ಮಕ್ಕಳ ಮೇಲಿನ ದೌರ್ಜನ್ಯ ನಿಯಂತ್ರಣಕ್ಕೆ ಕಾಳಜಿ ವಹಿಸಿ

| Published : Feb 18 2024, 01:34 AM IST

ಸಾರಾಂಶ

ಸರ್ಕಾರದ ಅನೇಕ ಯೋಜನೆಗಳು, ನಾನಾ ಕಾನೂನುಗಳ ಜಾರಿ ನಡುವೆ ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚುತ್ತಲೇ ಇವೆ. ಇದನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ

ಬಳ್ಳಾರಿ: ಪಂಚಾಯಿತಿ ವ್ಯಾಪ್ತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾಳಜಿ ವಹಿಸಿ ಕಾರ್ಯ ನಿರ್ವಹಿಸಿದಲ್ಲಿ ಮಾತ್ರ ಮಕ್ಕಳ ಮೇಲಿನ ದೌರ್ಜನ್ಯ, ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದಲ್ಲಿ ಮಕ್ಕಳ ಹಕ್ಕುಗಳು ಮತ್ತು ವಿವಿಧ ಕಾಯ್ದೆಗಳ ಕುರಿತು ಭಾಗೀದಾರ ಇಲಾಖೆಗಳ ಜಿಲ್ಲಾ, ತಾಲೂಕು, ಗ್ರಾಮಮಟ್ಟದ ಅಧಿಕಾರಿಗಳಿಗೆ ನಗರದ ಜಿಪಂ ಸಭಾಂಗಣದಲ್ಲಿ ಏರ್ಪಡಿಸಿರುವ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸರ್ಕಾರದ ಅನೇಕ ಯೋಜನೆಗಳು, ನಾನಾ ಕಾನೂನುಗಳ ಜಾರಿ ನಡುವೆ ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚುತ್ತಲೇ ಇವೆ. ಇದನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ. ಸಂಬಂಧಿಸಿದ ಇಲಾಖೆ ಹಿರಿಯ ಅಧಿಕಾರಿಗಳು, ಕೆಳ ಹಂತದ ಅಧಿಕಾರಿ, ಸಿಬ್ಬಂದಿ ತಮ್ಮ ಕಾರ್ಯ ವ್ಯಾಪ್ತಿ ಅರಿತುಕೊಂಡು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಕಾಯ್ದೆಗಳ ಸಮರ್ಪಕ ಅನುಷ್ಠಾನಗೊಳ್ಳಲು ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಬಾಲ ನ್ಯಾಯ ಕಾಯ್ದೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಬಗ್ಗೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳು ಹಾಗೂ ಕಾರ್ಯಾಗಾರದ ಶಿಬಿರಾರ್ಥಿಗಳಿಗೆ ಸೂಚಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ, ಸದೃಢ ಆರೋಗ್ಯ, ಸಮಾಜದಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವುದು ಆದ್ಯ ಕರ್ತವ್ಯವಾಗಿದೆ.

ಮಕ್ಕಳ ಹಕ್ಕುಗಳು ಮತ್ತು ಅವುಗಳಿಗೆ ಚ್ಯುತಿ ಉಂಟಾದಾಗ ಬರುವ ಕಾಯ್ದೆಗಳ ಬಗ್ಗೆ ತಿಳಿದುಕೊಂಡಾಗ ಮಾತ್ರ ಅಧಿಕಾರಿಗಳು ತಮ್ಮ ತಮ್ಮ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್.ಕೆ.ಎಚ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಂತರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕೊಪ್ಪಳ ಯೂನಿಸೇಫ್ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ಡಾ. ಕೆ.ರಾಘವೇಂದ್ರ ಭಟ್ , ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ ಕಾಯ್ದೆ-2015), ಪೋಕ್ಸೋ ಕಾಯ್ದೆ-2012, ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಆರ್.ಟಿ.ಐ ಕಾಯ್ದೆ-2009ರ ಕಾಯ್ದೆಗಳ ಕುರಿತು ಕಾರ್ಯಾಗಾರದಲ್ಲಿ ವಿಶ್ಲೇಷಿಸಿದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ವಿಜಯಲಕ್ಷ್ಮೀ ಮೈದೂರು, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಾಣಾಧಿಕಾರಿ ಹಾಗೂ ಪ್ರಭಾರಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ನಾಯಕ.ಎಂ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.