ಕೊಪ್ಪಳ ನಗರದ ಜಿಪಂ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ)ಯ 2026-27ನೇ ಸಾಲಿನ ಮೊದಲ ಮತ್ತು ಎರಡನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಕೊಪ್ಪಳ: ಜಿಲ್ಲೆಯ ಎಲ್ಲ ಗ್ರಾಮಗಳಿಗೂ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು. ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿಗಳನ್ನು ನವೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಿ ಜನರಿಗೆ ನೀರು ಒದಗಿಸಬೇಕು ಎಂದು ಸಂಸದ ಕೆ. ರಾಜಶೇಖರ ಹಿಟ್ನಾಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಪಂ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ)ಯ 2026-27ನೇ ಸಾಲಿನ ಮೊದಲ ಮತ್ತು ಎರಡನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ತುರ್ತು ಕಾಮಗಾರಿಗಳಿಗೆ ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಕಾಮಗಾರಿಗಳಲ್ಲಿ ವಿಳಂಬ ಮಾಡುವ ಗುತ್ತಿಗೆದಾರರು ಹಾಗೂ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಅಮೃತ್ 2.0 ಯೋಜನೆಯಡಿ ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಕಾರಟಗಿ ನಗರಗಳಲ್ಲಿ ಕುಡಿಯುವ ನೀರು ಹಾಗೂ ಉದ್ಯಾನ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.

ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬರುವ ಬಡ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರೆಯಬೇಕು. ವೈದ್ಯರು ಮತ್ತು ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಔಷಧಿ ಹಾಗೂ ಮೂಲಸೌಕರ್ಯಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಳೆ ಹಾನಿಗೊಳಗಾದ ರೈತರಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮಾ ಪರಿಹಾರ ಸಕಾಲದಲ್ಲಿ ದೊರೆಯಬೇಕು. ಅಕಾಲಿಕ ಮಳೆಯಿಂದ ಹಾನಿಗೊಳಗಾದ ಬೆಳೆಗಳ ಜಂಟಿ ಸಮೀಕ್ಷೆ ತ್ವರಿತವಾಗಿ ಪೂರ್ಣಗೊಳಿಸಬೇಕು. ಜಾನುವಾರುಗಳಿಗೆ ಕಾಲುಬಾಯಿ ರೋಗ ಸೇರಿದಂತೆ ವಿವಿಧ ರೋಗಗಳ ವಿರುದ್ಧ ಶೇ.100ರಷ್ಟು ಲಸಿಕೆ ನೀಡಬೇಕು ಎಂದರು.

ಸರ್ಕಾರಿ ಶಾಲೆಗಳ ದುರಸ್ತಿ, ಶೌಚಾಲಯ ನಿರ್ಮಾಣ ಹಾಗೂ ಕಂಪ್ಯೂಟರ್ ಲ್ಯಾಬ್ ಸ್ಥಾಪನೆಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಅಂಗನವಾಡಿಗಳಲ್ಲಿ ಪೌಷ್ಟಿಕ ಆಹಾರ ವಿತರಣೆ ಸಮರ್ಪಕವಾಗಿರಬೇಕು. ವಸತಿ ಯೋಜನೆಗಳಡಿ ಅರ್ಹ ಬಡವರಿಗೆ ಮನೆ ಮತ್ತು ನಿವೇಶನ ಹಂಚಿಕೆ ಚುರುಕುಗೊಳಿಸಬೇಕು ಎಂದು ತಿಳಿಸಿದರು.

ರಸ್ತೆ ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳಬೇಕು. ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು. ಗ್ರಾಮೀಣ ಭಾಗಗಳಿಗೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕು. ಬೀದಿನಾಯಿಗಳ ಹಾವಳಿ ನಿಯಂತ್ರಣಕ್ಕೆ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ನಿರೋಧಕ ಲಸಿಕೆ ಅಭಿಯಾನ ತೀವ್ರಗೊಳಿಸಬೇಕು ಎಂದರು.

ಬರಗಾಲದಂತಹ ಪರಿಸ್ಥಿತಿ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಚೇರಿಗೆ ಸೀಮಿತವಾಗದೆ ಕ್ಷೇತ್ರ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಂಸದ ಹಿಟ್ನಾಳ ಸೂಚಿಸಿದರು.

ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಪಂ ಸಿಇಒ ವರ್ಣಿತ್ ನೇಗಿ, ದಿಶಾ ಸಮಿತಿ ಸದಸ್ಯರಾದ ಸರಸ್ವತಿ ಕೃಷ್ಣ ಇಟ್ಟಂಗಿ, ಅಂಬಣ್ಣ ನಾಯಕ, ದೊಡ್ಡಬಸವನಗೌಡ ಬಯ್ಯಾಪುರ, ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಭಾಗ್ಯನಗರಕ್ಕೂ ತುಂಗಭದ್ರಾ ನೀರು ಕೊಡಿ: ತುಂಗಭದ್ರಾ ಜಲಾಶಯ ನಿರ್ಮಾಣದ ವೇಳೆಯಲ್ಲಿ ಮುಳುಗಡೆಯಾಗಿರುವ ಸಂತ್ರಸ್ತರು ನಾವಾಗಿದ್ದೇವೆ. ನಮಗೆ ಇದುವರೆಗೂ ತುಂಗಭದ್ರಾ ನದಿಯ ನೀರು ಕುಡಿಯಲು ಲಭ್ಯವಾಗುತ್ತಿಲ್ಲ. ಈಗ ಕೊಪ್ಪಳಕ್ಕೆ ಪೂರೈಕೆಯಾಗುತ್ತಿರುವ ಯೋಜನೆಯಲ್ಲಿಯೇ ಪಾಲಿದ್ದು, ನಿತ್ಯ 3 ಗ್ಯಾಲನ್ ನೀರು ಕೊಡುವಂತೆ ಸೂಚಿಸಿ ಎಂದು ಭಾಗ್ಯನಗರ ಪಪಂ ಅಧ್ಯಕ್ಷ ರಮೇಶ ಹ್ಯಾಟಿ ಮನವಿ ಮಾಡಿದ್ದಾರೆ.

ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾಗ್ಯನಗರಕ್ಕೆ ಪೂರೈಕೆ ಮಾಡುವ ಯೋಜನೆ ಇನ್ನು ವಿಳಂವಾಗುತ್ತಿದೆ. ಈಗ ಭಾಗ್ಯನಗರದಲ್ಲಿನ 10 ಕೊಳವೆಬಾವಿಗಳು ವಿಫಲವಾಗಿವೆ. ಕೊಪ್ಪಳಕ್ಕೆ ನಿತ್ಯ 19 ಗ್ಯಾಲನ್ ನೀರು ಪೂರೈಕೆಯಾಗುತ್ತಿದೆ. ಅದರಲ್ಲಿ ಭಾಗ್ಯನಗರಕ್ಕೆ 3 ಗ್ಯಾಲನ್ ನೀರು ಕೊಡುವಂತೆ ಮನವಿ ಮಾಡಿದರು. ಸಂಸದ ರಾಜಶೇಖರ ಹಿಟ್ನಾಳ ತುರ್ತು ಕ್ರಮವಹಿಸುವಂತೆ ಸೂಚಿಸಿದರು.