ವಜನಿಕರಿಗೆ ಸಮರ್ಪಕವಾಗಿ ಸಕಾಲ ಯೋಜನೆಯ ಸೇವೆಗಳು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದರು.

ಬೇಸಿಗೆಯ ಸಂದರ್ಭದಲ್ಲಿ ಕುಡಿಯುವ ನೀರಿನ ಪೂರೈಕೆ, ಜಲಜೀವನ್ ಮಿಷನ್ ಯೋಜನೆಗಳ ಪ್ರಗತಿ ಮತ್ತು ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನೆಡೆಸಿದರು. ಜನರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಬೇಕು. ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ಮುಂಜಾಗ್ರತೆಯಾಗಿ ಪರೀಕ್ಷೆಗೊಳಪಡಿಸಿಯೇ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಬೇಕು ಎಂದರು.

ತೀವ್ರ ಸಮಸ್ಯೆ ಇರುವ ಗ್ರಾಮಗಳಿಗೆ ಆದ್ಯತೆ ಮೇರೆಗೆ ಟ್ಯಾಂಕರ್ ಮೂಲಕ ನೀರು ಒದಗಿಸುವುದು. ಸಾಲಬಾಧೆ ಅಥವಾ ಕೃಷಿ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು. ಸಾಮಾಜಿಕ ಭದ್ರತಾ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ವಿವಿಧ ಮಾಸಾಶನವನ್ನು ನೀಡುವಂತೆ ಸಭೆಯಲ್ಲಿ ತಿಳಿಸಿದರು.


ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಒಟ್ಟು ೨೮೯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂದು ಅಂದಾಜಿಸಲಾಗಿದ್ದು, ಈಗಾಗಲೇ ೧೫ ಗ್ರಾಮಗಳಲ್ಲಿ ಖಾಸಗಿ ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಉಳಿದ ಗ್ರಾಮಗಳಲ್ಲಿಯೂ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಕೊಳವೆ ಬಾವಿಗಳಲ್ಲಿ ಇಳುವರಿ ಕಡಿಮೆಯಾದ ತಕ್ಷಣವೇ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಗೆ ವಿಶೇಷ ಸೂಚನೆ ನೀಡಲಾಗಿದೆ. ಅದರಂತೆ ಕೊಳವೆಬಾವಿಗಳನ್ನು ಮರು ಆಳಗೊಳಿಸುವುದು, ಹೆಚ್ಚುವರಿ ಪೈಪ್ ಅಳವಡಿಸುವುದು, ಅಗತ್ಯವಿರುವ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ಅಗತ್ಯ ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಉಪ ವಿಭಾಗಾಧಿಕಾರಿಗಳಾದ ಎಂ.ಶಿವಮೂರ್ತಿ, ಶ್ರೀನಿವಾಸ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.