ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಟಕಾ ಚಟುವಟಿಕೆಗಳು ನಡೆಯುವ ಸ್ಥಳಗಳನ್ನು ಗುರುತಿಸಿ, ನಿಯಮಿತವಾಗಿ ತಪಾಸಣೆ ಹಾಗೂ ದಾಳಿ ಕೈಗೊಳ್ಳಬೇಕು.
ಗದಗ: ಜಿಲ್ಲೆಯಲ್ಲಿ ಅನಧಿಕೃತ ಲಾಟರಿ ಹಾಗೂ ಮಟಕಾ ಚಟುವಟಿಕೆಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅನಧಿಕೃತ ಲಾಟರಿ ಹಾಗೂ ಮಟಕಾ ಪ್ರಕರಣಗಳಿಗೆ ಸಂಬಂಧಿಸಿದಂತೆ 2026-27ನೇ ಸಾಲಿನ 2ನೇ ಫ್ಲೈಯಿಂಗ್ ಸ್ಕ್ವಾಡ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಟಕಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮಕೈಗೊಳ್ಳಬೇಕು ಎಂದರು.ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಟಕಾ ಚಟುವಟಿಕೆಗಳು ನಡೆಯುವ ಸ್ಥಳಗಳನ್ನು ಗುರುತಿಸಿ, ನಿಯಮಿತವಾಗಿ ತಪಾಸಣೆ ಹಾಗೂ ದಾಳಿ ಕೈಗೊಳ್ಳಬೇಕು. ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಅನ್ವಯಿಸುವ ಕಾನೂನುಗಳ ಪ್ರಕಾರ ಪ್ರಕರಣ ದಾಖಲಿಸಿ, ಸೂಕ್ತ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.
ಫ್ಲೈಯಿಂಗ್ ಸ್ಕ್ವಾಡ್ ತಂಡಗಳು ತಮ್ಮ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಕೈಗೊಂಡ ದಾಳಿ, ದಾಖಲಿಸಿದ ಪ್ರಕರಣಗಳು ಹಾಗೂ ಕೈಗೊಂಡ ಕಾನೂನು ಕ್ರಮಗಳ ಕುರಿತು ಸಮಗ್ರ ವರದಿ ಸಿದ್ಧಪಡಿಸಿ, ನಿಗದಿತ ಅವಧಿಯಲ್ಲಿ ಸಲ್ಲಿಸಬೇಕು. ಸಾರ್ವಜನಿಕರಿಂದ ಲಭ್ಯವಾಗುವ ಮಾಹಿತಿ ಪರಿಶೀಲಿಸಿ, ಅಕ್ರಮ ಚಟುವಟಿಕೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.ಅನಧಿಕೃತ ಲಾಟರಿ ಹಾಗೂ ಮಟಕಾ ಚಟುವಟಿಕೆಗಳಿಂದ ಸಾರ್ವಜನಿಕರು, ವಿಶೇಷವಾಗಿ ಆರ್ಥಿಕವಾಗಿ ದುರ್ಬಲ ವರ್ಗದವರು, ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇರುವುದರಿಂದ, ಇಂತಹ ಚಟುವಟಿಕೆಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಸಂಬಂಧಪಟ್ಟ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯ ಸಾಧಿಸಿ, ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
2ನೇ ತ್ರೈಮಾಸಿಕ ಅವಧಿಯಲ್ಲಿ ಒಟ್ಟು 78 ಪ್ರಕರಣಗಳು ದಾಖಲಾಗಿದ್ದು ಹಾಗೂ 9 ಆರೋಪಿತರನ್ನು ಗಡಿಪಾರು ಮಾಡಲಾಗಿದೆ. 1 ಪ್ರಕರಣವು ವಿಚಾರಣೆ ಹಂತದಲ್ಲಿರುತ್ತದೆ ಎಂದು ಸಭೆಯಲ್ಲಿ ವಿವರಿಸಲಾಯಿತು.ಸಭೆಯಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ಮಹಾಂತೇಶ ಸಜ್ಜನ್, ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ರಾಜಶೇಖರಯ್ಯ ಕಾಲವಾಡಮಠ, ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ನಿರ್ವಹಣೆ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀಧರ್ ಚಿನಗುಂಡಿ ಹಾಗೂ ಅಭಿವೃದ್ಧಿ ಅಧಿಕಾರಿ ನಾಗರಾಜ ಉಪ್ಪಾರ ಇದ್ದರು.