ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕು, ಭವ್ಯ ಭವಿಷ್ಯ ದೃಷ್ಟಿಯಿಂದ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಉಡುಗೊರೆಯಾಗಿ ನೀಡಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಸಲಹೆ ನೀಡಿದರು.
ಮಡಿಕೇರಿ: ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕು, ಭವ್ಯ ಭವಿಷ್ಯ ದೃಷ್ಟಿಯಿಂದ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಉಡುಗೊರೆಯಾಗಿ ನೀಡಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಸಲಹೆ ನೀಡಿದರು.
‘ಪ್ರಕೃತಿಯಿಂದ ಸ್ಪೂರ್ತಿ, ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ’ ಎಂಬ ಧ್ಯೇಯವಾಕ್ಯದೊಂದಿಗೆ ಶುಕ್ರವಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜಿಮ್ನಾಸ್ಟಿಕ್ ಸಭಾಂಗಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಕೊಡಗು, ವಕೀಲರ ಸಂಘ ಮಡಿಕೇರಿ, ಸರ್ಕಾರಿ ಪದವಿ ಪೂರ್ವ ಕಾಲೇಜು, ಉದ್ದಿಮೆದಾರರು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.ಕವಿ ಪಂಜೆ ಮಂಗೇಶರಾಯರು ರಚಿಸಿರುವ ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಬಿಮ್ಮನೆ ಬಂದಳೋ... ಎಂಬ ಹಾಡನ್ನು ಹಾಡಿದರು. ಕೊಡಗು ಪ್ರಾಕೃತಿಕವಾಗಿ ಸೌಂದರ್ಯವನ್ನು ಹೊಂದಿದ್ದು, ಅದನ್ನು ಉಳಿಸಿಕೊಳ್ಳುವಂತಾಗಬೇಕು. ಪರಿಸರ ದಿನಾಚರಣೆ ಒಂದು ದಿನಕ್ಕೆ ಸೀಮಿತಗೊಳಿಸದೆ ಪ್ರತಿ ದಿನ ಪರಿಸರ ಕಾಳಜಿ ತೋರಬೇಕು ಎಂದರು.ಅತಿಥಿ ಗಣ್ಯರು ಹಾಗೂ ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ಗಿಡನೆಟ್ಟರು. ಪ್ರತಿಜ್ಞಾ ವಿಧಿ ಬೋಧನೆ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಡಾ. ಮಹೇಶ್ವರಿ ಕುಮಾರಿ ಸಿಂಗ್ ಅವರು ವಿದ್ಯಾರ್ಥಿಗಳಿಗೆ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿ, ಪರಿಸರ ಸಂರಕ್ಷಣೆ ಮಹತ್ವದ ಕುರಿತು ವಿವರಿಸಿದರು.
ಜಾಥಾ: ನಗರದ ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ವೃತ್ತದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜುವರೆಗೆ ‘ಪ್ರಕೃತಿಯಿಂದ ಸ್ಪೂರ್ತಿ, ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ’ ಎಂಬ ಧ್ಯೇಯವಾಕ್ಯದೊಂದಿಗೆ ಪರಿಸರ ಜಾಗೃತಿ ಜಾಥಾ ನಡೆಯಿತು. ಈ ಸಂದರ್ಭ ಜಾಥಾಕ್ಕೆ ಜಾಲನೆ ನೀಡಿ ಮಾತನಾಡಿದ ಮಡಿಕೇರಿ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಧೀಶ ಸಿ.ಕೆ. ಬಸವರಾಜು ಅವರು, ನಮ್ಮ ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಮತ್ತು ಮಣ್ಣನ್ನು ಉಳಿಸಬೇಕಾದರೆ ಇಂದಿನಿಂದಲೇ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.ಸ್ಕೌಟ್ಸ್ ಆಯುಕ್ತ ಜಿಮ್ಮಿ ಸಿಕ್ವೇರಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಆರ್. ಮಂಜುನಾಥ್, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಸಿ.ಟಿ. ಜೋಸೆಫ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಸವರಾಜು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಿಜಯನ್, ಆರ್‌ಎಫ್‌ಒ ಶಿವಕುಮಾರ್, ಅರಣ್ಯ ಇಲಾಖೆ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ವಿದ್ಯಾರ್ಥಿಗಳು ಪ್ರಾರ್ಥಿಸಿ ನಾಡಗೀತೆ ಹಾಡಿದರು, ಸಾಹಿತಿ ಉ.ರಾ. ನಾಗೇಶ್ ನಿರೂಪಿಸಿದರು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಡಾ. ಮಹೇಶ್ವರಿ ಕುಮಾರಿ ಸಿಂಗ್ ಸ್ವಾಗತಿಸಿದರು, ಯೋಜನಾ ಸಹಾಯಕ ಕೆ.ಎ. ಅಸ್ಟಿನ್ ವಂದಿಸಿದರು. ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪರಿಸರ ಜಾಗೃತಿ ಮೂಡಿಸುವ ಸಲುವಾಗಿ ವಿದ್ಯಾರ್ಥಿಗಳಿಗೆ ಛತ್ರಿ ವಿತರಿಸಲಾಯಿತು.