ಕುಷ್ಟಗಿ: ಪಟ್ಟಣದ ತಹಸೀಲ್ದಾರ ಕಾರ್ಯಾಲಯದಲ್ಲಿ ತಹಸೀಲ್ದಾರ್ ಅಶೋಕ ಶಿಗ್ಗಾಂವಿ ಅಧ್ಯಕ್ಷತೆಯಲ್ಲಿ ಕುಡಿವ ನೀರಿನ ಸಮಸ್ಯೆ ಕುರಿತು ಟಾಸ್ಕ್‌ಫೋರ್ಸ್ ಸಭೆ ನಡೆಯಿತು.
ಸಭೆಯಲ್ಲಿ ಬೇಸಿಗೆ ಹಿನ್ನೆಲೆ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆ, ಗ್ರಾಪಂ ಮಟ್ಟದ ಸಿದ್ಧತೆ ಹಾಗೂ ನೀರಿನ ಕೊರತೆ ಉಂಟಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.ತಹಸೀಲ್ದಾರ ಅಶೋಕ ಶಿಗ್ಗಾಂವಿ ಮಾತನಾಡಿ, ಬೇಸಿಗೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆಯಾಗದಂತೆ ಅಧಿಕಾರಿಗಳು ಜಾಗೃತೆ ವಹಿಸಬೇಕು ಎಂದು ಸೂಚಿಸಿದ ಅವರು, ನೀರಿನ ಟ್ಯಾಂಕರ್ ವ್ಯವಸ್ಥೆ, ಬೋರ್‌ವೆಲ್ ದುರಸ್ತಿ ನೀರಿನ ಮೂಲಗಳ ಸಂರಕ್ಷಣೆ ಕುರಿತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ತಾಪಂ ಇಒ ಪಂಪಾಪತಿ ಹಿರೇಮಠ ಮಾತನಾಡಿ, ತಾಲೂಕಿನಾದ್ಯಂತ ಇರುವ ಗ್ರಾಪಂ ಪ್ರತಿಯೊಂದು ಗ್ರಾಮದ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಸಮರ್ಪಕವಾಗಿ ನಿರ್ವಹಿಸಬೇಕು. ಸಮಸ್ಯೆ ಉಂಟಾದ ತಕ್ಷಣವೇ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.ಆರ್‌ಡಬ್ಲೂಎಸ್ ಇಲಾಖೆಯ ಅಧಿಕಾರಿಗಳು ನೀರು ಸರಬರಾಜು ಕಾರ್ಯ ಸರಿಯಾಗಿ ನಿರ್ವಹಿಸಬೇಕು. ಸಮಸ್ಯೆ ಉಂಟಾದಲ್ಲಿ ತಕ್ಷಣ ಕ್ರಮ ವಹಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿ, ಎಂಜಿನೀಯರ್, ಗ್ರಾಪಂ ಅಭಿವೃದ್ಧಿ ಅಧಿಕಾರಿ ಸೇರಿದಂತೆ ಅನೇಕರು ಇದ್ದರು.