ಸ್ಥಳೀಯ ಚುನಾವಣೆ ಗಂಭೀರವಾಗಿ ಪರಿಗಣಿಸಿ

| Published : Mar 01 2025, 01:01 AM IST

ಸಾರಾಂಶ

ಕೆಲವೇ ವಾರಗಳಲ್ಲಿ ಸ್ಥಳೀಯ ಸಂಸ್ಥೆಗಳಾದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಚುನಾವಣೆಗೆ ಸಿದ್ಧರಾಗುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಮಯೂರ ಜಯಕುಮಾರ್ ಕರೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರು

ಕೆಲವೇ ವಾರಗಳಲ್ಲಿ ಸ್ಥಳೀಯ ಸಂಸ್ಥೆಗಳಾದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಚುನಾವಣೆಗೆ ಸಿದ್ಧರಾಗುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಮಯೂರ ಜಯಕುಮಾರ್ ಕರೆ ನೀಡಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದರು. ಪಕ್ಷದ ಆಧಾರ ಸ್ತಂಭವಾಗಿರುವ, ಎಂಎಲ್ಎ ಎಂಪಿ ಚುನಾವಣೆಗೆ ದುಡಿದ ಮುಖಂಡರು ಮತ್ತು ಕಾರ್ಯಕರ್ತರನ್ನು ಜನಪ್ರತಿನಿಧಿಗಳನ್ನಾಗಿಸುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದ್ದು,ಎಲ್ಲಾ ಕಾರ್ಯಕರ್ತರು, ಮುಖಂಡರು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಟೊಂಕ ಕಟ್ಟಿ ದುಡಿಯುವಂತೆ ಮನವಿ ಮಾಡಿದರು.

ನಮ್ಮದೇ ಸರಕಾರ ಬಂದು ಎರಡು ವರ್ಷ ಕಳೆದರೂ ಪಕ್ಷಕ್ಕೆ ದುಡಿದ ಕಾರ್ಯಕರ್ತರು ಮತ್ತು ಮುಖಂಡರಿಗೆ ಅಧಿಕಾರ ಸಿಕ್ಕಿಲ್ಲ ಎಂಬ ಕೊರಗು ಪಕ್ಷದ ಮುಖಂಡರಲ್ಲಿ ಇರುವುದು ನಮ್ಮ ಗಮನದಲ್ಲಿದೆ. ಈಗಾಗಲೇ ಹಲವು ನಿಗಮ, ಮಂಡಳಿಗಳ ಪದಾಧಿಕಾರಿಗಳ ಪಟ್ಟಿ ರೆಡಿಯಾಗಿದ್ದು, ಶೀಘ್ರದಲ್ಲಿಯೇ ಅನುಮೋದನೆ ಸಹ ದೊರೆಯಲಿದೆ ಎಂದರು.

ಚುನಾವಣಾ ದಿನಾಂಕ ಯಾವಾಗ ಬೇಕಾದರೂ ಘೋಷಣೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೊದಲು ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರಕ್ಕೆ ಓರ್ವ ಸಂಚಾಲಕರನ್ನು ನೇಮಕ ಮಾಡಿ, ಅವರಿಗೆ ಬೂತ್ ಕಮಿಟಿಗಳ ಮೇಲುಸ್ತುವಾರಿ ವಹಿಸುವ ಮೂಲಕ ತಳಮಟ್ಟದಲ್ಲಿ ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸುವ ಕೆಲಸ ಆಗಬೇಕಿದೆ. ಮುಂದಿನ 15 ದಿನದಲ್ಲಿ ಜಿಲ್ಲೆಯಲ್ಲಿರುವ 57 ಜಿಪಂ ಕ್ಷೇತ್ರಗಳು ಹಾಗೂ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಸಂಚಾಲಕರನ್ನು ನೇಮಿಸಿ ಪಟ್ಟಿ ನೀಡಬೇಕು.ಮುಂದಿನ ಸಭೆಯನ್ನು ಅವರೊಂದಿಗೆ ಮಾಡಲಾಗುವುದು ಎಂದು ಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡಿದರು.

ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ಮಾಜಿ ಶಾಸಕ ಡಾ.ರಫೀಕ್ ಅಹಮದ್, ಮುಖಂಡರಾದ ಇಕ್ಬಾಲ್ ಅಹಮದ್ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ವಹಿಸಿದ್ದರು. ಮಾಜಿ ಶಾಸಕ ಎಸ್.ಷಪಿ ಅಹಮದ್, ಮುಖಂಡರಾದ ನಿಖೇತರಾಜ್ ಮೌರ್ಯ, ಆರ್.ರಾಮಕೃಷ್ಣ, ಮಹಿಳಾ ಕಾಂಗ್ರೆಸ ಅಧ್ಯಕ್ಷೆ ಗೀತಾ ರಾಜಣ್ಣ, ಯುವಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜ್, ನಯಾಜ್ ಅಹಮದ್, ಬ್ಲಾಕ್ ಕಾಂಗ್ರೆಸ್ ಮುಖಂಡರಾದ ಫಯಾಜ್, ಮಹೇಶ್, ಮುಖಂಡರಾದ ಸುಜಾತ ಸೇರಿದಂತೆ ಹಲವರು ಉಪಸ್ಥಿತರಿದ್ದರು.