ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಅ.23ರಂದು ಮತದಾನವು ಜರುಗಲಿದ್ದು, ವ್ಯವಸ್ಥಿತ, ಸುಗಮ ಹಾಗೂ ಶಾಂತಿಯುತ ಮತದಾನ ನಡೆಸಲು ಕ್ರಮ ವಹಿಸಬೇಕು.
ಕನ್ನಡಪ್ರಭ ವಾರ್ತೆ ಗದಗ
ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಅ.23ರಂದು ಮತದಾನವು ಜರುಗಲಿದ್ದು, ವ್ಯವಸ್ಥಿತ, ಸುಗಮ ಹಾಗೂ ಶಾಂತಿಯುತ ಮತದಾನ ನಡೆಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳು ಹಾಗೂ ತಾಲೂಕು ತಹಶೀಲ್ದಾರರೊಂದಿಗೆ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಚುನಾವಣಾ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು. ಜಿಲ್ಲೆಯಲ್ಲಿ 27 ಮತಗಟ್ಟೆಗಳಿದ್ದು ಅಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು. ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ಮತದಾನ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮತದಾನ ಕೇಂದ್ರದ ಒಳಗಡೆ ಆಗಮಿಸುವ ಹಾಗೂ ಕೇಂದ್ರದಿಂದ ನಿರ್ಗಮಿಸುವ ಕುರಿತು ಮಾತ್ರ ಚಿತ್ರೀಕರಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಮತದಾನ ಕೇಂದ್ರಗಳಲ್ಲಿ ವೆಬ್ಕಾಸ್ಟಿಂಗ್ ಮತ್ತು ವಿಡಿಯೋ ಕಣ್ಗಾವಲು ಸಮರ್ಪಕ ನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.ಚುನಾವಣಾ ತಹಶೀಲ್ದಾರ ಸಂತೋಷ ಹಿರೇಮಠ ಚುನಾವಣಾ ನಿಯಮಗಳು, ಮತಗಟ್ಟೆಗಳ ನಿರ್ವಹಣೆ ಹಾಗೂ ಸಿಬ್ಬಂದಿಗಳ ಜವಾಬ್ದಾರಿಗಳ ಕುರಿತು ವಿವರಿಸಿದರು.
ಈ ವೇಳೆ ಜಿಪಂ ಸಿಇಒ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಪಂ ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಡಿಡಿಎಲ್ ಆರ್. ರುದ್ರನಗೌಡ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.